ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಗಳ ಕುರಿತು ಹಮ್ಮಿಕೊಳ್ಳಲಾಗಿದ್ದ ಮಹತ್ವದ ಪತ್ರಿಕಾಗೋಷ್ಠಿಯಲ್ಲೇ ರಾಯಬಾಗ ಶಾಸಕ ದುರ್ಯೋಧನ ಐಹೊಳೆ ಅವರು ನಿದ್ರೆಗೆ ಜಾರಿದ ಪ್ರಸಂಗವೊಂದು ಚಿಕ್ಕೋಡಿಯ ಬಿಜೆಪಿ ಕಚೇರಿಯಲ್ಲಿ ನಡೆದಿದೆ.
ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾಗಿ ಯಶಸ್ವಿಯಾಗಿ 12 ವರ್ಷಗಳನ್ನು ಪೂರೈಸಿದ ನಿಟ್ಟಿನಲ್ಲಿ, ಸರ್ಕಾರದ ಸಾಧನೆಗಳನ್ನು ಮಾಧ್ಯಮಗಳ ಮುಂದೆ ಹಂಚಿಕೊಳ್ಳಲು ಚಿಕ್ಕೋಡಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ವಿಶೇಷ ಪತ್ರಿಕಾಗೋಷ್ಠಿಯನ್ನು ಹಮ್ಮಿಕೊಳ್ಳಲಾಗಿತ್ತು.

ವೇದಿಕೆಯಲ್ಲಿದ್ದ ಮಾಜಿ ಸಚಿವೆ ಹಾಗೂ ಶಾಸಕಿ ಶಶಿಕಲಾ ಜೊಲ್ಲೆ ಅವರು ಕೇಂದ್ರ ಸರ್ಕಾರದ ಸಾಧನೆಗಳು ಮತ್ತು ನರೇಂದ್ರ ಮೋದಿ ಅವರ ಆಡಳಿತ ವೈಖರಿಯನ್ನು ಅತ್ಯಂತ ಗಂಭೀರವಾಗಿ ಮಾಧ್ಯಮಗಳಿಗೆ ವಿವರಿಸುತ್ತಿದ್ದರು. ಆದರೆ ಅವರ ಪಕ್ಕದಲ್ಲೇ ಕುಳಿತಿದ್ದ ಶಾಸಕ ದುರ್ಯೋಧನ ಐಹೊಳೆ ಅವರು ಗಂಭೀರ ವಿಚಾರಗಳ ಕಡೆಗೆ ಗಮನ ಹರಿಸದೆ, ಸುದೀರ್ಘವಾಗಿ ನಿದ್ರೆಗೆ ಜಾರಿದ್ದರು. ಪತ್ರಿಕಾಗೋಷ್ಠಿ ನಡೆಯುತ್ತಿದ್ದ ಇಡೀ ಸಮಯದಲ್ಲಿ ಅವರು ತೂಕಡಿಸುತ್ತಿದ್ದ ದೃಶ್ಯಗಳು ನೆರೆದಿದ್ದವರ ಗಮನ ಸೆಳೆದವು.
ಈ ಪತ್ರಿಕಾಗೋಷ್ಠಿಯಲ್ಲಿ ಶಾಸಕಿ ಶಶಿಕಲಾ ಜೊಲ್ಲೆ ಅವರೊಂದಿಗೆ ಮಾಜಿ ವಿಧಾನಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ, ಮಾಜಿ ಶಾಸಕ ಮಹೇಶ ಕುಮಟಳ್ಳಿ, ಚಿಕ್ಕೋಡಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ ಅಪ್ಪಾಜಿಗೋಳ ಸೇರಿದಂತೆ ಪಕ್ಷದ ಪ್ರಮುಖ ಮುಖಂಡರು ಉಪಸ್ಥಿತರಿದ್ದರು.
ಪಕ್ಷದ ಪ್ರಮುಖ ನಾಯಕರು ಗಂಭೀರವಾಗಿ ಪತ್ರಿಕಾಗೋಷ್ಠಿಯಲ್ಲಿ ತೊಡಗಿಸಿಕೊಂಡಿದ್ದಾಗ, ಜವಾಬ್ದಾರಿಯುತ ಸ್ಥಾನದಲ್ಲಿರುವ ಶಾಸಕರೊಬ್ಬರು ಬಹಿರಂಗವಾಗಿಯೇ ನಿದ್ರೆಗೆ ಜಾರಿದ್ದು ಈಗ ಸಾರ್ವಜನಿಕ ವಲಯ ಹಾಗೂ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.
