ಬಿಟಿಡಿಎ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳದ ಲೋಕಾಯುಕ್ತ ಅಧಿಕಾರಿಗಳ ಧೋರಣೆ ಖಂಡಿಸಿ ದಲಿತ ಸಂಘರ್ಷ ಸಮಿತಿ ಇಂದು ಬೃಹತ್ ಪ್ರತಿಭಟನೆಗೆ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಲೋಕಾಯುಕ್ತ ಕಚೇರಿ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಬಾಗಲಕೋಟೆಯ ನವನಗರದಲ್ಲಿರುವ ಜಿಲ್ಲಾ ಲೋಕಾಯುಕ್ತ ಕಚೇರಿಗೆ ದಲಿತ ಸಂಘರ್ಷ ಸಮಿತಿಯು ಮುತ್ತಿಗೆ ಹಾಕುವ ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಕಚೇರಿಯ ಸುತ್ತಲಿನ 100 ಮೀಟರ್ ವ್ಯಾಪ್ತಿಯಲ್ಲಿ ಬಿಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಬಿಟಿಡಿಎ (ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರ) ಅಧಿಕಾರಿಗಳ ವಿರುದ್ಧ ಯಾವುದೇ ಸೂಕ್ತ ಕ್ರಮ ಕೈಗೊಳ್ಳದ ಲೋಕಾಯುಕ್ತ ಅಧಿಕಾರಿಗಳ ಧೋರಣೆಯನ್ನು ಖಂಡಿಸಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿ ರಕ್ಷಿಸುವ ನಿಟ್ಟಿನಲ್ಲಿ ಸಹಾಯಕ ಆಯುಕ್ತರು ಈ ಕಠಿಣ ಆದೇಶ ಹೊರಡಿಸಿದ್ದಾರೆ. ಇಂದು ಬೆಳಗ್ಗೆ 6 ಗಂಟೆಯಿಂದ ನಾಳೆ ಬೆಳಗ್ಗೆ 6 ಗಂಟೆಯವರೆಗೆ ಒಟ್ಟು 24 ಗಂಟೆಗಳ ಕಾಲ ಬಿಎನ್‌ಎಸ್ ಸೆಕ್ಷನ್ 163 (ಹಳೆಯ ಸಿಆರ್‌ಪಿಸಿ 144) ಅಡಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರಲಿದ್ದು, ಲೋಕಾಯುಕ್ತ ಕಚೇರಿ ಸುತ್ತ ಸಾರ್ವಜನಿಕರು ಗುಂಪುಗೂಡುವುದನ್ನು ಕಡ್ಡಾಯವಾಗಿ ನಿರ್ಬಂಧಿಸಲಾಗಿದೆ. ಪ್ರತಿಭಟನೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಪೊಲೀಸರು ಕಚೇರಿ ಮುಂದೆ ಬ್ಯಾರಿಕೇಡ್‌ಗಳನ್ನು ಅಳವಡಿಸಿ, ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಿದ್ದಾರೆ. ಒಂದು ವೇಳೆ ಈ ಸರ್ಕಾರಿ ಆದೇಶವನ್ನು ಉಲ್ಲಂಘಿಸಿ ಕಾನೂನು ಕೈಗೆತ್ತಿಕೊಂಡರೆ ಕಠಿಣ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

