State

ಸೇತುವೆ ಕಾಮಗಾರಿಯಲ್ಲಿ ವಿಳಂಬ ಧೋರಣೆ ಬೇಡ: ಅಧಿಕಾರಿಗಳಿಗೆ ಸಚಿವ ಸತೀಶ್ ಜಾರಕಿಹೊಳಿ ಖಡಕ್ ವಾರ್ನಿಂಗ್

Share

ರಾಜ್ಯದಲ್ಲಿ ನಡೆಯುತ್ತಿರುವ ಸೇತುವೆ ಕಾಮಗಾರಿಗಳ ಪ್ರಗತಿ ಕುರಿತು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಇಂದು ಬೆಂಗಳೂರಿನಲ್ಲಿ ಮಹತ್ವದ ಸಭೆ ನಡೆಸಿದರು. ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳದಿದ್ದರೆ ಅಥವಾ ವಿಳಂಬ ಮಾಡಿದರೆ ಅಧಿಕಾರಿಗಳು ಮತ್ತು ಗುತ್ತಿಗೆದಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಸಚಿವರು ಎಚ್ಚರಿಸಿದ್ದಾರೆ.

ಬೆಂಗಳೂರಿನ ವಿಕಾಸಸೌಧದಲ್ಲಿಂದು ಲೋಕೋಪಯೋಗಿ ಇಲಾಖೆಯ ಉನ್ನತ ಮಟ್ಟದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ ಅವರು, ಸಾರ್ವಜನಿಕರ ಸುಗಮ ಸಂಚಾರ ಹಾಗೂ ಸುರಕ್ಷತೆಗೆ ಇಲಾಖೆ ಮೊದಲ ಆದ್ಯತೆ ನೀಡಬೇಕು ಎಂದು ಸೂಚಿಸಿದರು. ರಾಜ್ಯದ ವಿವಿಧೆಡೆ ಪ್ರಗತಿಯಲ್ಲಿರುವ ಹೊಸ ಸೇತುವೆಗಳ ನಿರ್ಮಾಣ ಹಾಗೂ ಶಿಥಿಲಾವಸ್ಥೆಯಲ್ಲಿರುವ ಹಳೆಯ ಸೇತುವೆಗಳ ದುರಸ್ತಿ ಕಾರ್ಯಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು. ಯಾವುದೇ ಕಾರಣಕ್ಕೂ ಕಾಮಗಾರಿಯ ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳಬಾರದು ಎಂದು ಸಚಿವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ಮುಖ್ಯ ಇಂಜಿನಿಯರ್‌ಗಳು ಹಾಗೂ ಕಾರ್ಯದರ್ಶಿಗಳ ಉಪಸ್ಥಿತಿಯಲ್ಲಿ ನಡೆದ ಈ ಸಭೆಯಲ್ಲಿ, ಮಳೆಗಾಲ ಆರಂಭವಾಗುವ ಮುನ್ನವೇ ಪ್ರಮುಖ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ನಿರ್ಧರಿಸಲಾಯಿತು. ಸಾರ್ವಜನಿಕ ಹಣದ ಸದ್ಬಳಕೆಯಾಗಬೇಕು ಮತ್ತು ಪ್ರತಿಯೊಂದು ಕಾಮಗಾರಿಯೂ ವೈಜ್ಞಾನಿಕವಾಗಿ, ಸುದೀರ್ಘ ಬಾಳಿಕೆ ಬರುವಂತೆ ಇರಬೇಕು ಎಂದು ಸಚಿವರು ಒತ್ತಿ ಹೇಳಿದರು. ಕಾಮಗಾರಿ ವಿಳಂಬ ಮಾಡುವ ಅಥವಾ ನಿರ್ಲಕ್ಷ್ಯ ತೋರುವ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸುವ ಎಚ್ಚರಿಕೆ ನೀಡಿದ ಸಚಿವರು, ಇತ್ತೀಚಿನ ಪ್ರಗತಿ ವರದಿಯನ್ನು ಹಿರಿಯ ತಾಂತ್ರಿಕ ಅಧಿಕಾರಿಗಳಿಂದ ಪಡೆದುಕೊಂಡು ಅಗತ್ಯ ಸಲಹೆಗಳನ್ನು ನೀಡಿದರು.

Tags:

error: Content is protected !!