Chikkodi

ನಮ್ಮೂರಲ್ಲಿ ಸಾರಾಯಿ ಅಂಗಡಿ ಬೇಡವೇ ಬೇಡ: ಅಬಕಾರಿ ಕಚೇರಿ ಮುಂದೆ ಸಾರಾಪುರ ಗ್ರಾಮಸ್ಥರ ತೀವ್ರ ಪ್ರತಿಭಟನೆ

Share

ನಮ್ಮೂರಿಗೆ ಸಾರಾಯಿ ಅಂಗಡಿ ಬೇಡವೇ ಬೇಡ ಇದರಿಂದ ಹಳ್ಳಿಯ ನೆಮ್ಮದಿ ಹಾಳಾಗುತ್ತಿದೆ.ಎಂದು ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಾರಾಪುರ ಗ್ರಾಮಸ್ಥರು ಚಿಕ್ಕೋಡಿ ಪಟ್ಟಣದಲ್ಲಿರುವ ಅಬಕಾರಿ ಉಪವಿಭಾಗದ ಕಚೇರಿ ಮುಂದೆ ಇಂದು ಬೃಹತ್ ಪ್ರತಿಭಟನೆ ನಡೆಸಿದರು.

ಸಾರಾಪುರ ಗ್ರಾಮದಲ್ಲಿ ನೂತನವಾಗಿ ಆರಂಭಿಸಲು ಉದ್ದೇಶಿಸಿರುವ ಅಥವಾ ಕಾರ್ಯಾಚರಿಸುತ್ತಿರುವ ಸಾರಾಯಿ ಅಂಗಡಿಯನ್ನು ತಕ್ಷಣವೇ ಬಂದ್ ಮಾಡಬೇಕು ಎಂದು ಆಗ್ರಹಿಸಿ, ಗ್ರಾಮದ ನೂರಾರು ಮಹಿಳೆಯರು ಹಾಗೂ ಪುರುಷರು ಅಬಕಾರಿ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಗ್ರಾಮಸ್ಥರು ಮಾತನಾಡಿ ಗ್ರಾಮದಲ್ಲಿ ಸಾರಾಯಿ ಅಂಗಡಿ ಇರುವುದರಿಂದ ಕುಡುಕರ ಹಾವಳಿ ಹೆಚ್ಚಾಗಿದೆ. ಇದರಿಂದಾಗಿ ಹಳ್ಳಿಯ ಶಾಂತಿ ಮತ್ತು ನೆಮ್ಮದಿ ಸಂಪೂರ್ಣವಾಗಿ ಕೆಟ್ಟುಹೋಗಿದೆ. ಮಹಿಳೆಯರು, ವಿದ್ಯಾರ್ಥಿನಿಯರು ರಸ್ತೆಯಲ್ಲಿ ಓಡಾಡದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ದಿನನಿತ್ಯದ ಕೌಟುಂಬಿಕ ಕಲಹಗಳು ಹೆಚ್ಚಾಗುತ್ತಿದ್ದು, ಬಡ ಕುಟುಂಬಗಳು ಬೀದಿಗೆ ಬೀಳುವಂತಾಗಿದೆ ಎಂದು ತೀವ್ರ ಆಕ್ರೋಶ ಹೊರಹಾಕಿದರು.

ಚಿಕ್ಕೋಡಿ ಉಪವಿಭಾಗದ ಅಬಕಾರಿ ಅಧಿಕಾರಿಗಳನ್ನು ಭೇಟಿ ಮಾಡಿದ ಪ್ರತಿಭಟನಾಕಾರರು ಮನವಿ ಪತ್ರವನ್ನು ಸಲ್ಲಿಸಿದರು. ಯಾವುದೇ ಕಾರಣಕ್ಕೂ ಸಾರಾಪುರ ಗ್ರಾಮದಲ್ಲಿ ಸಾರಾಯಿ ಮಾರಾಟಕ್ಕೆ ಅವಕಾಶ ನೀಡಬಾರದು ಮತ್ತು ತಕ್ಷಣವೇ ಈ ಅಂಗಡಿಯನ್ನು ಮುಚ್ಚಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಒಂದು ವೇಳೆ ಅಧಿಕಾರಿಗಳು ನಮ್ಮ ಬೇಡಿಕೆಗೆ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಗ್ರಾಮಸ್ಥರು ಎಚ್ಚರಿಸಿದ್ದಾರೆ.

ಪ್ರತಿಭಟನೆಯಲ್ಲಿ ಸಾರಾಪುರ ಗ್ರಾಮದ ಪ್ರಮುಖ ಮುಖಂಡರು, ಅಪಾರ ಸಂಖ್ಯೆಯ ಮಹಿಳೆಯರು ಹಾಗೂ ಯುವಕರು ಪಾಲ್ಗೊಂಡಿದ್ದರು.

Tags:

error: Content is protected !!