ಎಸ್ಐಆರ್ ಪ್ರಕ್ರಿಯೆಯನ್ನು ಹೆಚ್ಚು ಪ್ರಜಾತಾಂತ್ರಿಕ ಹಾಗೂ ಪಾರದರ್ಶಕವಾಗಿಸಬೇಕು. ನಾಗರಿಕ ಸಮಾಜದ ಹಕ್ಕೊತ್ತಾಯಗಳನ್ನು ಗಂಭೀರವಾಗಿ ಪರಿಗಣಿಸಿ ರಾಜ್ಯ ಚುನಾವಣಾ ಆಯೋಗ ಸ್ಪಷ್ಟ ಉತ್ತರ ನೀಡಬೇಕು ಎಂದು ಆಗ್ರಹಿಸಿ, ಎಸ್ಐಆರ್ ವಿರೋಧಿ ಜಾತ್ಯಾತೀತ ಪಕ್ಷಗಳ ಮುಖಂಡರು ಮಂಗಳವಾರ ಪ್ರತಿಭಟನೆ ನಡೆಸಿದರು.

ಬೆಳಗಾವಿ ನಗರದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಎಸ್ಐಆರ್ ಪ್ರಕ್ರಿಯೆಯಲ್ಲಿ ಸಾರ್ವಜನಿಕರ ಅಭಿಪ್ರಾಯಗಳಿಗೆ ಸೂಕ್ತ ಮಹತ್ವ ನೀಡಲಾಗುತ್ತಿಲ್ಲ ಎಂದು ಆರೋಪಿಸಿದರು. ಮತದಾರರ ಹಕ್ಕುಗಳನ್ನು ಕಾಪಾಡುವ ನಿಟ್ಟಿನಲ್ಲಿ ಪ್ರಕ್ರಿಯೆಯಲ್ಲಿ ಅಗತ್ಯ ಬದಲಾವಣೆಗಳನ್ನು ತರಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ತಮ್ಮ ಬೇಡಿಕೆಗಳ ಕುರಿತು ಮನವಿ ಪತ್ರ ಸಲ್ಲಿಸಿದರು.
ಚುನಾವಣಾ ಪ್ರಕ್ರಿಯೆ ನ್ಯಾಯಸಮ್ಮತ, ಪಾರದರ್ಶಕ ಮತ್ತು ಜನಪರವಾಗಿರಬೇಕು. ಮತದಾರರ ಹಕ್ಕುಗಳಿಗೆ ಧಕ್ಕೆಯಾಗದಂತೆ ಆಯೋಗ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಇನ್ನು ಮಂದಾ ನೇವಗಿ ಅವರು ಮಾತನಾಡಿ,ವಲಸೆ ಕಾರ್ಮಿಕರು ಮತ್ತು ಬಡ ಜನರ ಹಕ್ಕುಗಳ ಬಗ್ಗೆ, ವಿಶೇಷವಾಗಿ ವೋಟಿಂಗ್ ಕಾರ್ಡ್ ಪಡೆಯಲು ತೊಂದರೆ ಎದುರಿಸುತ್ತಿದ್ದು, ಜನರಿಗೆ ಇನ್ನು ಕೆಲವು ವಿಷಯಗಳ ಬಗ್ಗೆ ಸರಿಯಾದ ತಿಳುವಳಿಕೆ ಇಲ್ಲದಿರುವುದರಿಂದ, ಅವರಿಗೆ ಅಗತ್ಯ ದಾಖಲೆಗಳನ್ನು ಒದಗಿಸಲು ಮತ್ತು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಹೆಚ್ಚಿನ ಕಾಲಾವಕಾಶ ನೀಡಬೇಕೆಂದರು.
ಈ ಸಂದರ್ಭದಲ್ಲಿ ವಿವಿಧ ಜಾತ್ಯಾತೀತ ಪಕ್ಷಗಳ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
