ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಕ್ಕೀಡಾಗಿದ್ದ ಗೋವೊಂದು ಚಿಕಿತ್ಸೆ ಫಲಿಸದೇ ಮೃತಪಟ್ಟ ಬೆನ್ನಲ್ಲೇ ಬೆಳಗಾವಿಯಲ್ಲಿ ಆಕ್ರೋಶ ಭುಗಿಲೆದ್ದಿದೆ. ಮಹಾನಗರ ಪಾಲಿಕೆಯ ಗೋಶಾಲೆಯಲ್ಲಿ ಸೂಕ್ತ ವೈದ್ಯಕೀಯ ಸೌಲಭ್ಯವಿಲ್ಲದೆ ಮೂಕಪ್ರಾಣಿಗಳು ಪ್ರಾಣಬಿಡುತ್ತಿದ್ದು, ಜಿಲ್ಲಾಡಳಿತ ತಕ್ಷಣ ಎಚ್ಚೆತ್ತುಕೊಳ್ಳದಿದ್ದರೆ ಉಗ್ರ ಪ್ರತಿಭಟನೆ ನಡೆಸುವುದಾಗಿ ಗೋರಕ್ಷಕರು ಎಚ್ಚರಿಸಿದ್ದಾರೆ.


ನಿನ್ನೆ ಸಂಜೆ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ವಾಹನ ಡಿಕ್ಕಿಯಾಗಿ ತೀವ್ರ ಗಾಯಗೊಂಡಿದ್ದ ಹಸುವಿಗೆ ಗೋರಕ್ಷಕರು ರಾತ್ರಿ ವೈದ್ಯರನ್ನು ಕರೆಸಿ ಚಿಕಿತ್ಸೆ ಕೊಡಿಸಿದರಾದರೂ, ಮಧ್ಯರಾತ್ರಿ ಅದು ಕೊನೆಯುಸಿರೆಳೆದಿದೆ. ಈ ಸಾವಿಗೆ ಮಹಾನಗರ ಪಾಲಿಕೆ ಹಾಗೂ ಟೋಲ್ ನಾಕಾ ಅಧಿಕಾರಿಗಳ ಬೇಜವಾಬ್ದಾರಿಯೇ ಕಾರಣ ಎಂದು ಗೋರಕ್ಷಕರಾದ ನಿಲೇಶ್, ಪ್ರಕಾಶ್ ಲಾಡ್ವಾ, ವಿಕಿ, ಅವಧೂತ್ ನೇತೃತ್ವದ ತಂಡ ಆಕ್ರೋಶ ವ್ಯಕ್ತಪಡಿಸಿದೆ. ಬೆಳಗಾವಿ ಮಹಾನಗರ ಪಾಲಿಕೆ ವ್ಯಾಪ್ತಿಯ ಗೋಶಾಲೆಯಲ್ಲಿ ಕಾಯಂ ವೈದ್ಯರಿಲ್ಲದೆ ಗೋವುಗಳು ಸರಣಿ ಸಾವನ್ನಪ್ಪುತ್ತಿದ್ದು, ಪಾಲಿಕೆ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳು ಈ ಬಗ್ಗೆ ಗಂಭೀರ ಕ್ರಮ ಕೈಗೊಳ್ಳಬೇಕು, ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ಆಕಳು ಹಾಗೂ ಕರುಗಳ ಸಮೇತ ಜಿಲ್ಲಾಧಿಕಾರಿಗಳ ಕಚೇರಿ ಎದುರು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಖಡಕ್ ಎಚ್ಚರಿಕೆಯನ್ನು ನೀಡಿದ್ದಾರೆ.

