ರಾಜ್ಯ ಸರ್ಕಾರ ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅನುಮತಿ ನೀಡಿರುವ ಕ್ರಮವನ್ನು ವಿರೋಧಿಸಿ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇಂದು ಪ್ರತಿಭಟನೆ ನಡೆಸಿದರು. ಹಿಜಾಬ್‌ಗೆ ಪರ್ಯಾಯವಾಗಿ ವಿದ್ಯಾರ್ಥಿಗಳಿಗೆ ಕೇಸರಿ ಶಾಲು ವಿತರಿಸಲು ಮುಂದಾದ ಯತ್ನಾಳ್ ಹಾಗೂ ಅವರ ಬೆಂಬಲಿಗರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ವಿಜಯಪುರ ನಗರದಲ್ಲಿ ನಡೆಯಿತು. ಇದರಿಂದ ದರ್ಬಾರ್ ಶಿಕ್ಷಣ ಸಂಸ್ಥೆ ಸುತ್ತಮುತ್ತ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು. ಈ ಕುರಿತು ಇಲ್ಲಿದೆ ಡಿಟೇಲ್ಸ್…


ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಿರುವ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ವಿಜಯಪುರ ನಗರದ ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ವಿದ್ಯಾರ್ಥಿಗಳಿಗೆ ಕೇಸರಿ ಶಾಲು ವಿತರಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ವಿಜಯಪುರ ನಗರದ ದರ್ಬಾರ್ ಹೈ ಸ್ಕೂಲ್ ಹಾಗೂ ದರ್ಬಾರ್ ಕಾಲೇಜು ಆವರಣದ ಬಳಿ ಬೆಳಗ್ಗೆಯಿಂದಲೇ ಯತ್ನಾಳ್ ಬೆಂಬಲಿಗರು ಜಮಾಯಿಸಿದ್ದರು. ಕೈಯಲ್ಲಿ ಕೇಸರಿ ಶಾಲುಗಳನ್ನು ಹಿಡಿದು ಬಂದಿದ್ದ ಬೆಂಬಲಿಗರು ವಿದ್ಯಾರ್ಥಿಗಳಿಗೆ ಶಾಲು ವಿತರಿಸಲು ಸಿದ್ಧತೆ ನಡೆಸಿದ್ದರು. ಆದರೆ ಶಿಕ್ಷಣ ಸಂಸ್ಥೆಗಳ ಸುತ್ತಮುತ್ತ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಿದ್ದ ಪೊಲೀಸರು ಕಾರ್ಯಕ್ರಮಕ್ಕೆ ತಡೆ ನೀಡಿದರು. ಈ ವೇಳೆ ಬೆಂಬಲಿಗರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆಯಿತು.


ಇನ್ನೂ ಪೊಲೀಸರ ಜೊತೆಗೆ ವಾಗ್ವಾದ ನಡೆಯುತ್ತಿರುವಾಗಲೇ ಸ್ಥಳಕ್ಕೆ ಆಗಮಿಸಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಸರ್ಕಾರದ ನಿರ್ಧಾರವನ್ನು ಖಂಡಿಸಿದರು. ಸರ್ಕಾರದ ವಿರುದ್ಧ ಘೋಷಣೆ ಮೊಳಗಿಸಿದರು. ವಿದ್ಯಾರ್ಥಿಗಳಿಗೆ ಕೇಸರಿ ಶಾಲು ವಿತರಿಸುವ ಪ್ರಯತ್ನ ನಡೆಸುತ್ತಿದ್ದಂತೆಯೇ ಪೊಲೀಸರು ಯತ್ನಾಳ್ ಹಾಗೂ ಅವರ ಬೆಂಬಲಿಗರನ್ನು ವಶಕ್ಕೆ ಪಡೆದರು. ಈ ವೇಳೆ ಪೊಲೀಸ್ ಇಲಾಖೆಯ ವಿರುದ್ಧ ಘೋಷಣೆಗಳನ್ನು ಕೂಗಿದ ಬೆಂಬಲಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಪೊಲೀಸ್ ವಾಹನದಲ್ಲಿ ಯತ್ನಾಳ್ ಅವರನ್ನು ಕರೆದುಕೊಂಡು ಹೋಗುವ ಸಂದರ್ಭದಲ್ಲಿ ಕೆಲ ಬೆಂಬಲಿಗರು ವಾಹನದ ಮುಂದೆ ಕುಳಿತು ಪ್ರತಿಭಟನೆ ನಡೆಸಿದರು. ಪರಿಸ್ಥಿತಿ ನಿಯಂತ್ರಣಕ್ಕೆ ಸ್ವತಃ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ. ಲಕ್ಷ್ಮಣ ನಿಂಬರಗಿ ಸೇರಿದಂತೆ ಹಿರಿಯ ಅಧಿಕಾರಿಗಳು ಮುಂದಾದರು. ಬಳಿಕ ಪ್ರತಿಭಟನಾಕಾರರನ್ನು ತೆರವುಗೊಳಿಸಿ ಯತ್ನಾಳ್ ಹಾಗೂ ಬೆಂಬಲಿಗರನ್ನು ಸ್ಥಳದಿಂದ ಕರೆದೊಯ್ಯದು ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಯತ್ನಾಳ್, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿ, ಹಿಜಾಬ್ ಅನುಮತಿ ನಿರ್ಧಾರವನ್ನು ಮರುಪರಿಶೀಲಿಸಬೇಕು ಎಂದು ಆಗ್ರಹಿಸಿದರು.
ಇತ್ತ ಯಾವುದೇ ಅಹಿತಕರ ಘಟನೆ ನಡೆಯದಂತೆ ದರ್ಬಾರ್ ಶಿಕ್ಷಣ ಸಂಸ್ಥೆ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿತ್ತು. ಒಟ್ಟಾರೆ ಹಿಜಾಬ್ ವಿಚಾರವಾಗಿ ವಿಜಯಪುರದಲ್ಲಿ ನಡೆದ ಈ ಬೆಳವಣಿಗೆಯಿಂದ ರಾಜ್ಯದಲ್ಲಿ ಮತ್ತೆ ಹಿಜಾಬ್ ಹಾಗೂ ಕೇಸರಿ ವಿವಾದಗಳು ಮತ್ತೆ ಮುನ್ನಲೆಯ ಚರ್ಚೆಯ ವಿಷಯಗಳಾಗಿವೆ. ಈ ವಿವಾದ ಯಾವ ಸ್ವರೂಪ ಪಡೆದುಕೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಿದೆ.
