ಸಚಿವ ಸಂಪುಟ ವಿಸ್ತರಣೆಯ ಕಸರತ್ತು ತೀವ್ರಗೊಳ್ಳುತ್ತಿದ್ದಂತೆ ಇತ್ತ ಬಾಗಲಕೋಟೆಯಲ್ಲಿ ಶಾಸಕ ವಿಜಯಾನಂದ ಕಾಶಪ್ಪನವರ್ ಅವರಿಗೆ ಸಚಿವ ಸ್ಥಾನ ನೀಡಬೇಕೆಂಬ ಒತ್ತಾಯ ಜೋರಾಗಿದೆ. ಅವರ ನೂರಾರು ಅಭಿಮಾನಿಗಳು ಹಾಗೂ ಹಿತೈಷಿಗಳು ನಗರದಲ್ಲಿ ಬೃಹತ್ ಆಗ್ರಹಪೂರ್ವಕ ಪಾದಯಾತ್ರೆ ನಡೆಸುವ ಮೂಲಕ ಸರ್ಕಾರಕ್ಕೆ ತಮ್ಮ ಶಕ್ತಿ ಪ್ರದರ್ಶನ ಮಾಡಿದ್ದಾರೆ.

ಬಾಗಲಕೋಟೆ ನಗರದಲ್ಲಿಂದು ಕಾಂಗ್ರೆಸ್ ಯುವ ನಾಯಕ ಹಾಗೂ ಶಾಸಕ ವಿಜಯಾನಂದ ಕಾಶಪ್ಪನವರ್ ಅವರಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಬೇಕೆಂದು ಆಗ್ರಹಿಸಿ ಅವರ ಸ್ನೇಹಿತರು, ಹಿತೈಷಿಗಳು ಹಾಗೂ ಅಭಿಮಾನಿ ಬಳಗದಿಂದ ಬೃಹತ್ ಪಾದಯಾತ್ರೆ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿತ್ತು. ನಗರದ ಪ್ರಮುಖ ಕೇಂದ್ರವಾದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಆರಂಭವಾದ ಈ ಬೃಹತ್ ಪ್ರತಿಭಟನಾ ಮೆರವಣಿಗೆಯು ವಲ್ಲಭಭಾಯಿ ಚೌಕ್ ಮಾರ್ಗವಾಗಿ ಸಾಗಿ ಬಸವೇಶ್ವರ ವೃತ್ತ ತಲುಪಿತು. ಪಾದಯಾತ್ರೆಯುದ್ದಕ್ಕೂ ಶಾಸಕರ ಪರವಾಗಿ ಜಯಘೋಷಗಳನ್ನು ಕೂಗಿದ ಬೆಂಬಲಿಗರು, ನಂತರ ಬಸವೇಶ್ವರ ವೃತ್ತದಲ್ಲಿ ಬಹಿರಂಗ ಸಭೆ ಆಯೋಜಿಸಿ ತಮ್ಮ ಹಕ್ಕೊತ್ತಾಯವನ್ನು ಮಂಡಿಸಿದರು. ಕ್ಷೇತ್ರ ಹಾಗೂ ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಯುವ ನಾಯಕ ಕಾಶಪ್ಪನವರ್ ಅವರಿಗೆ ಈ ಬಾರಿಯ ಸಂಪುಟ ವಿಸ್ತರಣೆಯಲ್ಲಿ ಖಂಡಿತವಾಗಿಯೂ ಸಚಿವ ಸ್ಥಾನ ನೀಡಲೇಬೇಕೆಂದು ಸಭೆಯಲ್ಲಿ ಒಕ್ಕೊರಲಿನಿಂದ ಒತ್ತಾಯಿಸಲಾಯಿತು.
