ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಪ್ರಸಿದ್ಧ ಉಗಾರ್ ಸಕ್ಕರೆ ಕಾರ್ಖಾನೆಯ ವಿರುದ್ಧ ಪರಿಸರ ಮಾಲಿನ್ಯದ ಸುಳ್ಳು ಆರೋಪಗಳನ್ನು ಹೊರಿಸಿ ಕಾರ್ಖಾನೆ ಮುಚ್ಚಿಸಲು ಯತ್ನಿಸಲಾಗುತ್ತಿದೆ ಎಂದು ಆರೋಪಿಸಿ ಇಂದು ನೂರಾರು ರೈತರು ಹಾಗೂ ಕಾರ್ಮಿಕರು ಬೃಹತ್ ಪ್ರತಿಭಟನೆ ನಡೆಸಿದರು. ಕಾರ್ಖಾನೆಯ ಕಾರ್ಯಾಚರಣೆಗೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.


ಬೆಳಗಾವಿಯ ಕಾಗವಾಡ ತಾಲೂಕಿನ ಉಗಾರ್ ಸಕ್ಕರೆ ಕಾರ್ಖಾನೆಯ ವಿರುದ್ಧ ಕೆಲವರು ಸ್ವಾರ್ಥ ಲಾಭಕ್ಕಾಗಿ ಪರಿಸರ ಮಾಲಿನ್ಯದ ಸುಳ್ಳು ದೂರುಗಳನ್ನು ನೀಡಿ, ಕಾರ್ಖಾನೆಯನ್ನು ಶಾಶ್ವತವಾಗಿ ಮುಚ್ಚಿಸಲು ಸಂಚು ರೂಪಿಸುತ್ತಿದ್ದಾರೆ ಎಂದು ಗಂಭೀರ ಆರೋಪ ಕೇಳಿಬಂದಿದೆ. ಈ ಅಪಪ್ರಚಾರಗಳನ್ನು ತಕ್ಷಣವೇ ತಡೆಹಿಡಿಯಬೇಕು ಎಂದು ಆಗ್ರಹಿಸಿ ನೂರಾರು ಕಾರ್ಮಿಕರು, ರೈತರು ಹಾಗೂ ಸ್ಥಳೀಯರು ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸಿ, ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಉಗಾರ್ ಸಕ್ಕರೆ ಕಾರ್ಖಾನೆಯನ್ನೇ ನಂಬಿ ಸುಮಾರು 10,000 ಕಾರ್ಮಿಕರು, 75,000ಕ್ಕೂ ಹೆಚ್ಚು ರೈತರು ಹಾಗೂ ಸುತ್ತಮುತ್ತಲಿನ 40ಕ್ಕೂ ಹೆಚ್ಚು ಹಳ್ಳಿಗಳ ಸಾವಿರಾರು ವ್ಯಾಪಾರಸ್ಥರು ಮತ್ತು ಸಾರ್ವಜನಿಕರು ಜೀವನ ಸಾಗಿಸುತ್ತಿದ್ದಾರೆ. ಕೆಲ ವ್ಯಕ್ತಿಗಳು ಸುಳ್ಳು ಅಪವಾದಗಳನ್ನು ಹೊರಿಸಿ, ಕಾರ್ಖಾನೆಯ ಆಡಳಿತ ಹಾಗೂ ಅಧಿಕಾರಿಗಳ ವಿರುದ್ಧ ತಪ್ಪು ವರದಿಗಳನ್ನು ಸೃಷ್ಟಿಸುತ್ತಿದ್ದಾರೆ. ಇದರಿಂದಾಗಿ ಲಕ್ಷಾಂತರ ಜನರ ಆರ್ಥಿಕ ಭವಿಷ್ಯ ಮತ್ತು ಜೀವನೋಪಾಯಕ್ಕೆ ಭಾರಿ ಬೆದರಿಕೆ ಎದುರಾಗಿದೆ ಎಂದು ಪ್ರತಿಭಟನಾಕಾರರು ಕಳವಳ ವ್ಯಕ್ತಪಡಿಸಿದರು. ಕಾರ್ಖಾನೆಯಲ್ಲಿ ಏನಾದರೂ ಸಣ್ಣಪುಟ್ಟ ಕುಂದುಕೊರತೆಗಳಿದ್ದರೆ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಸೂಚನೆ ನೀಡಿ ಸರಿಪಡಿಸಲಿ, ಆದರೆ ಯಾವುದೇ ಕಾರಣಕ್ಕೂ ಕಾರ್ಖಾನೆಯ ಕಾರ್ಯಾಚರಣೆಗೆ ಧಕ್ಕೆ ತರಬಾರದು ಎಂದು ರೈತರು ಒತ್ತಾಯಿಸಿದ್ದಾರೆ. ಒಂದು ವೇಳೆ ಕಾರ್ಖಾನೆಗೆ ತೊಂದರೆಯಾದರೆ ಲಕ್ಷಾಂತರ ಜನರ ಬದುಕು ಬೀದಿಗೆ ಬರಲಿದ್ದು, ರೈತರು, ಕಾರ್ಮಿಕರು ಹಾಗೂ ಸ್ಥಳೀಯರ ಹಿತದೃಷ್ಟಿಯಿಂದ ಜಿಲ್ಲಾಡಳಿತ ತಕ್ಷಣವೇ ಮಧ್ಯಪ್ರವೇಶಿಸಿ ಸೂಕ್ತ ನ್ಯಾಯ ಒದಗಿಸಬೇಕು ಎಂದು ಪ್ರಫೂಲ್ ಥೋರುಶೇ ವಿನಂತಿಸದರು.

ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಉಗಾರ ಸಕ್ಕರೆ ಕಾರ್ಖಾನೆಯ ಕಾರ್ಮಿಕರು ಮತ್ತು ರೈತರು ಭಾಗಿಯಾಗಿದ್ಧರು.
