Uncategorized

ಇ-ಖಾತಾ ಮತ್ತು ನಾಗರೀಕ ಸೇವೆಗಳಲ್ಲಿ ಮಧ್ಯವರ್ತಿಗಳಿಗೆ ಅವಕಾಶವಿಲ್ಲ; ಬೆಳಗಾವಿ ಮಹಾನಗರ ಪಾಲಿಕೆ ಆಡಳಿತದಲ್ಲಿ ಪಾರದರ್ಶಕತೆ ತರಲು ಕಟ್ಟುನಿಟ್ಟಿನ ಕ್ರಮ ‘ ಸಚಿವ ಡಾ. ಯತೀಂದ್ರ ಸಿದ್ಧರಾಮಯ್ಯ ವಾರ್ನಿಂಗ್!

Share

ಬೆಳಗಾವಿ ಮಹಾನಗರ ಪಾಲಿಕೆ ಆಡಳಿತದಲ್ಲಿ ಪಾರದರ್ಶಕತೆ ತರಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಇ-ಖಾತಾ ಸೇರಿದಂತೆ ವಿವಿಧ ನಾಗರಿಕ ಸೇವೆಗಳಲ್ಲಿ ಮಧ್ಯವರ್ತಿಗಳು ಹಾಗೂ ಏಜೆಂಟ್‌ಗಳ ಹಸ್ತಕ್ಷೇಪಕ್ಕೆ ಅವಕಾಶ ನೀಡಬಾರದು ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಬೆಳಗಾವಿ ಕಾಂಗ್ರೆಸ್ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೆಳಗಾವಿ ಮಹಾನಗರ ಪಾಲಿಕೆ ಆಡಳಿತದಲ್ಲಿ ಪಾರದರ್ಶಕತೆ ತರಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಇ-ಖಾತಾ ಸೇರಿದಂತೆ ವಿವಿಧ ನಾಗರಿಕ ಸೇವೆಗಳಲ್ಲಿ ಮಧ್ಯವರ್ತಿಗಳು ಹಾಗೂ ಏಜೆಂಟ್‌ಗಳ ಹಸ್ತಕ್ಷೇಪಕ್ಕೆ ಅವಕಾಶ ನೀಡಬಾರದು ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಹಣ ಪಡೆದು ದಾಖಲೆ ಮಾಡಿಕೊಡುವ ಅಕ್ರಮ ಚಟುವಟಿಕೆಗಳಿಗೆ ಸಂಪೂರ್ಣ ಕಡಿವಾಣ ಹಾಕಲಾಗುವುದು. ಸಾರ್ವಜನಿಕರಿಗೆ ನೇರವಾಗಿ ಹಾಗೂ ಸರಳವಾಗಿ ಸೇವೆ ದೊರೆಯುವಂತೆ ವ್ಯವಸ್ಥೆ ರೂಪಿಸಲಾಗುವುದು ಎಂದು ತಿಳಿಸಿದರು.

ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ತಾವು ವೈಯಕ್ತಿಕವಾಗಿ ಯಾವುದೇ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ. ಸರ್ಕಾರದ ಮಟ್ಟದಲ್ಲಿ ಹಾಗೂ ಸಂಬಂಧಿಸಿದ ಪ್ರಾಧಿಕಾರಗಳ ಮೂಲಕವೇ ಅಂತಿಮ ತೀರ್ಮಾನವಾಗಲಿದೆ ಎಂದು ಹೇಳಿದರು. ಬೆಳಗಾವಿ ನಗರದಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿಗಳ ವಿಳಂಬ ಹಾಗೂ ಅರ್ಧಕ್ಕೆ ನಿಂತಿರುವ ಕಾಮಗಾರಿಗಳ ಬಗ್ಗೆ ಸಭೆಯಲ್ಲಿ ಗಂಭೀರ ಚರ್ಚೆ ನಡೆಸಲಾಗಿದೆ. ಸಾರ್ವಜನಿಕರಿಗೆ ತೊಂದರೆ ಉಂಟು ಮಾಡುವ ರೀತಿಯಲ್ಲಿ ರಸ್ತೆಗಳನ್ನು ಅಗೆದು ಕಾಮಗಾರಿ ಪೂರ್ಣಗೊಳಿಸದೆ ಇರುವ ಗುತ್ತಿಗೆದಾರರು ಹಾಗೂ ಖಾಸಗಿ ಕಂಪನಿಗೆ ತಕ್ಷಣ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ. ಕಾಮಗಾರಿ ವಿಳಂಬದಿಂದ ಸಾರ್ವಜನಿಕರಿಗೆ ಸಮಸ್ಯೆಯಾಗುತ್ತಿದ್ದರೆ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ನಗರದಲ್ಲಿ ಸಂಚಾರ ವ್ಯವಸ್ಥೆ ಸುಗಮವಾಗುವಂತೆ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದರು.

