ಬೆಂಗಳೂರಿನ ಲೋಕಭವನದಲ್ಲಿ ನಡೆದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಪ್ರಮಾಣವಚನ ಸಮಾರಂಭದಲ್ಲಿ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿಗಳು ವಿಶೇಷ ಆಮಂತ್ರಿತರಾಗಿ ಪಾಲ್ಗೊಂಡು ನೂತನ ಸರ್ಕಾರಕ್ಕೆ ಮಂತ್ರಾಕ್ಷತೆ ನೀಡಿ ಆಶೀರ್ವದಿಸಿದರು.

ಲೋಕಭವನದಲ್ಲಿ ನಡೆದ ಅದ್ಧೂರಿ ಪದಗ್ರಹಣ ಸಮಾರಂಭದಲ್ಲಿ ಸಾನಿಧ್ಯ ವಹಿಸಿದ್ದ ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆಯ ರಾಷ್ಟ್ರೀಯ ಉಪಾಧ್ಯಕ್ಷರಾದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿಗಳು, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಶ್ರೀಮಠದ ವತಿಯಿಂದ ಗೌರವ ಶ್ರೀರಕ್ಷೆ ನೀಡಿ ಹರಸಿದರು. ಸಿಎಂ ಡಿ.ಕೆ.ಶಿವಕುಮಾರ್ ಅವರು ರಂಭಾಪುರಿ ಪೀಠದ ಶ್ರೀ ವೀರಗಂಗಾಧರ ಜಗದ್ಗುರುಗಳ ಭಾವಚಿತ್ರಕ್ಕೆ ಲೋಕಭವನದಲ್ಲೇ ನಮಸ್ಕರಿಸಿ, ಇತಿಹಾಸದಲ್ಲೇ ಮೊಟ್ಟಮೊದಲ ಬಾರಿಗೆ ಸರ್ವಧರ್ಮಗಳ ಗುರುಗಳ ಸಮ್ಮುಖದಲ್ಲಿ ಪ್ರಮಾಣವಚನ ಸ್ವೀಕರಿಸಿರುವುದು ಅತೀವ ಸಂತೋಷ ತಂದಿದೆ ಎಂದು ಶ್ರೀಗಳು ಶ್ಲಾಘಿಸಿದರು. ಇದೇ ವೇಳೆ ಬೆಳಗಾವಿಯ ಪ್ರಭಾವಿ ನಾಯಕ ಸತೀಶ್ ಜಾರಕಿಹೊಳಿ ಅವರು ಸಚಿವ ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿರುವುದಕ್ಕೆ ಹರ್ಷ ವ್ಯಕ್ತಪಡಿಸಿದ ಶ್ರೀಗಳು, ಈ ನೂತನ ಸರ್ಕಾರದಿಂದಾಗಿ ಸುವರ್ಣ ಸೌಧವಿರುವ ಬಹುದೊಡ್ಡ ಜಿಲ್ಲೆಯಾದ ಬೆಳಗಾವಿ ಸೇರಿದಂತೆ ಇಡೀ ಕರ್ನಾಟಕದ ಎಲ್ಲಾ ಭಾಗಗಳಿಗೂ ಹೆಚ್ಚಿನ ಪ್ರಗತಿ ಹಾಗೂ ಸರ್ವತೋಮುಖ ಅಭಿವೃದ್ಧಿ ಸಿಗುವಂತಾಗಲಿ ಎಂದು ಶುಭ ಹಾರೈಸಿದರು

