ಬೆಳಗಾವಿಯ ತುರಮುರಿ ಗ್ರಾಮದಲ್ಲಿರುವ ತ್ಯಾಜ್ಯ ವಿಲೇವಾರಿ ಘಟಕದಿಂದ ಗ್ರಾಮಸ್ಥರು ತೀವ್ರ ಸಂಕಷ್ಟ ಎದುರಿಸುತ್ತಿದ್ದು, ಈ ಸಮಸ್ಯೆಯನ್ನು ಶಾಶ್ವತವಾಗಿ ಬಗೆಹರಿಸುವಂತೆ ಆಗ್ರಹಿಸಿ ಇಂದು ಗ್ರಾಮದ ಮುಖಂಡರು ಹಾಗೂ ನಿವಾಸಿಗಳು ಜಿಲ್ಲಾಧಿಕಾರಿಗಳಿಗೆ ಮಹತ್ವದ ಮನವಿ ಪತ್ರ ಸಲ್ಲಿಕೆ ಮಾಡಿದ್ದಾರೆ.
ತ್ಯಾಜ್ಯ ಘಟಕದಿಂದ ಹರಡುತ್ತಿರುವ ರೋಗರುಜಿನಗಳ ಬಗ್ಗೆ ಗ್ರಾಮಸ್ಥರು ತೀವ್ರ ಆಕ್ರೋಶ ಹೊರಹಾಕಿದ್ದಾರೆ.
ಬೆಳಗಾವಿ ಗ್ರಾಮೀಣ ಭಾಗದ ತುರಮುರಿ ಗ್ರಾಮದ ತ್ಯಾಜ್ಯ ವಿಲೇವಾರಿ ಘಟಕದ ಸಮಸ್ಯೆಯು ದಿನದಿಂದ ದಿನಕ್ಕೆ ಜಟಿಲಗೊಳ್ಳುತ್ತಿದ್ದು, ಇಂದು ಗ್ರಾಮಸ್ಥರು ಜಿಲ್ಲಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ ಮನವಿ ಸಲ್ಲಿಸಿದರು.

ಈ ಹಿಂದೆ ಜಿಲ್ಲಾಡಳಿತ ನೀಡಿದ್ದ ಭರವಸೆಯಂತೆ ತ್ಯಾಜ್ಯ ಘಟಕವನ್ನು ಬೇರೆಡೆಗೆ ಸ್ಥಳಾಂತರಿಸಲು ನೆನಪೋಲೆ ನೀಡುವ ನಿಟ್ಟಿನಲ್ಲಿ ಇಂದು ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಗ್ರಾಮಸ್ಥರು ತಿಳಿಸಿದರು. ಹಸಿ ಕಸ ಮತ್ತು ಒಣ ಕಸ ವಿಂಗಡಣೆಯ ಭರವಸೆಗಳು ಕೇವಲ ಕಾಗದದ ಮೇಲಷ್ಟೇ ಉಳಿದಿದ್ದು, ಪ್ರಾಯೋಗಿಕವಾಗಿ ಯಾವುದೇ ಬದಲಾವಣೆಯಾಗಿಲ್ಲ ಎಂದು ನಿವಾಸಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಳೆದ ೨೦ ವರ್ಷಗಳಿಂದ ಈ ಕಸದ ಘಟಕದಿಂದಾಗಿ ಗ್ರಾಮದಲ್ಲಿ ದುರ್ನಾತ ಹಾಗೂ ರೋಗರುಜಿನಗಳ ಭೀತಿ ಹೆಚ್ಚಾಗಿದೆ. ಈ ಬಗ್ಗೆ ಈಗಾಗಲೇ ಹಲವು ಬಾರಿ ತನಿಖೆ ನಡೆದು ವರದಿ ಸಲ್ಲಿಕೆಯಾಗಿದ್ದರೂ ಸಹ ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಮುಖಂಡ ನಾಗರಾಜ್ ಜಾಧವ್ ಆಕ್ರೋಶ ವ್ಯಕ್ತಪಡಿಸಿದರು.ಅಕ್ರಮವಾಗಿ ನಡೆಯುತ್ತಿರುವ ಈ ಕಸದ ಘಟಕವನ್ನು ಕೂಡಲೇ ಅಲ್ಲಿಂದ ತೆರವುಗೊಳಿಸಬೇಕು, ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ಗ್ರಾಮಸ್ಥರೆಲ್ಲರೂ ಒಗೂಡಿ ಜಿಲ್ಲಾಡಳಿತದ ವಿರುದ್ಧ ಉಗ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ತುರಮುರಿ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿದ್ಧರು.
