2016ರಲ್ಲಿ ಪತ್ನಿಯನ್ನು ಕೊಲೆ ಮಾಡಿ ಸಾಕ್ಷಿ ನಾಶಪಡಿಸಿದ ಪ್ರಕರಣದಲ್ಲಿ ಜಾಮೀನು ಪಡೆದು ಪರಾರಿಯಾಗಿದ್ದ ಆರೋಪಿಗೆ ವಿಜಯಪುರ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ₹1 ಲಕ್ಷ ದಂಡ ವಿಧಿಸಿದೆ. ವಿಜಯಪುರ ನಗರದ ಜಲನಗರ ಪೊಲೀಸ್ ಠಾಣೆಯ ಗುನ್ನಾ ಸಂಖ್ಯೆ 109/2016ರಡಿ ದಾಖಲಾಗಿದ್ದ ಪ್ರಕರಣದಲ್ಲಿ ಶಿವಶಕ್ತಿ ನಗರದ ರಫೀಕ್ ದಸ್ತಗೀರಸಾಬ ಬಳಗಾನೂರ ತನ್ನ ಪತ್ನಿಯನ್ನು ಕೊಲೆ ಮಾಡಿ ಸಾಕ್ಷಿ ನಾಶಪಡಿಸಿದ ಆರೋಪ ಎದುರಿಸುತ್ತಿದ್ದ. ಜಾಮೀನು ಪಡೆದು ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು 2026ರ ಜನವರಿಯಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ವಿಜಯಪುರದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ ₹1 ಲಕ್ಷ ದಂಡ ವಿಧಿಸಿ ತೀರ್ಪು ನೀಡಿದೆ.

