ರಾಜ್ಯದಲ್ಲಿ ಮಳೆಗಾಲ ಆರಂಭವಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು ಹಿರಿಯ ಅಧಿಕಾರಿಗಳು ಹಾಗೂ ಸಚಿವರ ಜಂಟಿ ಸಭೆ ನಡೆಸಿದ್ದಾರೆ.

ವಿಧಾನಸೌಧದಲ್ಲಿ ನಡೆದ ಈ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾವಾರು ಸ್ಥಿತಿಗತಿಗಳ ಪರಿಶೀಲನೆ ನಡೆಸಿದ ಸಿಎಂ, ಹೊಸ ಶೈಕ್ಷಣಿಕ ವರ್ಷದ ಅಂಗನವಾಡಿ ಮತ್ತು ಶಾಲಾ ಮಕ್ಕಳ ದಾಖಲಾತಿ ಪ್ರಕ್ರಿಯೆ ಕುರಿತೂ ಪ್ರತ್ಯೇಕ ಸಭೆ ನಡೆಸಿ ಮಹತ್ವದ ಸೂಚನೆಗಳನ್ನು ನೀಡಿದ್ದಾರೆ.


ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಶನಿವಾರ ಎಲ್ಲಾ ಜಿಲ್ಲಾಧಿಕಾರಿಗಳು, ಜಿ.ಪಂ. ಸಿಇಒಗಳು, ಎಸ್‌ಪಿಗಳು ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಮಹತ್ವದ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಮಳೆಗಾಲದ ಹಿನ್ನೆಲೆಯಲ್ಲಿ ಜಿಲ್ಲಾವಾರು ಮುನ್ನೆಚ್ಚರಿಕೆಗಳ ಕುರಿತು ಚರ್ಚಿಸಿದ ಈ ಸಭೆಯಲ್ಲಿ ಸಚಿವರಾದ ರಾಮಲಿಂಗಾರೆಡ್ಡಿ, ಕೆ.ಎಚ್. ಮುನಿಯಪ್ಪ, ಕೆ.ಜೆ. ಜಾರ್ಜ್, ಸತೀಶ ಜಾರಕಿಹೊಳಿ, ಈಶ್ವರ ಖಂಡ್ರೆ, ಎಂ.ಬಿ. ಪಾಟೀಲ, ಪ್ರಿಯಾಂಕ್ ಖರ್ಗೆ, ಕೃಷ್ಣ ಬೈರೇಗೌಡ, ಶರಣ್ ಪ್ರಕಾಶ್ ಪಾಟೀಲ, ಯು.ಟಿ. ಖಾದರ್, ಬೈರತಿ ಸುರೇಶ್, ಯತೀಂದ್ರ ಸಿದ್ದರಾಮಯ್ಯ ಹಾಗೂ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ಇದೇ ವೇಳೆ 2026-27ರ ಶೈಕ್ಷಣಿಕ ವರ್ಷ ಆರಂಭವಾಗಿರುವುದರಿಂದ ವಿದ್ಯಾರ್ಥಿಗಳು ಮತ್ತು ಅಂಗನವಾಡಿ ಮಕ್ಕಳ ದಾಖಲಾತಿ ಹಾಗೂ ಅವರ ಆರೋಗ್ಯ ಸ್ಥಿತಿಗತಿಗಳ ಕುರಿತು ಸಿಎಂ ತಮ್ಮ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಪ್ರತ್ಯೇಕ ಪರಿಶೀಲನೆ ನಡೆಸಿದರು.
