• ದೇವರಹಿಪ್ಪರಗಿಯಲ್ಲಿ ನೂತನ ಆಸ್ಪತ್ರೆ ಉದ್ಘಾಟನೆ
• ಸಿಎಂ ಬದಲಾವಣೆ ಬಗ್ಗೆ ಪಾಟೀಲ್ ಪ್ರತಿಕ್ರಿಯೆ
• ಹೈಕಮಾಂಡ್ ಅಂಗಳದಲ್ಲಿ ನಾಯಕತ್ವದ ನಿರ್ಧಾರ
• ಖರ್ಗೆ ಸೂಚನೆಗೆ ಬದ್ಧ ಎಂದ ಸಚಿವರು

ವಿಜಯಪುರದಲ್ಲಿ ನೂತನ ಆಸ್ಪತ್ರೆ ಉದ್ಘಾಟಿಸಿದ ಸಚಿವ ಎಂ.ಬಿ. ಪಾಟೀಲ್, ರಾಜ್ಯ ರಾಜಕಾರಣದ ಬಿಸಿ ಬಿಸಿ ಚರ್ಚೆಗಳಿಗೆ ಸ್ಪಷ್ಟನೆ ನೀಡಿದ್ದಾರೆ. ಸಿಎಂ ಬದಲಾವಣೆ ವಿಚಾರವಾಗಿ ಎದ್ದಿರುವ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿರುವ ಅವರು, ಎಲ್ಲವೂ ಹೈಕಮಾಂಡ್ ಅಂಗಳದಲ್ಲಿದೆ ಎಂಬ ಸಂದೇಶ ರವಾನಿಸಿದ್ದಾರೆ.

ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಪಟ್ಟಣದಲ್ಲಿ ನೂತನವಾಗಿ ನಿರ್ಮಾಣ ಗೊಂಡಿರುವ ಸಮುದಾಯ ಆರೋಗ್ಯ ಕೇಂದ್ರವನ್ನು ಶನಿವಾರದಂದು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ಅವರು ಉದ್ಘಾಟಿಸಿದರು. ಈ ಕೇಂದ್ರವು 8 ತಿಂಗಳ ಹಿಂದೆಯೇ ನಿರ್ಮಾಣಗೊಂಡಿದ್ದರೂ, ಉದ್ಘಾಟನೆಗೊಂಡಿರಲಿಲ್ಲ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಅನುಮತಿ ಪಡೆದು ಇದೀಗ ಉದ್ಘಾಟನೆ ಮಾಡಲಾಗುತ್ತಿದೆ ಎಂದು ಸಚಿವರು ತಿಳಿಸಿದರು. ಈ ಸಂದರ್ಭದಲ್ಲಿ ಶಾಸಕ ರಾಜುಗೌಡ ಪಾಟೀಲ್ ಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು. ಈ ವೇಳೆ ಮಾತನಾಡಿದ ಸಚಿವ ಎಂ.ಬಿ.ಪಾಟೀಲ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ವಿಚಾರವಾಗಿ ಪ್ರತಿಕ್ರಿಯೆ ನೀಡಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಹಾಗೂ ತಾವೂ ಕೂಡ ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಾಗಿರುವುದಾಗಿ ಅವರು ತಿಳಿಸಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಈಗಾಗಲೇ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಸಭೆ ಇನ್ನೂ ನಿಗದಿ ಆಗಿಲ್ಲ, ಸಭೆಯಲ್ಲಿ ಈ ವಿಚಾರ ಚರ್ಚೆಯಾಗಲಿದೆ ಎಂದು ಹೇಳಿದರು.
