Bailahongala

ಸಂಪಗಾವಿಯಲ್ಲಿ ಬಸ್ ಸೌಲಭ್ಯಕ್ಕೆ ಆಗ್ರಹ: ವಿದ್ಯಾರ್ಥಿಗಳಿಂದ ದಿಢೀರ್ ರಸ್ತೆ ತಡೆ ಪ್ರತಿಭಟನೆ

Share

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸಂಪಗಾವಿ ಗ್ರಾಮದಲ್ಲಿ ಬಸ್‌ಗಳ ಕೊರತೆ ಖಂಡಿಸಿ ನೂರಾರು ವಿದ್ಯಾರ್ಥಿಗಳು ರಸ್ತೆ ತಡೆದು ದಿಢೀರ್ ಪ್ರತಿಭಟನೆ ನಡೆಸಿದ್ದಾರೆ. ಕಳೆದ ಕೆಲವು ದಿನಗಳಿಂದ ಸಮರ್ಪಕ ಸಾರಿಗೆ ವ್ಯವಸ್ಥೆ ಇಲ್ಲದೆ ಆಕ್ರೋಶಗೊಂಡ ವಿದ್ಯಾರ್ಥಿಗಳು, ಸಾರಿಗೆ ಇಲಾಖೆಯ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ತಿಗಡಿ ರಸ್ತೆಯ ಮೂಲಕ ಸುತ್ತಮುತ್ತಲಿನ ಹಲವು ಗ್ರಾಮಗಳಿಂದ ನೂರಾರು ವಿದ್ಯಾರ್ಥಿಗಳು ಸಂಪಗಾವಿಯ ಪ್ರೌಢಶಾಲೆ ಹಾಗೂ ಕಾಲೇಜುಗಳಿಗೆ ಪ್ರತಿದಿನ ಆಗಮಿಸುತ್ತಾರೆ. ಆದರೆ ಕಳೆದ ಮೂರ್ನಾಲ್ಕು ದಿನಗಳಿಂದ ಸಮರ್ಪಕವಾಗಿ ಬಸ್ ವ್ಯವಸ್ಥೆ ಇಲ್ಲದ ಕಾರಣ, ಒಂದೇ ಬಸ್‌ನಲ್ಲಿ ಸುಮಾರು 100ರಿಂದ 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ತೀರಾ ಅಪಾಯಕಾರಿಯಾಗಿ ಪ್ರಯಾಣಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಕುರಿತು ಸಾರಿಗೆ ಇಲಾಖೆಯ ಸಂಬಂಧಪಟ್ಟ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಶಾಶ್ವತ ಪರಿಹಾರ ದೊರೆತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ವಿದ್ಯಾರ್ಥಿಗಳು ಮತ್ತು ಬಸ್ ಚಾಲಕರ ನಡುವೆ ಪ್ರತಿಭಟನೆ ವೇಳೆ ತೀವ್ರ ಮಾತಿನ ಚಕಮಕಿ ಕೂಡ ನಡೆದಿದೆ.

ವಿದ್ಯಾರ್ಥಿಗಳ ಪ್ರತಿಭಟನೆಯ ಹಿನ್ನೆಲೆಯಲ್ಲಿ IN NEWS BELAGAVI ವರದಿಗಾರರು ಬೈಲಹೊಂಗಲ ಡಿಪೋ ಮ್ಯಾನೇಜರ್ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಮಾಹಿತಿ ಪಡೆದಿದ್ದಾರೆ. ಈ ವೇಳೆ ಮಾತನಾಡಿದ ಅಧಿಕಾರಿಗಳು, ವಿದ್ಯಾರ್ಥಿಗಳು ಲಿಖಿತವಾಗಿ ಪತ್ರವೊಂದನ್ನು ಬರೆದುಕೊಟ್ಟರೆ ಅದನ್ನು ಮೇಲಿನ ಅಧಿಕಾರಿಗಳ ಗಮನಕ್ಕೆ ತಂದು ಶೀಘ್ರದಲ್ಲೇ ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸಿಕೊಡುವುದಾಗಿ ಭರವಸೆ ನೀಡಿದ್ದಾರೆ. ಸದ್ಯ ಸಾರಿಗೆ ಅಧಿಕಾರಿಗಳು ನೀಡಿದ ಈ ಭರವಸೆ ಕೇವಲ ಮಾತಿಗೆ ಸೀಮಿತವಾಗುತ್ತದೆಯೇ ಅಥವಾ ವಿದ್ಯಾರ್ಥಿಗಳ ಸಮಸ್ಯೆಗೆ ಶೀಘ್ರದಲ್ಲೇ ಮುಕ್ತಿ ಸಿಗಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.

Tags:

error: Content is protected !!