ಬೆಳಗಾವಿ ನಗರ ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಸೂಕ್ತ ದಾಖಲೆಗಳಿಲ್ಲದ ಸಮಸ್ಯೆ ಎದುರಾಗಿದೆ. ಈ ಕುರಿತು ಕಾನೂನು ತಜ್ಞರ ಅಭಿಪ್ರಾಯ ಪಡೆದು, ನಿಯಮಗಳ ಚೌಕಟ್ಟಿನಲ್ಲಿ ಪರಿಹಾರ ಕಂಡುಕೊಳ್ಳಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದರು. ನಗರದ ಸ್ವಚ್ಛತೆ ಕಾಪಾಡಲು ಪೌರ ಕಾರ್ಮಿಕರ ಕೊರತೆಯನ್ನು ನಿವಾರಿಸುವಂತೆ ಸೂಚಿಸಲಾಗಿದೆ. ಕುಡಿಯುವ ನೀರು ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಲಾಗಿದೆ. ಅಶೋಕ ನಗರ ಈಜುಕೊಳವನ್ನು ಆಧುನಿಕ ಸೌಲಭ್ಯಗಳೊಂದಿಗೆ ಅಭಿವೃದ್ಧಿಪಡಿಸಿ ಸಾರ್ವಜನಿಕರ ಬಳಕೆಗೆ ಅನುಕೂಲವಾಗುವಂತೆ ನಿರ್ಮಿಸುವಂತೆ ಸೂಚಿಸಲಾಗಿದೆ ಎಂದರು.

ಬೆಳಗಾವಿಯಲ್ಲಿ ನಡೆಯಲಿರುವ ಅಹಿಂದ ಮುಖಂಡರ ಸಭೆಯಲ್ಲಿ ಭಾಗವಹಿಸುವುದಾಗಿ ತಿಳಿಸಿದ ಡಾ. ಯತೀಂದ್ರ ಸಿದ್ದರಾಮಯ್ಯ, ಕೇವಲ ಹೆಸರಿಗಾಗಿ ಅಲ್ಲ, ಜನರ ಪರವಾಗಿ ಕೆಲಸ ಮಾಡುವವರೇ ನಿಜವಾದ ಅಹಿಂದ ನಾಯಕರು ಎಂದು ಹೇಳಿದರು. ಸಚಿವ ಸಂಪುಟ ವಿಸ್ತರಣೆ ವಿಚಾರದಲ್ಲಿ ಹೈಕಮಾಂಡ್ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ಅವರು ಹೇಳಿದರು.
ಮುಂದಿನ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ತಾವೇ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ತಿಳಿಸಿದ ಸಚಿವರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚುನಾವಣೆಗೆ ಸ್ಪರ್ಧಿಸದಿದ್ದರೂ ರಾಜಕೀಯದಲ್ಲಿ ಸಕ್ರಿಯರಾಗಿಯೇ ಮುಂದುವರಿಯಲಿದ್ದಾರೆ ಎಂದರು. ಸಿದ್ದರಾಮಯ್ಯ ಅವರು ರಾಷ್ಟ್ರ ರಾಜಕಾರಣಕ್ಕೆ ತೆರಳುವ ಯಾವುದೇ ಉದ್ದೇಶವಿಲ್ಲ. ರಾಜ್ಯ ರಾಜಕಾರಣದಲ್ಲಿಯೇ ತಮ್ಮ ಮಾರ್ಗದರ್ಶನ ಮುಂದುವರಿಸಲಿದ್ದಾರೆ ಎಂದು ಡಾ. ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಮಾಧ್ಯಮಗೋಷ್ಟಿಯಲ್ಲಿ ಬುಡಾ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾದ್ಯಕ್ಷ ವಿನಯ್ ನಾವಲಗಟ್ಟಿ ಸೇರಿದಂತೆ ಇನ್ನುಳಿದವರು ಉಪಸ್ಥಿತರಿದ್ಧರು.

Tags:

error: Content is protected !!