BELAGAVI

ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಅಭಿವೃದ್ಧಿ ಪರ್ವ: 10 ಕೋಟಿ ವೆಚ್ಚದ ರಸ್ತೆ ಕಾಂಕ್ರೀಟಿಕರಣ ಕಾಮಗಾರಿಗೆ ಶಾಸಕ ಅಭಯ್ ಪಾಟೀಲ್ ಚಾಲನೆ

Share

ಬೆಳಗಾವಿ ದಕ್ಷಿಣ ಮತಕ್ಷೇತ್ರದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ವೇಗ ಸಿಕ್ಕಿದೆ. ಮೂರನೇ ರೈಲ್ವೆ ಗೇಟ್‌ನಿಂದ ಬೆಮ್ಕೋ ಕ್ರಾಸ್ ವರೆಗಿನ ಪ್ರಮುಖ ರಸ್ತೆಯ ಕಾಂಕ್ರೀಟಿಕರಣ ಕಾಮಗಾರಿಗೆ ಶಾಸಕ ಅಭಯ್ ಪಾಟೀಲ್ ಇಂದು ಅಧಿಕೃತವಾಗಿ ಚಾಲನೆ ನೀಡಿದರು.

ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಮೂರನೇ ರೈಲ್ವೆ ಗೇಟ್‌ನಿಂದ ಬೆಮ್ಕೋ ಕ್ರಾಸ್ ವರೆಗಿನ ರಸ್ತೆಯ ಕಾಂಕ್ರೀಟಿಕರಣ ಕಾಮಗಾರಿಯನ್ನು 10 ಕೋಟಿ ರೂಪಾಯಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿದೆ. ಇಂದು ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಶಾಸಕ ಅಭಯ್ ಪಾಟೀಲ್ ಅವರು, ಈ ಭಾಗದ ರಸ್ತೆ ಅಭಿವೃದ್ಧಿಗೆ ಒಟ್ಟು 26 ಕೋಟಿ ರೂಪಾಯಿ ಅನುದಾನದ ಅವಶ್ಯಕತೆಯಿದ್ದು, ಈಗಾಗಲೇ 22 ಕೋಟಿ ರೂಪಾಯಿ ವೆಚ್ಚದ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಎಂದರು. ಉಳಿದ 4 ಕೋಟಿ ರೂಪಾಯಿ ಅನುದಾನವನ್ನು ಶೀಘ್ರದಲ್ಲೇ ಬಿಡುಗಡೆಗೊಳಿಸಿ, ಮುಂದಿನ ಆರು ತಿಂಗಳ ಅವಧಿಯಲ್ಲಿ ಸಂಪೂರ್ಣ ಕಾಮಗಾರಿಯನ್ನು ಮುಕ್ತಾಯಗೊಳಿಸಿ ಸಾರ್ವಜನಿಕರ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದು ಭರವಸೆ ನೀಡಿದರು.

ಈ ಕಾಮಗಾರಿಯ ನಂತರ ಬೆಮ್ಕೋ ಕ್ರಾಸ್‌ನಿಂದ ಪೀರಣವಾಡಿ ವರೆಗೆ ಸುಮಾರು 12 ಕೋಟಿ ರೂಪಾಯಿ ವೆಚ್ಚದಲ್ಲಿ ರಸ್ತೆ ನಿರ್ಮಾಣ ಕಾರ್ಯ ನಡೆಯಲಿದೆ. ವಾರ್ಡ್ ನಂ. 53ರ ನಗರಸೇವಕ ರಮೇಶ್ ಮೈಲ್ಯಾಗೋಳ ಮಾತನಾಡಿ, ಅಟಲ್ ಬಿಹಾರಿ ವಾಜಪೇಯಿ ಮಾರ್ಗದ ಈ ರಸ್ತೆಯು ಖಾನಾಪುರ ಮುಖ್ಯ ರಸ್ತೆಗೆ ಸಂಪರ್ಕ ಕಲ್ಪಿಸುವ ಪ್ರಮುಖ ಹಾದಿಯಾಗಿದ್ದು, ಶಾಸಕ ಅಭಯ್ ಪಾಟೀಲ್ ಅವರ ನೇತೃತ್ವದಲ್ಲಿ ಈ ಭಾಗದ ಜನರ ಬಹುದಿನಗಳ ಬೇಡಿಕೆ ಈಡೇರುತ್ತಿದೆ ಎಂದರು. ಕಾರ್ಯಕ್ರಮದಲ್ಲಿ ಸ್ಥಳೀಯ ಮುಖಂಡರು ಹಾಗೂ ನಿವಾಸಿಗಳು ಉಪಸ್ಥಿತರಿದ್ದು, ಕಾಮಗಾರಿಗೆ ಚಾಲನೆ ನೀಡಿದ ಶಾಸಕರಿಗೆ ಕೃತಜ್ಞತೆ ಸಲ್ಲಿಸಿದರು.

Tags:

error: Content is protected !!