ಪರಿಸರ ರಕ್ಷಣೆ ನಮ್ಮೆಲ್ಲರ ಕರ್ತವ್ಯ ಮತ್ತು ಇಂದಿನ ಅನಿವಾರ್ಯತೆಯಾಗಿದೆ ಎಂದು ಮಾನ್ಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಸುಭಾಷ್ ಸಂಕದ ಅವರು ಹೇಳಿದ್ದಾರೆ.


ಬೆಳಗಾವಿಯ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಹಾಗೂ ಅರಣ್ಯ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಬೆಳಗಾವಿಯ ಹೊಸ ನ್ಯಾಯಾಲಯದ ಆವರಣದಲ್ಲಿ ‘ವಿಶ್ವ ಪರಿಸರ ದಿನಾಚರಣೆ’ಯನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು. ‘ತಾಯಿಯ ಹೆಸರಿನಲ್ಲಿ ಒಂದು ಗಿಡ’ ಎಂಬ ಉದಾತ್ತ ಧ್ಯೇಯ ವಾಕ್ಯದೊಂದಿಗೆ ಸಸಿಗಳನ್ನು ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.


ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯ ಅತಿಥಿ ನ್ಯಾಯಾಧೀಶ ಸುಭಾಷ್ ಸಂಕದ ಅವರು, ಇತ್ತೀಚಿನ ದಿನಗಳಲ್ಲಿ ಎದುರಾಗುತ್ತಿರುವ ಅತಿವೃಷ್ಟಿ ಮತ್ತು ಅನಾವೃಷ್ಠಿಯಂತಹ ಪ್ರಕೃತಿ ವಿಕೋಪಗಳನ್ನು ತಡೆಯಬೇಕಾದರೆ ಗಿಡ-ಮರಗಳನ್ನು ಬೆಳೆಸುವುದು ಒಂದೇ ದಾರಿ. ಸಸಿಗಳನ್ನು ನೆಟ್ಟು ಹಾಗೇ ಬಿಡದೇ, ಅವು ಹೆಮ್ಮರವಾಗಿ ಬೆಳೆಯುವವರೆಗೂ ಜವಾಬ್ದಾರಿಯಿಂದ ಪೋಷಿಸಬೇಕು ಎಂದು ಕಿವಿಮಾತು ಹೇಳಿದರು.

ವಕೀಲರ ಸಂಘದ ಉಪಾಧ್ಯಕ್ಷರಾದ ಪವನ ಪಾಟೀಲ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಹಸಿರು ಅಭಿಯಾನದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ನ್ಯಾಯಾಧೀಶ ಕೆ.ಎನ್. ಶಿವಕುಮಾರ್ ಅವರು ಎಲ್ಲರನ್ನೂ ಆದರದಿಂದ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಬೆಳಗಾವಿ ತಾಲೂಕಿನ ಎಲ್ಲಾ ಗೌರವಾನ್ವಿತ ನ್ಯಾಯಾಧೀಶರು, ಉಪ ಅರಣ್ಯ ಸಂರಕ್ಷಣಾಧಿಕಾರಿ ಕ್ರಾಂತಿ ಎನ್., ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನಾಗರಾಜ ಬಾಳೆಹೊಸೂರು ಹಾಗೂ ವಲಯ ಅರಣ್ಯಾಧಿಕಾರಿ ಪ್ರಶಾಂತ ಎಲ್. ಗೌರಾಣಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಿ ಪರಿಸರ ಸಂರಕ್ಷಣೆಯ ಸಂಕಲ್ಪ ತೊಟ್ಟರು.
