ಬಾಗಲಕೋಟೆ ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಜಮಖಂಡಿ ತಾಲೂಕಿನ ತುಂಗಳ ಗ್ರಾಮದಲ್ಲಿ ಭಾರಿ ಮಳೆಯಿಂದಾಗಿ ಅವಾಂತರ ಸೃಷ್ಟಿಯಾಗಿದೆ. ನಿನ್ನೆ ರಾತ್ರಿ ಸುರಿದ ಧಾರಾಕಾರ ಮಳೆಗೆ ಗ್ರಾಮದ ಹಲವು ಮನೆಗಳಿಗೆ ನೀರು ನುಗ್ಗಿದ್ದು, ರಾತ್ರಿಯಿಡೀ ಸಾರ್ವಜನಿಕರು ತೀವ್ರ ಸಂಕಷ್ಟ ಎದುರಿಸುವಂತಾಗಿದೆ.


ಜಮಖಂಡಿ ತಾಲೂಕಿನ ತುಂಗಳ ಗ್ರಾಮದಲ್ಲಿ ನಿನ್ನೆ ರಾತ್ರಿ ಸುರಿದ ನಿರಂತರ ಮಳೆಯು ಕೊಡಿಯಂತೆ ಹರಿದು ಬಂದಿದ್ದು, ಸುಮಾರು 5 ರಿಂದ 6 ಮನೆಗಳ ಒಳಗೆ ನೀರು ನುಗ್ಗಿದೆ. ಇದರಿಂದಾಗಿ ಮಲಗಲು ಜಾಗವಿಲ್ಲದೆ ವೃದ್ಧರು, ಮಹಿಳೆಯರು ಮತ್ತು ಮಕ್ಕಳು ರಾತ್ರಿಯಿಡೀ ಜಾಗರಣೆ ಮಾಡುವಂತಾಯಿತು. ದಿಢೀರನೆ ನುಗ್ಗಿದ ಮಳೆ ನೀರಿನಿಂದಾಗಿ ಮನೆಯಲ್ಲಿದ್ದ ಧಾನ್ಯಗಳು, ಬಟ್ಟೆಬರೆ ಹಾಗೂ ಗೃಹೋಪಯೋಗಿ ಸಾಮಗ್ರಿಗಳು ಸಂಪೂರ್ಣವಾಗಿ ಜಲಾವೃತಗೊಂಡು ಹಾನಿಯಾಗಿವೆ. ಸ್ಥಳೀಯ ಆಡಳಿತದ ನಿರ್ಲಕ್ಷ್ಯವೇ ಈ ಅವ್ಯವಸ್ಥೆಗೆ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿರುವ ಗ್ರಾಮಸ್ಥರು, ತಕ್ಷಣವೇ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಹಾಗೂ ಸಂತ್ರಸ್ತ ಕುಟುಂಬಗಳಿಗೆ ಸೂಕ್ತ ಪರಿಹಾರ ಕಲ್ಪಿಸಬೇಕು ಎಂದು ಕಡಕ್ ಆಗಿ ಆಗ್ರಹಿಸಿದ್ದಾರೆ.

