ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನಲ್ಲಿ ಉಂಟಾಗಿರುವ ತೀವ್ರ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಕಾಲುವೆ ಮೂಲಕ ಹೆಚ್ಚುವರಿ ನೀರು ಹರಿಸುವ ಕುರಿತು ರಾಂಪುರ KBJNL ಕಚೇರಿಯಲ್ಲಿ ಮಹತ್ವದ ಸಭೆ ನಡೆಯಿತು. ಶಾಸಕರಾದ ಅಜಯ್ ಸಿಂಗ್ ಹಾಗೂ ಅಶೋಕ ಮನಗೂಳಿ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಅಧಿಕಾರಿಗಳೊಂದಿಗೆ ನೀರಿನ ಪರಿಸ್ಥಿತಿ, ರೈತರ ಸಮಸ್ಯೆಗಳು ಹಾಗೂ ಜಾನುವಾರುಗಳಿಗೆ ನೀರಿನ ಕೊರತೆ ಕುರಿತು ಸವಿಸ್ತಾರ ಚರ್ಚೆ ನಡೆಸಲಾಯಿತು. ತಾಲೂಕಿನ ಹಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಅಭಾವ ಹೆಚ್ಚಾಗುತ್ತಿರುವ ಹಿನ್ನೆಲೆ, ಜನರು ಹಾಗೂ ಜಾನುವಾರುಗಳು ಸಂಕಷ್ಟ ಅನುಭವಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಲುವೆ ಮೂಲಕ ತಕ್ಷಣ ಹೆಚ್ಚುವರಿ ನೀರು ಹರಿಸುವ ಅಗತ್ಯವಿದೆ ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು.
ಸಭೆಯ ಸಂದರ್ಭದಲ್ಲಿಯೇ ಶಾಸಕ ಅಶೋಕ ಮನಗೂಳಿ ಅವರು ಉಪ ಮುಖ್ಯಮಂತ್ರಿ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ, ಸಿಂದಗಿ ಭಾಗದ ಗಂಭೀರ ನೀರಿನ ಸಮಸ್ಯೆಯ ಕುರಿತು ವಿವರಿಸಿದರು. ರೈತರು, ಗ್ರಾಮೀಣ ಜನರು ಹಾಗೂ ಜಾನುವಾರುಗಳ ಹಿತದೃಷ್ಟಿಯಿಂದ ಕೂಡಲೇ ಹೆಚ್ಚುವರಿ ನೀರು ಬಿಡುಗಡೆ ಮಾಡುವಂತೆ ಮನವಿ ಮಾಡಿದರು.


ಇದೇ ವೇಳೆ ಅಧಿಕಾರಿಗಳಿಗೆ ನೀರು ಸರಬರಾಜು ವ್ಯವಸ್ಥೆಯನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಹಾಗೂ ಯಾವುದೇ ಗ್ರಾಮಕ್ಕೆ ನೀರಿನ ತೊಂದರೆ ಉಂಟಾಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಯಿತು. ಜನರ ಸಮಸ್ಯೆಗೆ ತ್ವರಿತ ಸ್ಪಂದನೆ ನೀಡುವ ನಿಟ್ಟಿನಲ್ಲಿ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂಬ ವಿಶ್ವಾಸವನ್ನು ಶಾಸಕರು ವ್ಯಕ್ತಪಡಿಸಿದರು.


