ಬೆಳಗಾವಿ: ಯುವಜನರು ಮಾದಕ ವಸ್ತುಗಳ ವ್ಯಸನದಿಂದ ದೂರವಿದ್ದು, ಶಿಕ್ಷಣ, ಶಿಸ್ತು ಹಾಗೂ ಉತ್ತಮ ಸಂಸ್ಕಾರಗಳನ್ನು ಅಳವಡಿಸಿಕೊಳ್ಳುವ ಮೂಲಕ ತಮ್ಮ ಭವಿಷ್ಯವನ್ನು ಉಜ್ವಲಗೊಳಿಸಬೇಕು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಬೆಳಗಾವಿಯ ನಗರದ ಮಹಾಂತೇಶ ನಗರದ ಸಂಗೊಳ್ಳಿ ರಾಯಣ್ಣ ಕಾಲೇಜಿನಲ್ಲಿ ಬೆಳಗಾವಿ ನಗರ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಡ್ರಗ್ಸ್ ವ್ಯಸನ ಮುಕ್ತ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಮಾದಕ ವಸ್ತುಗಳ ವ್ಯಸನವು ವ್ಯಕ್ತಿಯ ಆರೋಗ್ಯ, ಶಿಕ್ಷಣ, ಕುಟುಂಬ ಮತ್ತು ಸಮಾಜದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಕ್ಷಣಿಕ ಆಕರ್ಷಣೆಗೆ ಒಳಗಾಗದೆ ವಿದ್ಯಾರ್ಥಿಗಳು ತಮ್ಮ ಗುರಿಗಳತ್ತ ಗಮನಹರಿಸಬೇಕು. ಸಮಾಜದಿಂದ ಡ್ರಗ್ಸ್ ಪಿಡುಗನ್ನು ನಿರ್ಮೂಲನೆ ಮಾಡಲು ಪೊಲೀಸ್ ಇಲಾಖೆ, ಶಿಕ್ಷಣ ಸಂಸ್ಥೆಗಳು, ಪೋಷಕರು ಹಾಗೂ ಸಾರ್ವಜನಿಕರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು.
ಯುವಕರು ದೇಶದ ಅಮೂಲ್ಯ ಸಂಪತ್ತಾಗಿದ್ದು, ಅವರ ಶಕ್ತಿ ಮತ್ತು ಸಾಮರ್ಥ್ಯವನ್ನು ಸಕಾರಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಆರೋಗ್ಯವಂತ ಹಾಗೂ ವ್ಯಸನಮುಕ್ತ ಸಮಾಜ ನಿರ್ಮಿಸಲು ಸಾಧ್ಯ ಎಂದು ಸಚಿವರು ಹೇಳಿದರು.
ಯುವಕರು ದೇಶದ ಅಮೂಲ್ಯ ಸಂಪತ್ತಾಗಿದ್ದು, ಅವರ ಶಕ್ತಿ ಮತ್ತು ಸಾಮರ್ಥ್ಯವನ್ನು ಸಕಾರಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಆರೋಗ್ಯವಂತ ಹಾಗೂ ವ್ಯಸನಮುಕ್ತ ಸಮಾಜ ನಿರ್ಮಿಸಲು ಸಾಧ್ಯ ಎಂದು ಸಚಿವರು ಹೇಳಿದರು.ಸಂಗೊಳ್ಳಿ ರಾಯಣ್ಣ ಕಾಲೇಜಿನಲ್ಲಿ ಇಂತಹ ಮಹತ್ವದ ಜಾಗೃತಿ ಕಾರ್ಯಕ್ರಮ ನಡೆಯುತ್ತಿರುವುದು ಸಂತಸದ ಸಂಗತಿಯಾಗಿದೆ. ಶಿಕ್ಷಣದ ಜೊತೆಗೆ ಉತ್ತಮ ಮೌಲ್ಯಗಳನ್ನು ಬೆಳೆಸಿಕೊಂಡು ಮಾದಕ ವಸ್ತುಗಳಂತಹ ದುಶ್ಚಟಗಳಿಂದ ದೂರವಿದ್ದು ವಿದ್ಯಾರ್ಥಿಗಳು ಉತ್ತಮ ನಾಗರಿಕರಾಗಿ ರೂಪುಗೊಳ್ಳಬೇಕು ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಮೊಹಮ್ಮದ್ ರೋಶನ್ ಮಾತನಾಡಿ, ದುಶ್ಚಟಗಳನ್ನು ಹಿಂದೆ ಸಮಾಜ ಮತ್ತು ಪೋಷಕರು ಎಚ್ಚರಿಕೆಯಿಂದ ತಡೆಯುತ್ತಿದ್ದರು. ಆದರೆ ಈಗ ಸಿಗರೇಟ್ ಸೇವನೆಯಂತಹ ಅಭ್ಯಾಸಗಳನ್ನು ಸಾಮಾನ್ಯವೆಂದು ಪರಿಗಣಿಸುವ ಮನೋಭಾವ ಬೆಳೆಯುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಯುವಕರು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ನಗರ ಪೊಲೀಸ್ ಆಯುಕ್ತ ಭೂಷಣ ಗುಲಾಬರಾವ್ ಬೊರಸೆ ಮಾತನಾಡಿ, ದೇಶದಲ್ಲಿ ಅಂದಾಜು 18 ಕೋಟಿ ಹಾಗೂ ಕರ್ನಾಟಕದಲ್ಲಿ ಸುಮಾರು 17 ಲಕ್ಷ ಮಂದಿ ಮಾದಕ ವಸ್ತುಗಳ ವ್ಯಸನದ ಸಮಸ್ಯೆಗೆ ಒಳಗಾಗಿದ್ದಾರೆ ಎಂದು ಹೇಳಿದರು. ರಾಜ್ಯ ಸರ್ಕಾರದ ಡ್ರಗ್ಸ್ ವಿರೋಧಿ ಅಭಿಯಾನಕ್ಕೆ ಚಾಲನೆ ನೀಡಲಾಗಿದ್ದು, ನಗರ ಮಟ್ಟದಲ್ಲಿ ಆರಂಭಿಸಿರುವ ಜಾಗೃತಿ ಕಾರ್ಯಕ್ರಮವನ್ನು ಮುಂದಿನ ದಿನಗಳಲ್ಲಿ ತಾಲೂಕು ಮಟ್ಟಕ್ಕೂ ವಿಸ್ತರಿಸಲಾಗುವುದು ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಮಾತನಾಡಿ, ಡ್ರಗ್ಸ್ ವಿರುದ್ಧದ ಹೋರಾಟಕ್ಕೆ ಸಮಾಜದ ಎಲ್ಲ ವರ್ಗಗಳ ಸಹಕಾರ ಅಗತ್ಯವಾಗಿದೆ. ಇದನ್ನು ನಿಯಂತ್ರಿಸುವುದು ಕೇವಲ ಪೊಲೀಸ್ ಇಲಾಖೆಯ ಜವಾಬ್ದಾರಿಯಲ್ಲ; ಪೋಷಕರು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಕೈಜೋಡಿಸಿದಾಗ ಮಾತ್ರ ಪರಿಣಾಮಕಾರಿ ತಡೆ ಸಾಧ್ಯ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ “ಬೇಡ ಬ್ರೋ” ಹಾಗೂ “ರೈಸ್” ಅಭಿಯಾನದ ಸಾಕ್ಷ್ಯಚಿತ್ರಗಳನ್ನು ಪ್ರದರ್ಶಿಸಿ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಶಾಸಕ ಆಸೀಫ್ ಸೇಠ್, ಜಿಲ್ಲಾಧಿಕಾರಿ ಮೊಹಮ್ಮದ್ ರೋಶನ್, ನಗರ ಪೊಲೀಸ್ ಆಯುಕ್ತ ಭೂಷಣ ಗುಲಾಬರಾವ್ ಬೊರಸೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಕೆ. ತ್ಯಾಗರಾಜ, ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
