ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲ್ಲೂಕಿನ ಅನಗವಾಡಿ ಗ್ರಾಮದ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಭೀಕರ ರಸ್ತೆ ದುರಂತದಲ್ಲಿ ಬಸ್‌ನಲ್ಲಿದ್ದ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದು, ಹಲವರು ತೀವ್ರವಾಗಿ ಗಾಯಗೊಂಡಿದ್ದಾರೆ. ದೇಹದಿಂದ ಬೇರ್ಪಟ್ಟು ಬಿದ್ದ ಕೈ ಅಪಘಾತದ ಭೀಕರತೆಗೆ ಸಾಕ್ಷಿಯಾಗಿತ್ತು.
ಹುಬ್ಬಳ್ಳಿ-ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿಯ ಅನಗವಾಡಿ ಕೆಇಬಿ ಹತ್ತಿರ ಈ ಅಪಘಾತ ಸಂಭವಿಸಿದೆ. ಲಾರಿ ಚಾಲಕನ ನಿಯಂತ್ರಣ ತಪ್ಪಿ ಬಸ್‌ಗೆ ಜೋರಾಗಿ ಡಿಕ್ಕಿ ಹೊಡೆದ ಪರಿಣಾಮ, ಬಸ್‌ನ ಹಿಂಬದಿ ಸೀಟ್‌ನಲ್ಲಿ ಕುಳಿತಿದ್ದ ವಾಣಿ ದೇಸಾಯಿ ಹಾಗೂ ಶಿವಕುಮಾರ್ ಕಡ್ಲಿವಾಡ್ ಎಂಬ ಇಬ್ಬರು ಪ್ರಯಾಣಿಕರು ಮೃತಪಟ್ಟಿದ್ದಾರೆ. ಅಪಘಾತದಲ್ಲಿ ದೇಹದಿಂದ ಬೇರ್ಪಟ್ಟು ಬಿದ್ದ ಕೈ ಅಪಘಾತದ ತೀವ್ರತೆಯನ್ನು ತೋರಿಸುವಂತ್ತಿತ್ತು.
ಅಪಘಾತದಲ್ಲಿ ನಾಲ್ಕೈದು ಜನರಿಗೆ ತೀವ್ರ ಗಾಯಗಳಾಗಿದ್ದು, ತಕ್ಷಣವೇ ಪೊಲೀಸರು ಗಾಯಾಳುಗಳನ್ನು ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಬಾಗಲಕೋಟೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಅಡಿಷನಲ್ ಎಸ್ಪಿ) ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಭೀಕರ ಅಪಘಾತದ ಕುರಿತು ಬೀಳಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

