ಬೆಳಗಾವಿ ಮಹಾನಗರ ಪಾಲಿಕೆಯ ಪರಿಷತ್ ಸಭೆಯಲ್ಲಿ ಕೇಂದ್ರ ಸರ್ಕಾರದ ಮಹಿಳಾ ಮೀಸಲಾತಿ ವಿಚಾರವಾಗಿ ಆಡಳಿತ ಪಕ್ಷ ಬಿಜೆಪಿ ಹಾಗೂ ವಿಪಕ್ಷ ಕಾಂಗ್ರೆಸ್ ಸದಸ್ಯರ ನಡುವೆ ತೀವ್ರ ವಾಗ್ವಾದ ನಡೆದು ಕೆಲಕಾಲ ಸಭೆಯಲ್ಲಿ ಗದ್ದಲದ ವಾತಾವರಣ ನಿರ್ಮಾಣವಾಯಿತು.

ಪಾಲಿಕೆಯ ನಾಮನಿರ್ದೇಶಿತ ಸದಸ್ಯ ದಿನೇಶ್ ನಾಶಿಪುಡಿ ಮಾತನಾಡಿ, “ಕೇಂದ್ರ ಸರ್ಕಾರದ ಮಹಿಳಾ ಮೀಸಲಾತಿಗೆ ನಾವು ವಿರೋಧ ಮಾಡಿಲ್ಲ. ದೇಶದಲ್ಲಿ ಮೊದಲ ಬಾರಿಗೆ ಮಹಿಳಾ ಮೀಸಲಾತಿ ಜಾರಿಗೆ ತಂದದ್ದು ಕಾಂಗ್ರೆಸ್ ಪಕ್ಷವೇ. ಮಹಿಳಾ ಮೀಸಲಾತಿಗೆ ಆರಂಭದಲ್ಲಿ ವಿರೋಧ ವ್ಯಕ್ತಪಡಿಸಿದ್ದು ಬಿಜೆಪಿ,” ಎಂದು ಆರೋಪಿಸಿದರು. ಕ್ಷೇತ್ರ ಮರುವಿಂಗಡಣೆಯನ್ನು ನೆಪವನ್ನಾಗಿ ಮಾಡಿಕೊಂಡು ಕೇಂದ್ರ ಸರ್ಕಾರ ಮಹಿಳಾ ಮೀಸಲಾತಿ ವಿಚಾರದಲ್ಲಿ ರಾಜಕೀಯ ಮಾಡುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಈ ಹೇಳಿಕೆಗೆ ಆಡಳಿತ ಪಕ್ಷದ ಬಿಜೆಪಿ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಕಾಂಗ್ರೆಸ್ ಮಹಿಳಾ ವಿರೋಧಿ ಧೋರಣೆ ಹೊಂದಿದೆ ಎಂದು ಬಿಜೆಪಿ ಸದಸ್ಯರು ಪ್ರತಿರೋಧ ವ್ಯಕ್ತಪಡಿಸುತ್ತಿದ್ದಂತೆ ಸಭೆಯಲ್ಲಿ ಕೋಲಾಹಲ ಉಂಟಾಯಿತು. ಆಡಳಿತ ಪಕ್ಷ ಹಾಗೂ ವಿಪಕ್ಷ ಸದಸ್ಯರು ಪರಸ್ಪರ ವಾಗ್ದಾಳಿ ನಡೆಸಿ ಕೆಲಕಾಲ ಸಭೆಯ ವಾತಾವರಣ ಉದ್ವಿಗ್ನಗೊಂಡಿತು.
ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಮೇಯರ್ ಪ್ರೀತಿ ಕಾಮಕಾರ ಸಭೆಯನ್ನು 10 ನಿಮಿಷಗಳ ಕಾಲ ಮುಂದೂಡಿದರು.
