Chikkodi

ಗಾರ್ಮೆಂಟ್ಸ್‌ನಲ್ಲಿ ಆಕಸ್ಮಿಕ ಬೆಂಕಿ ಅವಘಡ; ಲಕ್ಷಾಂತರ ಮೌಲ್ಯದ ಬಟ್ಟೆಗಳು ಭಸ್ಮ

Share

ಪಟ್ಟಣದ ಗುರುವಾರ ಪೇಠ ರಸ್ತೆಯಲ್ಲಿರುವ ಪ್ರಸಿದ್ಧ ‘ಜಯಶ್ರೀ ಗಾರ್ಮೆಂಟ್ಸ್’ ಬಟ್ಟೆ ಅಂಗಡಿಯಲ್ಲಿ ಏಕಾಏಕಿ ಭೀಕರ ಬೆಂಕಿ ಅವಘಡ ಸಂಭವಿಸಿದ್ದು, ಅಂಗಡಿಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಬಟ್ಟೆ ಹಾಗೂ ಪರಿಕರಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ.

ಯಥಾಪ್ರಕಾರ ಗಾರ್ಮೆಂಟ್ಸ್‌ನಲ್ಲಿ ಕೆಲಸ ನಡೆಯುತ್ತಿದ್ದ ವೇಳೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ನೋಡನೋಡುತ್ತಿದ್ದಂತೆಯೇ ಬೆಂಕಿಯ ಜ್ವಾಲೆ ಇಡೀ ಅಂಗಡಿಯನ್ನು ಆವರಿಸಿಕೊಂಡು ಧಗಧಗನೆ ಹೊತ್ತಿ ಉರಿದಿದೆ. ಕೇವಲ ಕೆಲವೇ ನಿಮಿಷಗಳಲ್ಲಿ ಅಂಗಡಿಯ ತುಂಬಾ ದಟ್ಟವಾದ ಹೊಗೆ ಹಾಗೂ ಬೆಂಕಿ ಆವರಿಸಿದ್ದರಿಂದ ಸುತ್ತಮುತ್ತಲಿನ ಸಾರ್ವಜನಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ತಕ್ಷಣವೇ ಎಚ್ಚೆತ್ತ ಅಲ್ಲಿದ್ದ ಕಾರ್ಮಿಕರು ಹಾಗೂ ಸಿಬ್ಬಂದಿ ಹೊರಗೆ ಓಡಿ ಬಂದಿದ್ದಾರೆ. ಇದರಿಂದಾಗಿ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ವಾಹನದೊಂದಿಗೆ ಸ್ಥಳಕ್ಕೆ ಧಾವಿಸಿದರು. ಇಡೀ ಅಂಗಡಿಯನ್ನು ಬೆಂಕಿ ಆವರಿಸಿದ್ದರಿಂದ, ಜ್ವಾಲೆಯನ್ನು ನಿಯಂತ್ರಣಕ್ಕೆ ತರಲು ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸ ಪಡಬೇಕಾಯಿತು. ಸುದೀರ್ಘ ಕಾರ್ಯಾಚರಣೆಯ ನಂತರ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸುವಲ್ಲಿ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

ಈ ಘಟನೆಯು ಚಿಕ್ಕೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದ್ದು, ಬೆಂಕಿ ಅವಘಡದ ಕುರಿತು ತನಿಖೆ ಮುಂದುವರಿದಿದೆ.

Tags:

error: Content is protected !!