ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ನಡೆದಿದ್ದ ಭೀಕರ ಆರು ಜನರ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹಾಗೂ ಕಿಂಗ್ಪಿನ್ ಮಹೇಶ್ ತಳವಾರ್ನ್ನು ಪೊಲೀಸರು ಕಾಲಿಗೆ ಗುಂಡು ಹಾರಿಸಿ ಬಂಧಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಹೇಶನಿಗೆ ಚಿಕಿತ್ಸೆ ಮುಂದುವರೆದಿದೆ. ಕಳೆದ ಮೇ 29ರಂದು ಭೂ ವಿವಾದದ ಹಿನ್ನೆಲೆ ಗೋವಿಂದಪುರ ಗ್ರಾಮದಲ್ಲಿ ಆರು ಜನರನ್ನು ಹತ್ಯೆ ಮಾಡಲಾಗಿತ್ತು. ಈ ಪ್ರಕರಣದ ತನಿಖೆಗಾಗಿ ರಚಿಸಲಾಗಿದ್ದ ವಿಶೇಷ ತನಿಖಾ ತಂಡವು ಆರೋಪಿಗಳ ಪತ್ತೆ ಕಾರ್ಯದಲ್ಲಿ ತೊಡಗಿತ್ತು. ಈ ವೇಳೆ ಮಹೇಶ್ ತಳವಾರ್ ಪರಾರಿಯಾಗಲು ಯತ್ನಿಸಿ ಬಂಧನ ಕಾರ್ಯಾಚರಣೆಯ ಸಂದರ್ಭದಲ್ಲಿ ಆರೋಪಿ ಪೊಲೀಸ್ ತಂಡದ ಮೇಲೆ ಕಲ್ಲು ತೂರಾಟ ನಡೆಸಿ, ಅಧಿಕಾರಿಗಳಿಗೆ ಚಾಕುವಿನಿಂದ ಬೆದರಿಕೆ ಹಾಕಿ ದಾಳಿ ಮಾಡಲು ಮುಂದಾಗಿದ್ದಾನೆ.


ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದಿದ್ದರು. ಬಳಿಕ ಗಾಯಗೊಂಡ ಮಹೇಶ್ ತಳವಾರ್ನ್ನು ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಆತನ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾರ್ಯಾಚರಣೆ ವೇಳೆ ಚಡಚಣ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ಶೇಖರ್ ಪವಾರ್ ಹಾಗೂ ವಿಜಯಕುಮಾರ್ ಬನಸೋಡೆ ಗಾಯಗೊಂಡಿದ್ದು, ಅವರಿಗೂ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಕರಣ ಸಂಬಂಧ ಇದುವರೆಗೆ 38 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರಗಿ ಮಾಹಿತಿ ನೀಡಿದ್ದಾರೆ. ಚಡಚಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

