ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ಚಿಕ್ಕೋಡಿ ನಿಪ್ಪಾಣಿ ತಾಲೂಕಿನ ಕೃಷ್ಣಾ ನದಿ ತೀರದ ಜನರಲ್ಲಿ ಮತ್ತೆ ಪ್ರವಾಹದ ಆತಂಕ ಶುರುವಾಗಿದೆ.

ಮಹಾರಾಷ್ಟ್ರದ ಜಲಾನಯನ ಪ್ರದೇಶಗಳಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ, ಇಂದು ಕಲ್ಲೋಳ ಗ್ರಾಮದ ಬಳಿ ಕೃಷ್ಣಾ ನದಿಗೆ 70 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಪರಿಣಾಮವಾಗಿ ನದಿಯಲ್ಲಿ ಇಂದು ಒಂದೇ ದಿನ 2 ಅಡಿಯಷ್ಟು ನೀರು ಏರಿಕೆಯಾಗಿದೆ.
ಕೃಷ್ಣಾ ಮತ್ತು ಉಪನದಿಗಳ ನೀರಿನ ಮಟ್ಟ ದಿಢೀರ್ ಹೆಚ್ಚಳವಾಗಿದ್ದರಿಂದ ಚಿಕ್ಕೋಡಿ ಹಾಗೂ ನಿಪ್ಪಾಣಿ ತಾಲೂಕಿನ 7 ಕೆಳಮಟ್ಟದ ಸೇತುವೆಗಳು ಜಲಾವೃತಗೊಂಡಿವೆ.
ಯಡೂರ – ಕಲ್ಲೋಳ,ಬಾವನ ಸೌಂದತ್ತಿ – ಮಾಂಜರಿ,ಬಾರವಾಡ – ಕುನ್ನೂರ ಸೇತುವೆ,ಕಾರದಗಾ – ಭೋಜ ಸೇತುವೆ,ಭೋಜ – ಶಿವಾಪೂರವಾಡಿ,ಅಕ್ಕೋಳ – ಸಿದ್ನಾಳ,ಹುನ್ನರಗಿ – ಮಮದಾಪೂರ ಸೇತುವೆಗಳು ಜಲಾವೃತಗೊಂಡಿವೆ.
ಸೇತುವೆಗಳು ನೀರಿನಲ್ಲಿ ಮುಳುಗಡೆಯಾಗಿರುವುದರಿಂದ ಸುತ್ತಮುತ್ತಲಿನ ಹಳ್ಳಿಗಳ ನಡುವಿನ ನೇರ ರಸ್ತೆ ಸಂಪರ್ಕ ಕಡಿತಗೊಂಡಿದ್ದು, ಸಾರ್ವಜನಿಕರು ಹಾಗೂ ವಾಹನ ಸವಾರರು ಪರ್ಯಾಯ ರಸ್ತೆಗಳನ್ನು ಬಳಸುತ್ತಿದ್ದಾರೆ.
