ಖಾನಾಪುರದ ಭೂರಣಕಿ ಶಾಲೆಯ ಪತ್ರೆಗಳು ಹಾರಿಹೋಗಿ ಉಂಟಾದ ಹಾನಿಯ ಕುರಿತು ‘ಇನ್ ನ್ಯೂಸ್’ ಬಿತ್ತರಿಸಿದ ವರದಿಗೆ ದೊಡ್ಡ ಯಶಸ್ಸು ಸಿಕ್ಕಿದೆ. ವರದಿ ಪ್ರಸಾರವಾದ ಬೆನ್ನಲ್ಲೇ ಎಚ್ಚೆತ್ತ ಶಾಸಕರು ಇಂದು ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳಿಗೆ ಮಹತ್ವದ ಸೂಚನೆ ನೀಡಿದ್ದಾರೆ.


ನಿನ್ನೆ ಸುರಿದ ಭಾರಿ ಗಾಳಿ ಮಳೆಗೆ ಖಾನಾಪುರ ತಾಲೂಕಿನ ಭೂರಣಕಿ ಗ್ರಾಮದ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಪತ್ರೆಗಳು ಸಂಪೂರ್ಣವಾಗಿ ಹಾರಿಹೋಗಿ ಲಕ್ಷಾಂತರ ರೂಪಾಯಿ ಹಾನಿಯುಂಟಾಗಿತ್ತು. ಈ ಬಗ್ಗೆ ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗುತ್ತಿರುವ ಕುರಿತು ‘ಇನ್ ನ್ಯೂಸ್’ ವಿಶೇಷ ವರದಿಯನ್ನು ಪ್ರಸಾರ ಮಾಡಿ ಅಧಿಕಾರಿಗಳ ಗಮನ ಸೆಳೆದಿತ್ತು. ವರದಿಗೆ ತಕ್ಷಣ ಸ್ಪಂದಿಸಿದ ಶಾಸಕ ವಿಠ್ಠಲ ಹಲಗೇಕರ ಅವರು, ಇಂದು ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಲ್ಲದೆ, ಸ್ಥಳದಿಂದಲೇ ಜಿಲ್ಲಾಧಿಕಾರಿ ಮೊಹಮ್ಮದ್ ರೋಶನ್ ಅವರಿಗೆ ದೂರವಾಣಿ ಕರೆ ಮಾಡಿ, ಶಾಲೆಯ ದುರಸ್ತಿ ಕಾರ್ಯವನ್ನು ತುರ್ತಾಗಿ ಕೈಗೊಳ್ಳುವಂತೆ ಮನವಿ ಮಾಡಿದರು. ಸದಾ ಸಾರ್ವಜನಿಕರ ಸಮಸ್ಯೆಗಳಿಗೆ ಧ್ವನಿಯಾಗುತ್ತಿರುವ ‘ಇನ್ ನ್ಯೂಸ್’ ಕಾರ್ಯಕ್ಕೆ ಈಗ ಗ್ರಾಮಸ್ಥರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ.


