ವಿಜಯಪುರ ಜಿಲ್ಲೆಯ ಬಬಲೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯ ನಂದಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಬಹುಕೋಟಿ ಹಣ ದುರುಪಯೋಗ ಪ್ರಕರಣವನ್ನು ಭೇದಿಸಿರುವ ಪೊಲೀಸರು 8 ಆರೋಪಿಗಳನ್ನು ಬಂಧಿಸಿ, ₹11.32 ಕೋಟಿಗೂ ಅಧಿಕ ಹಣವನ್ನು ವಶಪಡಿಸಕೊಳ್ಳಲಾಗಿದೆ ಎಂದು ವಿಜಯಪುರ ಎಸ್ ಪಿ ಲಕ್ಷ್ಮಣ ನಿಂಬರಗಿ ತಿಳಿಸಿದರು.

ವಿಜಯಪುರ ನಗರದಲ್ಲಿ ಮಾದ್ಯಮ ಗೋಷ್ಠಿಯಲ್ಲಿ ಮಾತನಾಡಿದ ಎಸ್ ಪಿ ಯವ್ರು ಪ್ರಕರಣ ಸಂಬಂಧ ಕಾರ್ಖಾನೆಯ ಪ್ರಧಾನ ವ್ಯವಸ್ಥಾಪಕ ಅಶೋಕ ತಿಪ್ಪರೆಡ್ಡಿ ಅವರು ನೀಡಿದ ದೂರಿನ ಮೇರೆಗೆ ಜೂನ್ 12ರಂದು ಪ್ರಕರಣ ದಾಖಲಾಗಿತ್ತು. 2020-21ರಿಂದ 2025-26ರ ಅವಧಿಯಲ್ಲಿ ಕಬ್ಬು ತೂಕ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿ ಹಾಗೂ ಸಹಚರರು ಸೇರಿ ನಕಲಿ ಟೋಕನ್‌ಗಳು ಮತ್ತು ಬೋಗಸ್ ಬಿಲ್‌ಗಳನ್ನು ಸೃಷ್ಟಿಸಿ, ಸುಮಾರು 34,490.699 ಮೆಟ್ರಿಕ್ ಟನ್ ಕಬ್ಬಿನ ಹೆಸರಿನಲ್ಲಿ ₹12,33,22,793 ಹಣವನ್ನು 91 ವಿವಿಧ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿ ಕಾರ್ಖಾನೆಗೆ ವಂಚನೆ ಎಸಗಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಪ್ರಕರಣದ ಪ್ರಮುಖ ಆರೋಪಿ ಧರೆಪ್ಪ ದುಂಡಪ್ಪ ನಾವಿ ಸೇರಿದಂತೆ ಒಟ್ಟು 8 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ವೇಳೆ ಈ ಹಿಂದೆ ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳಲ್ಲಿಯೂ ಇದೇ ರೀತಿಯ ವಂಚನೆ ನಡೆಸಿರುವ ಮಾಹಿತಿ ಲಭ್ಯವಾಗಿದೆ ಎಂದು ಪೊಲೀಸರು ತಿಳಿಸಿದರು. ಆರೋಪಿ ಧರೆಪ್ಪನಿಂದ ₹21 ಲಕ್ಷ ನಗದು, ₹4.80 ಕೋಟಿ ಬ್ಯಾಂಕ್ ಖಾತೆಯಿಂದ ಹಾಗೂ ಇತರರ ಖಾತೆಗಳಿಗೆ ವರ್ಗಾವಣೆಯಾದ ₹5.48 ಕೋಟಿ ಸೇರಿದಂತೆ ಒಟ್ಟು ₹10.50 ಕೋಟಿ ವಶಪಡಿಸಿಕೊಳ್ಳಲಾಗಿದೆ. ಜೊತೆಗೆ ಬ್ಯಾಂಕ್ ಖಾತೆಗಳಲ್ಲಿ ಇದ್ದ ₹82.07 ಲಕ್ಷ ಹಣವನ್ನು ಫ್ರೀಜ್ ಮಾಡಲಾಗಿದ್ದು, ಒಟ್ಟು ₹11.32 ಕೋಟಿ ಮೊತ್ತವನ್ನು ಪೊಲೀಸರು ವಶಕ್ಕೆ ಪಡೆದಿದ್ದಾಗಿ ತಿಳಿಸಿದರು.
ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮಣ ನಿಂಬರಗಿ, ಐಪಿಎಸ್ ಅವರ ಮಾರ್ಗದರ್ಶನದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ರಾಮನಗೌಡ ಹಟ್ಟಿ, ಡಿಎಸ್‌ಪಿ ಟಿ.ಎಸ್. ಸುಲ್ಪಿ ಹಾಗೂ ಸಿಪಿಐ ರಮೇಶ ಅವಜಿ ನೇತೃತ್ವದ ವಿಶೇಷ ತನಿಖಾ ತಂಡ ಪ್ರಕರಣವನ್ನು ಭೇದಿಸಿದೆ. ಕಡಿಮೆ ಅವಧಿಯಲ್ಲಿ ಆರೋಪಿಗಳನ್ನು ಪತ್ತೆಹಚ್ಚಿದ ತನಿಖಾ ತಂಡದ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಎಸ್‌ಪಿ ಪ್ರಶಂಸನಾ ಪತ್ರ ನೀಡಿ ಗೌರವಿಸಿದ್ದಾರೆ.
ಪ್ರಕರಣದ ಉಳಿದ ಆರೋಪಿಗಳ ಪತ್ತೆ ಮತ್ತು ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದರು.
