ಖಾನಾಪುರ ತಾಲೂಕಿನ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಹಳಿಯಾಳ-ಬೆಳಗಾವಿ ರಾಜ್ಯ ಹೆದ್ದಾರಿಯ ಬೀಡಿ ಟು ಲಿಂಗನಮಠ ರಸ್ತೆ ಸಂಪೂರ್ಣವಾಗಿ ಹದಗೆಟ್ಟು ಹೋಗಿದೆ. ಹಗಲು-ರಾತ್ರಿ ಎನ್ನದೆ ಸಂಚರಿಸುವ ವಾಹನ ಸವಾರರು ಹಾಗೂ ಪ್ರವಾಸಿಗರು ಜೀವ ಕೈಯಲ್ಲಿ ಹಿಡಿದು ಓಡಾಡುವ ಭೀಕರ ಸ್ಥಿತಿ ನಿರ್ಮಾಣವಾಗಿದೆ. ಆದರೆ, ಈ ಸಾರ್ವಜನಿಕರ ಪರದಾಟಕ್ಕೆ ಸಂಬಂಧಪಟ್ಟ ಅಧಿಕಾರಿಗಳಾಗಲಿ ಅಥವಾ ಜನಪ್ರತಿನಿಧಿಗಳಾಗಲಿ ಯಾವುದೇ ಕನಿಷ್ಠ ಸ್ಪಂದನೆ ನೀಡುತ್ತಿಲ್ಲ ಎಂಬ ಆಕ್ರೋಶ ತೀವ್ರಗೊಂಡಿದೆ.


ಖಾನಾಪುರ ತಾಲೂಕಿನ ಮುಖ್ಯ ರಸ್ತೆಯಾದ ಹಳಿಯಾಳ-ಬೆಳಗಾವಿ ರಾಜ್ಯ ಹೆದ್ದಾರಿಯ ಬೀಡಿ ಟು ಲಿಂಗನಮಠ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಎಲ್ಲೆಂದರಲ್ಲಿ ಬಿದ್ದಿರುವ ಬೃಹತ್ ತೆಗ್ಗು-ಗುಂಡಿಗಳಿಂದಾಗಿ ಸಾರ್ವಜನಿಕರು ಹಾಗೂ ಪ್ರವಾಸಿಗರು ಪ್ರತಿದಿನ ನರಕಯಾತನೆ ಅನುಭವಿಸುವಂತಾಗಿದೆ. ಈ ರಸ್ತೆಯಲ್ಲಿ ದ್ವಿಚಕ್ರ ವಾಹನ ಸವಾರರು, ಕಾರು, ಬಸ್ ಮತ್ತು ಟ್ರಕ್ಗಳ ಸುಗಮ ಸಂಚಾರ ಸಾಧ್ಯವೇ ಇಲ್ಲದಂತಾಗಿದ್ದು, ಅಪಘಾತಗಳು ನಿರಂತರವಾಗಿ ಸಂಭವಿಸುತ್ತಲೇ ಇವೆ. ವಿಶೇಷವಾಗಿ ರೋಗಿಗಳನ್ನು ಆಸ್ಪತ್ರೆಗೆ ಸಾಗಿಸಲು ತೀವ್ರ ಅನಾನುಕೂಲ ಉಂಟಾಗುತ್ತಿದೆ. ಪ್ರಸ್ತುತ ಮಳೆಗಾಲ ಆರಂಭವಾಗಿರುವುದರಿಂದ ರಸ್ತೆಯ ಪರಿಸ್ಥಿತಿ ಇನ್ನಷ್ಟು ಭಯಾನಕವಾಗುವ ಮುನ್ಸೂಚನೆ ಸಿಗುತ್ತಿದ್ದರೂ, ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಮೌನಕ್ಕೆ ಶರಣಾಗಿದ್ದಾರೆ ಹಾಗೂ ಕ್ಷೇತ್ರದ ಶಾಸಕರು ಕೂಡ ಇತ್ತ ಗಮನ ಹರಿಸುತ್ತಿಲ್ಲ ಎಂದು ಸಾರ್ವಜನಿಕರು ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಈಗಲಾದರೂ ಸಂಬಂಧಪಟ್ಟ ಇಲಾಖೆಗಳು ಎಚ್ಚೆತ್ತುಕೊಂಡು ಸಾರ್ವಜನಿಕರ ಸಂಕಷ್ಟಕ್ಕೆ ಮುಕ್ತಿ ನೀಡುತ್ತವೆಯೇ ಎಂಬುದನ್ನು ಕಾದು ನೋಡಬೇಕಿದೆ.

