ವಿಜಯಪುರ ಜಿಲ್ಲೆಯ ನಿಡಗುಂದಿ ಪಟ್ಟಣದ ಮುದ್ದೇಬಿಹಾಳ ಕ್ರಾಸ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಂದೆ ಮತ್ತು ಮಗಳು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಕಬ್ಬು ಕಟಾವು ಕೆಲಸಕ್ಕಾಗಿ ಇಂಡಿಯಿಂದ ಮಂಡ್ಯಕ್ಕೆ ಟ್ರ್ಯಾಕ್ಟರ್‌ನಲ್ಲಿ ಕಾರ್ಮಿಕರು ತೆರಳುತ್ತಿದ್ದರು. ಮುದ್ದೇಬಿಹಾಳ ಕ್ರಾಸ್ ಬಳಿ ಸ್ಪೀಡ್ ಬ್ರೇಕರ್ ಇರುವುದರಿಂದ ಟ್ರ್ಯಾಕ್ಟರ್ ಚಾಲಕ ವಾಹನವನ್ನು ನಿಧಾನಗತಿಯಲ್ಲಿ ಚಲಾಯಿಸುತ್ತಿದ್ದ ವೇಳೆ, ಹಿಂಬದಿಯಿಂದ ವೇಗವಾಗಿ ಬಂದ ಲಾರಿಯೊಂದು ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಟ್ರ್ಯಾಕ್ಟರ್‌ನಲ್ಲಿದ್ದ ತಂದೆ-ಮಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನಿಬ್ಬರು ಕಾರ್ಮಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಘಟನಾ ಸ್ಥಳಕ್ಕೆ ನಿಡಗುಂದಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗಾಯಾಳುಗಳನ್ನು ಚಿಕಿತ್ಸೆಗಾಗಿ ಹಾಗೂ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ನಿಡಗುಂದಿ ಆಸ್ಪತ್ರೆಗೆ ರವಾನಿಸಲಾಗಿದೆ.
ಈ ಕುರಿತು ನಿಡಗುಂದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
