ವಿಜಯಪುರ ಜಿಲ್ಲೆಯಾದ್ಯಂತ ಶನಿವಾರ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿತು. ಸುಮಾರು ನಾಲ್ಕು ಗಂಟೆಗಳ ಕಾಲ ನಿರಂತರವಾಗಿ ಸುರಿದ ಮಳೆಯಿಂದ ರಸ್ತೆಗಳಲ್ಲಿ ನೀರು ನಿಂತು ವಾಹನ ಸವಾರರು ಹಾಗೂ ಸಾರ್ವಜನಿಕರು ಪರದಾಡಿದರು.
ನಗರದ ಹಲವು ತಗ್ಗು ಪ್ರದೇಶಗಳ ಮನೆಗಳಿಗೆ ಮಳೆ ನೀರು ನುಗ್ಗಿ ನಿವಾಸಿಗಳು ಸಂಕಷ್ಟ ಅನುಭವಿಸಿದರು. ಮನೆಗಳೊಳಗೆ ನೀರು ಬಂದ ಹಿನ್ನೆಲೆಯಲ್ಲಿ ಜನರು ನೀರು ಹೊರಹಾಕಲು ಹರಸಾಹಸ ಪಟ್ಟರು. ಕಳೆದ ಕೆಲವು ದಿನಗಳಿಂದ ಬಿಸಿಲಿನ ತಾಪಕ್ಕೆ ಬಳಲುತ್ತಿದ್ದ ಜನರಿಗೆ ಮಳೆಯು ಸ್ವಲ್ಪ ನೆಮ್ಮದಿ ನೀಡಿದರೂ, ತಗ್ಗು ಪ್ರದೇಶದ ಜನರಿಗೆ ಇದು ದೊಡ್ಡ ಸಮಸ್ಯೆಯಾಯಿತು. ಹಲವು ಕಡೆ ವಾಹನ ಸಂಚಾರಕ್ಕೂ ಅಡಚಣೆ ಉಂಟಾಯಿತು.

