ಅಪ್ರಾಪ್ತ ವಯಸ್ಸಿನ ಮಕ್ಕಳು ವಾಹನ ಚಲಾಯಿಸಿದರೆ ವಾಹನದ ಮಾಲೀಕರಿಗೆ ೨೫ ಸಾವಿರ ರೂ. ದಂಡ ಹಾಗೂ ಮೂರು ತಿಂಗಳವರೆಗೆ ಜೈಲು ಶಿಕ್ಷೆ ವಿಧಿಸುವ ಕಾನೂನು ಜಾರಿಯಲ್ಲಿದ್ದು, ಈ ಕುರಿತು ಪಾಲಕರು ಹಾಗೂ ವಿದ್ಯಾರ್ಥಿಗಳು ಎಚ್ಚರಿಕೆ ವಹಿಸಬೇಕು ಎಂದು ಕಾಗವಾಡ ಪಿಎಸ್ಐ ರಾಘವೇಂದ್ರ ಖೊತ ತಿಳಿಸಿದರು.


ಶನಿವಾರ ಶಿರಗುಪ್ಪಿಯ ಕೆ.ಎ.ಎಲ್.ಇ ಸಂಸ್ಥೆಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಹಾಗೂ ಕ್ರೀಡಾ, ಸಾಂಸ್ಕೃತಿಕ ಮತ್ತು ಎನ್ಎಸ್ಎಸ್ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು.
ವಾಹನ ಚಲಾಯಿಸಲು ೧೮ ವರ್ಷ ಮೇಲ್ಪಟ್ಟಿರಬೇಕು ಹಾಗೂ ಆರ್ಟಿಒ ಇಲಾಖೆಯಿಂದ ಚಾಲನಾ ಪರವಾನಗಿ (ಲೈಸೆನ್ಸ್) ಪಡೆದಿರಬೇಕು. ಲೈಸೆನ್ಸ್ ಇಲ್ಲದೆ ವಾಹನ ಚಲಾಯಿಸಿದರೆ ೧೦ ಸಾವಿರ ರೂ. ದಂಡ ವಿಧಿಸಲಾಗುತ್ತದೆ. ಮದ್ಯಪಾನ ಮಾಡಿ ವಾಹನ ಚಲಾಯಿಸಿದರೂ ೧೦ ಸಾವಿರ ರೂ. ದಂಡ ಹಾಗೂ ಇತರೆ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ತಿಳಿಸಿದರು.
ವಿದ್ಯಾರ್ಥಿಗಳು ಮೊಬೈಲ್ ಬಳಕೆಯನ್ನು ಕಡಿಮೆ ಮಾಡಿ ವಿದ್ಯಾಭ್ಯಾಸದ ಕಡೆ ಹೆಚ್ಚಿನ ಗಮನ ಹರಿಸಬೇಕು. ಪೋಷಕರು ತಮ್ಮ ಮಕ್ಕಳ ಬಗ್ಗೆ ಅಪಾರ ನಿರೀಕ್ಷೆ ಹೊಂದಿರುತ್ತಾರೆ. ಉತ್ತಮ ಸಾಧನೆ ಮಾಡುವ ಮೂಲಕ ಅವರ ಕನಸುಗಳನ್ನು नನಸು ಮಾಡಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಕೆ.ಎಲ್.ಇ ಸಂಸ್ಥೆಯ ಶಿರಗುಪ್ಪಿ ಶಾಖೆಯ ಕಾರ್ಯಾಧ್ಯಕ್ಷ ಶಿವಾನಂದ ಪಾಟೀಲ, ಡಾ. ಪ್ರಭಾಕರ ಕೋರೆ ಅವರು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ದೊರೆಯಲೆಂದು ಈ ಶಿಕ್ಷಣ ಸಂಸ್ಥೆಯನ್ನು ಸ್ಥಾಪಿಸಿದ್ದಾರೆ. ವಿದ್ಯಾರ್ಥಿಗಳು ಮೊಬೈಲ್ ವ್ಯಸನ, ಅತಿವೇಗದ ವಾಹನ ಚಾಲನೆ ಹಾಗೂ ದುಷ್ಪರಿಣಾಮಕಾರಿ ಚಟುವಟಿಕೆಗಳಿಂದ ದೂರವಿದ್ದು ಶಿಕ್ಷಣದತ್ತ ಗಮನ ಹರಿಸಬೇಕು ಎಂದು ಸಲಹೆ ನೀಡಿದರು.
ಪ್ರಾಚಾರ್ಯ ಶಿವಾನಂದ ಪಾಟೀಲ ಮಾತನಾಡಿ, ಕೆ.ಎಲ್.ಇ ಸಂಸ್ಥೆಯು ರಾಜ್ಯಾದ್ಯಂತ ೩೧೭ಕ್ಕೂ ಹೆಚ್ಚು ಶಾಖೆಗಳನ್ನು ಹೊಂದಿದ್ದು, ಸುಮಾರು ೧.೫೦ ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ. ೧೮ ಸಾವಿರಕ್ಕೂ ಹೆಚ್ಚು ಶಿಕ್ಷಕರು ಹಾಗೂ ಸಿಬ್ಬಂದಿ ಸೇವೆ ಸಲ್ಲಿಸುತ್ತಿದ್ದಾರೆ. ಶಿರಗುಪ್ಪಿ ಶಾಖೆಯ ವಿದ್ಯಾರ್ಥಿಗಳು ವಿವಿಧ ಕ್ಷೇತ್ರಗಳಲ್ಲಿ ವಿಶೇಷ ಸಾಧನೆ ಮಾಡಿದ್ದು, ಇಂತಹ ಪ್ರತಿಷ್ಠಿತ ಸಂಸ್ಥೆಯಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳು ಅದೃಷ್ಟವಂತರು ಎಂದು ಹೇಳಿದರು.
ಕಾರ್ಯಕ್ರಮಕ್ಕೆ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಲಾಯಿತು. ಬಳಿಕ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ವಿಭಾಗಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಆಡಳಿತ ಮಂಡಳಿ ಸದಸ್ಯರಾದ ಈರಗೌಡ ಪಾಟೀಲ, ಸಾತಗೌಡ ಪಾಟೀಲ, ಮಾದಗೌಡ ಪಾಟೀಲ, ಪೋಷಕರು ಹಾಗೂ ಶಿಕ್ಷಕ ವೃಂದ ಉಪಸ್ಥಿತರಿದ್ದರು. ಕೆ.ಎ. ಮಾಳಿ ಸ್ವಾಗತಿಸಿದರು. ಶ್ರೀಮತಿ ಪಿ.ಎಸ್. ರತ್ತು ಹಾಗೂ ಎಂ.ಎಸ್. ಮಠಪತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಆರ್.ಡಿ. ಪವಾರ ಕಾರ್ಯಕ್ರಮ ನಿರೂಪಿಸಿದರು.
