ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಕೆಪಿಸಿಸಿ ಅಧ್ಯಕ್ಷ ಗಾದಿ ಹಾಗೂ ಮುಖ್ಯಮಂತ್ರಿ ಬದಲಾವಣೆ ಪ್ರಕ್ರಿಯೆಗಳ ಕುರಿತು ಸಚಿವ ಸತೀಶ್ ಜಾರಕಿಹೊಳಿ ಭಾರಿ ಮಹತ್ವದ ಹೇಳಿಕೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರೇ ಕೆಪಿಸಿಸಿ ಸಾರಥ್ಯವನ್ನು ಅಂತಿಮಗೊಳಿಸಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬದಲಾವಣೆ ಅಥವಾ ಮುಂದುವರಿಕೆ ಕುರಿತು ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರು ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರೊಂದಿಗೆ ಚರ್ಚಿಸಲಿದ್ದಾರೆ. ದೆಹಲಿ ಪ್ರವಾಸದ ಬಳಿಕ ರಾಜ್ಯದ ಇಬ್ಬರು ಅಗ್ರ ನಾಯಕರೇ ಒಟ್ಟಾಗಿ ಕುಳಿತು ಈ ಕುರಿತು ಅಂತಿಮ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ತಿಳಿಸಿದರು. ಕೆಪಿಸಿಸಿ ಸಾರಥ್ಯ ಯಾರಿಗೆ ಸಿಗಬೇಕು ಎಂಬುದನ್ನು ನಿರ್ಧರಿಸುವ ಸಂಪೂರ್ಣ ಜವಾಬ್ದಾರಿಯನ್ನು ಈ ಇಬ್ಬರು ನಾಯಕರಿಗೇ ಬಿಡಲಾಗುವುದು ಎಂದಿದ್ದಾರೆ.

ಇನ್ನು ಸಿದ್ದರಾಮಯ್ಯ ವಿರುದ್ಧ ಶಾಸಕರು ಸಹಿ ಸಂಗ್ರಹಿಸುತ್ತಿದ್ದಾರೆ ಎಂಬ ಪ್ರಶ್ನೆಗೆ ಇದು ಕೇವಲ ಊಹಾಪೋಹ ಮತ್ತು ಸುಳ್ಳು ಸುದ್ದಿಯಾಗಿದೆ. ಹೈಕಮಾಂಡ್ ಮಟ್ಟದಲ್ಲಿ ನಡೆದಿರುವ ಒಪ್ಪಂದದ ಪ್ರಕಾರವೇ ಎಲ್ಲ ಪ್ರಕ್ರಿಯೆಗಳು ಶಾಂತಿಯುತವಾಗಿ ನಡೆಯುತ್ತಿವೆ ಎಂದು ಸತೀಶ್ ಜಾರಕಿಹೊಳಿ ಅವರು ಸ್ಪಷ್ಟಪಡಿಸಿದ್ದಾರೆ. ದೆಹಲಿ ಮಟ್ಟದಲ್ಲಿ ಹೈಕಮಾಂಡ್ ನಾಯಕರು ತೆಗೆದುಕೊಂಡಿರುವ ನಿರ್ಧಾರದ ಬಗ್ಗೆ ಯಾರಿಗೂ ಮುಂಚಿತವಾಗಿ ಗೊತ್ತಿರಲಿಲ್ಲ. ಹೈಕಮಾಂಡ್ ಸೂಚನೆಯ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ನಿರ್ಧಾರವನ್ನು ಯಾರನ್ನೂ ಕೇಳಿ ತೆಗೆದುಕೊಂಡಿದ್ದಲ್ಲ, ಬದಲಿಗೆ ಪಕ್ಷದ ಒಪ್ಪಂದದ ಭಾಗವಾಗಿಯೇ ಎಲ್ಲವೂ ನಡೆದಿದೆ. ಸದ್ಯದಲ್ಲೇ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ವಹಿಸಿಕೊಳ್ಳಲು ಆಗಮಿಸುತ್ತಿದ್ದು, ರಾಜಕೀಯದಲ್ಲಿ ಇಂತಹ ಬದಲಾವಣೆಗಳು ಸಹಜ ಎಂದು ಅವರು ಹೇಳಿದರು.
ಇದೇ ವೇಳೆ ತೀವ್ರ ಚರ್ಚೆಗೆ ಗ್ರಾಸವಾಗಿರುವ ಹೆಚ್ಚುವರಿ ಡಿಸಿಎಂ ಹುದ್ದೆಗಳ ಸೃಷ್ಟಿಯ ಬಗ್ಗೆಯೂ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿ, ಸದ್ಯದಲ್ಲೇ ಕರೆಯಲಾಗಿರುವ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆಯ ಬಳಿಕ ಡಿಸಿಎಂ ಹುದ್ದೆಗಳ ಕುರಿತು ಅಂತಿಮ ನಿರ್ಧಾರವಾಗಲಿದೆ. ರಾಜ್ಯದಲ್ಲಿ ಎಷ್ಟು ಜನ ಉಪಮುಖ್ಯಮಂತ್ರಿಗಳಾಗುತ್ತಾರೆ ಎಂಬುದು ಆ ಸಭೆಯ ನಂತರವೇ ತಿಳಿಯಲಿದೆ. ಹೆಚ್ಚುವರಿ ಡಿಸಿಎಂ ಹುದ್ದೆಗಳು ಸೃಷ್ಟಿಯಾಗಲೂಬಹುದು ಅಥವಾ ಆಗದೆಯೂ ಇರಬಹುದು ಎಂದು ಅವರು ಮಾರ್ಮಿಕವಾಗಿ ನುಡಿದರು.
