ಬೆಳಗಾವಿಯ ಫಸ್ಟ್ ಗೇಟ್ ರೈಲ್ವೆ ಹಳಿ ಬಳಿ ಭೀಕರ ದುರಂತವೊಂದು ಸಂಭವಿಸಿದೆ. ರೈಲಿಗೆ ಸಿಲುಕಿ ಸುಮಾರು 30 ರಿಂದ 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸದ್ಯ ಘಟನಾ ಸ್ಥಳಕ್ಕೆ ರೈಲ್ವೆ ಪೊಲೀಸ್ ಹಾಗೂ ಟಿಳಕವಾಡಿ ಪೊಲೀಸರು ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ಬೆಳಗಾವಿ ನಗರದ ಫಸ್ಟ್ ಗೇಟ್ ರೈಲ್ವೆ ಹಳಿ ಬಳಿ ಇಂದು ಸಂಜೆ 6 ಗಂಟೆಯ ಸುಮಾರಿಗೆ ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಮೃತ ವ್ಯಕ್ತಿಯ ವಯಸ್ಸು ಅಂದಾಜು 30 ರಿಂದ 35 ವರ್ಷ ಇರಬಹುದು ಎಂದು ಸ್ಥಳೀಯರು ಅಂದಾಜಿಸಿದ್ದಾರೆ. ಘಟನೆ ನಡೆದ ತಕ್ಷಣವೇ ವಿಷಯ ತಿಳಿದು ರೈಲ್ವೆ ಪೊಲೀಸ್ ಅಧಿಕಾರಿಗಳು ಹಾಗೂ ಟಿಳಕವಾಡಿ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಕೈಗೊಂಡಿದ್ದಾರೆ. ಸದ್ಯ ಮೃತ ವ್ಯಕ್ತಿ ಯಾರು, ಯಾವ ಊರಿನವರು ಎಂಬ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ, ಪೊಲೀಸರು ಮೃತನ ಗುರುತು ಪತ್ತೆ ಹಚ್ಚುವ ಕಾರ್ಯದಲ್ಲಿ ನಿರತರಾಗಿದ್ದಾರೆ.

ಈ ಭೀಕರ ಅಪಘಾತದ ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳದಲ್ಲಿ ಸಾರ್ವಜನಿಕರು ಹಾಗೂ ಹಾದಿಹೋಕರ ದೊಡ್ಡ ಮಟ್ಟದ ಜನಜಂಗುಳಿ ನಿರ್ಮಾಣವಾಗಿತ್ತು. ಇನ್ನು ಈ ಘಟನೆಯು ಆತ್ಮಹತ್ಯೆಯೋ ಅಥವಾ ಚಲಿಸುವ ರೈಲಿನಿಂದ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಸಂಭವಿಸಿದ ದುರಂತವೋ ಎಂಬುದು ಇನ್ನು ಸ್ಪಷ್ಟವಾಗಿಲ್ಲ. ಈ ಕುರಿತು ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಸಾವು ನಿಖರ ಕಾರಣ ಏನೆಂಬುದರ ಬಗ್ಗೆ ತೀವ್ರ ತನಿಖೆ ಹಾಗೂ ಪರಿಶೀಲನೆ ನಡೆಸುತ್ತಿದ್ದಾರೆ.

