Chikkodi

ಕಾರದಗಾದ ಹಾಸ್ಟೆಲ್ ಆವರಣದ ಜಲಾವೃತ,ಅಧಿಕಾರಿಗಳ ವಿರುದ್ಧ ಆಕ್ರೋಶ, ಉಪವಾಸ ಸತ್ಯಾಗ್ರಹದ ಎಚ್ಚರಿಕೆ

Share

ನಿಪ್ಪಾಣಿ ತಾಲೂಕಿನ ಕಾರದಗಾ ಗ್ರಾಮದಲ್ಲಿ ಸ್ಥಳೀಯ ಆಡಳಿತ ಸಂಪೂರ್ಣ ಹದಗೆಟ್ಟು ಹೋಗಿದೆ. ಚರಂಡಿ ಮತ್ತು ಮಳೆ ನೀರು ರಸ್ತೆ ಹಾಗೂ ವಿದ್ಯಾರ್ಥಿ ನಿಲಯದ ಆವರಣದಲ್ಲೇ ನಿಲ್ಲುತ್ತಿದ್ದು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ರೋಗದ ಭೀತಿಯಲ್ಲಿ ದಿನದೂಡುವಂತಾಗಿದೆ. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ಪೋಷಕರು ಮಕ್ಕಳನ್ನು ಮನೆಗೆ ಕರೆದೊಯ್ಯುತ್ತಿದ್ದು, ಮಕ್ಕಳ ಶಿಕ್ಷಣ ಕುಂಠಿತಗೊಳ್ಳುತ್ತಿದೆ. ಈ ಕುರಿತು ಒಂದು ವರದಿ ಇಲ್ಲಿದೆ ನೋಡಿ.

ಕಾರದಗಾ-ಧೋಣೆವಾಡಿ ಮುಖ್ಯ ರಸ್ತೆಯ ಸರ್ಕಾರಿ ಆಸ್ಪತ್ರೆಯ ಮುಂದಿನ ತಿರುವಿನಲ್ಲಿ ಮಳೆ ಹಾಗೂ ಚರಂಡಿ ನೀರು ಹರಿದು ಹೋಗಲು ಯಾವುದೇ ಸೂಕ್ತ ಚರಂಡಿ ವ್ಯವಸ್ಥೆ ಇಲ್ಲ. ಇದರಿಂದಾಗಿ ಇಡೀ ರಸ್ತೆ ಕೆರೆಯಂತಾಗಿ ಮಾರ್ಪಟ್ಟಿದೆ. ಇನ್ನು ತೋಟಪಟ್ಟಿಯ ಚರಂಡಿ ನೀರೆಲ್ಲ ನೇರವಾಗಿ ಬಂದು ನಿಲ್ಲುವುದು ವಿದ್ಯಾರ್ಥಿ ನಿಲಯದ ಮುಂಭಾಗದಲ್ಲೇ ಇದರಿಂದಾಗಿ ಇಡೀ ಪ್ರದೇಶ ದುರ್ವಾಸನೆಯಿಂದ ಕೂಡಿದ್ದು, ರೋಗಭೀತಿ ಎದುರಾಗಿದೆ. ಗಲೀಜು ನೀರಿನ ಕಾಟಕ್ಕೆ ಬೇಸತ್ತ ಪೋಷಕರು ತಮ್ಮ ಮಕ್ಕಳನ್ನು ಹಾಸ್ಟೆಲ್‌ನಿಂದ ಮನೆಗೆ ಕರೆದೊಯ್ಯುತ್ತಿದ್ದಾರೆ. ಹತ್ತು ದಿನಗಳ ಹಿಂದೆಯಷ್ಟೇ ತಹಶೀಲ್ದಾರ್ ಹಾಗೂ ಎ.ಇ.ಓ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರೂ, ಭರವಸೆ ಮಾತ್ರ ಈಡೇರಿಲ್ಲ ಎಂದು ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ರಾಜು ಕಿಚಡೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಧಿಕಾರಿಗಳ ಈ ಬೇಜವಾಬ್ದಾರಿತನಕ್ಕೆ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಮುಂದಿನ ನಾಲ್ಕು ದಿನಗಳಲ್ಲಿ ಈ ಗಂಭೀರ ಸಮಸ್ಯೆಯನ್ನು ಬಗೆಹರಿಸದಿದ್ದರೆ ಗ್ರಾಮ ಪಂಚಾಯಿತಿ ಎದುರು ಉಪವಾಸ ಸತ್ಯಾಗ್ರಹ ಹೂಡುವುದಾಗಿ ಮಾಜಿ ಅಧ್ಯಕ್ಷರು ಎಚ್ಚರಿಕೆ ನೀಡಿದ್ದಾರೆ.

ಒಟ್ಟಿನಲ್ಲಿ ಕಾರದಗಾ ಗ್ರಾಮದಲ್ಲಿ ರಸ್ತೆಗಳ ಮೇಲೆ ಹಾಗೂ ವಿದ್ಯಾರ್ಥಿಗಳ ವಸತಿ ನಿಲಯದ ‌ಮುಂದೆ ನೀರು ನಿಂತಿರುವುದು ಸಾರ್ವಜನಿಕರ ನಿದ್ದೆಗೆಡಿಸಿದೆ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ಈ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುತ್ತಾರಾ ಅಂತಾ ಕಾದು ನೋಡಬೇಕಿದೆ.

ಡಿ.ಕೆ.ಉಪ್ಪಾರ, ಇನ್ ನ್ಯೂಸ್ ಚಿಕ್ಕೋಡಿ

Tags:

error: Content is protected !!