hubbali

ಹಿಜಾಬ್ ಆದೇಶ ಉಲ್ಲಂಘನೆ; ಜೂನ್ 1ರಿಂದ ಕೇಸರಿ ಶಾಲು ಹಂಚಿಕೆ: ಪ್ರಮೋದ್ ಮುತಾಲಿಕ್

Share

ರಾಜ್ಯದಲ್ಲಿ ಹಿಜಾಬ್ ವಿಚಾರದಲ್ಲಿ ಹೈಕೋರ್ಟ್ ನೀಡಿರುವ ಆದೇಶವನ್ನು ಉಲ್ಲಂಘಿಸಲಾಗುತ್ತಿದೆ ಎಂದು ಆರೋಪಿಸಿರುವ ಪ್ರಮೋದ್ ಮುತಾಲಿಕ್, ಮುಸ್ಲಿಮರ ತುಷ್ಟೀಕರಣಕ್ಕಾಗಿ ಸರ್ಕಾರ ಅವಕಾಶ ನೀಡುತ್ತಿದೆ ಎಂದು ಟೀಕಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಜಾಬ್ ವಿಚಾರವನ್ನು ವಿರೋಧ ಪಕ್ಷಗಳು ಗಂಭೀರವಾಗಿ ಪರಿಗಣಿಸಬೇಕು. ಆದರೆ ಇದುವರೆಗೆ ಯಾವುದೇ ಹೋರಾಟ ನಡೆಸದೇ ಕೇವಲ ಹೇಳಿಕೆ ನೀಡಿ ಸುಮ್ಮನಾಗಿರುವುದು ಸರಿಯಲ್ಲ ಎಂದು ಆಕ್ಷೇಪಿಸಿದರು.

ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ವಿಚಾರ ಮತ್ತೆ ತಲೆದೋರಿದ ಹಿನ್ನೆಲೆಯಲ್ಲಿ, ಜೂನ್ 1ರಿಂದ ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಕೇಸರಿ ಶಾಲು ಹಂಚಿಕೆ ಅಭಿಯಾನ ಆರಂಭಿಸಲಾಗುವುದು ಎಂದು ಘೋಷಿಸಿದರು.

ಅಕ್ರಮ ಬಾಂಗ್ಲಾದೇಶಿ ವಲಸಿಗರ ಬಗ್ಗೆ ಆತಂಕ ವ್ಯಕ್ತಪಡಿಸಿದ ಅವರು, ಪಶ್ಚಿಮ ಬಂಗಾಳ ಚುನಾವಣೆಯ ನಂತರ ಅನೇಕ ಬಾಂಗ್ಲಾದೇಶಿ ಮುಸ್ಲಿಮರು ದೇಶದ ವಿವಿಧ ಭಾಗಗಳಿಗೆ ಪಸರಿಸುತ್ತಿದ್ದಾರೆ. ಪಶ್ಚಿಮ ಬಂಗಾಳದಲ್ಲಿ 91 ಲಕ್ಷ ಮತಗಳನ್ನು ರದ್ದುಪಡಿಸಲಾಗಿದ್ದು, ಅದರಲ್ಲಿ ಬಹುತೇಕರು ಬಾಂಗ್ಲಾದೇಶ ಮೂಲದವರಾಗಿದ್ದಾರೆ ಎಂದು ಆರೋಪಿಸಿದರು.

ಮೊನ್ನೆ ಹುಬ್ಬಳ್ಳಿ ರೈಲ್ವೆ ಠಾಣೆಯಲ್ಲಿ ಹತ್ತು ಜನರನ್ನು ವಶಕ್ಕೆ ಪಡೆಯಲಾಗಿತ್ತು. ಅವರು ಬಿಹಾರ ಮತ್ತು ಕಲ್ಕತ್ತಾದಿಂದ ಬಂದವರು ಎಂದು ಹೇಳಿಕೊಂಡಿದ್ದಾರೆ. ಅವರ ವಿರುದ್ಧ ಮೊದಲು ಪ್ರಕರಣ ದಾಖಲಿಸಿ ತನಿಖೆ ನಡೆಸಬೇಕಾಗಿತ್ತು. ಆದರೆ ರೈಲ್ವೆ ಪೊಲೀಸರು ಅವರನ್ನು ಬಿಟ್ಟು ಕಳುಹಿಸಿರುವುದು ಅನುಮಾನಕ್ಕೆ ಕಾರಣವಾಗಿದೆ ಎಂದು ಹೇಳಿದರು.

ಈ ಕುರಿತು ಕೂಲಂಕುಷ ತನಿಖೆ ನಡೆಸಬೇಕು. ಗುಂಪು ಗುಂಪಾಗಿ ಬರುವವರನ್ನು ತಕ್ಷಣ ವಶಕ್ಕೆ ಪಡೆದು ಪರಿಶೀಲನೆ ನಡೆಸಬೇಕು. ಭಾರತ ಧರ್ಮಛತ್ರದಂತಾಗಿದ್ದು, ಇದನ್ನು ದುರುಪಯೋಗಪಡಿಸಿಕೊಳ್ಳಲು ಅವಕಾಶ ನೀಡಬಾರದು ಎಂದು ಒತ್ತಾಯಿಸಿದರು.

ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಅವರು, “ವಿರೋಧ ಪಕ್ಷದವರು ಇದ್ದಾರಾ, ಸತ್ತಿದ್ದಾರಾ ಎಂಬ ಅನುಮಾನ ಮೂಡುತ್ತಿದೆ. ಹಿಜಾಬ್ ವಿಚಾರವಾಗಲಿ, ಅಕ್ರಮ ಬಾಂಗ್ಲಾದೇಶಿ ವಲಸಿಗರ ವಿಚಾರವಾಗಲಿ ಯಾರೂ ಧ್ವನಿ ಎತ್ತುತ್ತಿಲ್ಲ. ನಿದ್ದೆಯಿಂದ ಎದ್ದು ಜನರ ಸಮಸ್ಯೆಗಳ ಬಗ್ಗೆ ಮಾತನಾಡಬೇಕು” ಎಂದು ಹೇಳಿದರು.

Tags:

error: Content is protected !!