ಭಾರತ ಕ್ರಿಕೆಟ್ ತಂಡದ ಮಾಜಿ ವೇಗಿ ಹಾಗೂ ಕರ್ನಾಟಕ ಕ್ರಿಕೆಟ್ ಸಂಸ್ಥೆಯ (KSCA) ಅಧ್ಯಕ್ಷರಾದ ವೆಂಕಟೇಶ್ ಪ್ರಸಾದ್ ಅವರು ಇಂದು ಕುಂದಾನಗರಿ ಬೆಳಗಾವಿಗೆ ಆಗಮಿಸಿದ್ದಾರೆ. ಕೆಎಸ್‌ಸಿಎ ಹಮ್ಮಿಕೊಂಡಿರುವ ಮಹತ್ವದ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ ಅವರಿಗೆ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ್ ಪಾಟೀಲ್ ಅವರು ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಬರಮಾಡಿಕೊಂಡಿದ್ದಾರೆ.

ಕರ್ನಾಟಕ ಕ್ರಿಕೆಟ್ ಸಂಸ್ಥೆಯ ವಿಶೇಷ ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮಾಜಿ ಸ್ಟಾರ್ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಜಿ ಅವರನ್ನು ಶಾಸಕ ಅಭಯ್ ಪಾಟೀಲ್ ಅವರು ಅತ್ಯಂತ ಗೌರವಪೂರ್ವಕವಾಗಿ ಸ್ವಾಗತಿಸಿದರು. ಅಂತರರಾಷ್ಟ್ರೀಯ ಮಟ್ಟದ ದಿಗ್ಗಜ ಆಟಗಾರನ ಈ ಭೇಟಿಯು ಬೆಳಗಾವಿ ನಗರಕ್ಕೆ ಹೆಮ್ಮೆಯ ವಿಷಯವಾಗಿದ್ದು, ಗಡಿ ಜಿಲ್ಲೆಯಲ್ಲಿ ಕ್ರೀಡಾ ರಂಗದ ಅಭಿವೃದ್ಧಿಗೆ ಹೊಸ ಪ್ರೇರಣೆ ಸಿಗಲಿದೆ ಎಂದು ಶಾಸಕರು ಹರ್ಷ ವ್ಯಕ್ತಪಡಿಸಿದರು. ಬೆಳಗಾವಿ ಸೇರಿದಂತೆ ಸಮಗ್ರ ಕರ್ನಾಟಕದಲ್ಲಿ ಕ್ರಿಕೆಟ್ ರಂಗ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಹಾಗೂ ಕೆಎಸ್‌ಸಿಎ ವತಿಯಿಂದ ನಡೆಯಲಿರುವ ಪತ್ರಿಕಾಗೋಷ್ಠಿ ಮತ್ತು ಕ್ರೀಡಾ ಕಾರ್ಯಕ್ರಮಗಳು ಅತ್ಯಂತ ಯಶಸ್ವಿಯಾಗಲಿ ಎಂದು ಈ ಸಂದರ್ಭದಲ್ಲಿ ಶುಭ ಹಾರೈಸಲಾಯಿತು.

