Khanapur

ಖಾನಾಪೂರ: ಜಾಮಗಾವನಲ್ಲಿ ಮರ ಬಿದ್ದು ನೆಲಕ್ಕುರುಳಿದ ಕಂಬಗಳು; ಹೆಸ್ಕಾಂ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ!

Share

ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ಜಾಮಗಾವನಲ್ಲಿ ಭಾರೀ ಮಳೆಗೆ ಬೃಹತ್ ಮರವೊಂದು ವಿದ್ಯುತ್ ಕಂಬಗಳ ಮೇಲೆ ಉರುಳಿ ಬಿದ್ದಿದೆ. ಪರಿಣಾಮವಾಗಿ ಕಳೆದ ಎರಡು ದಿನಗಳಿಂದ ಗ್ರಾಮಸ್ಥರು ಕತ್ತಲಲ್ಲಿ ದಿನದೂಡುವಂತಾಗಿದ್ದು, ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಜನಾಕ್ರೋಶ ಸ್ಫೋಟಗೊಂಡಿದೆ.

ಖಾನಾಪೂರ ತಾಲೂಕಿನ ಜಾಮಗಾವ ಗ್ರಾಮದಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ರಸ್ತೆ ಬದಿಯ ಬೃಹತ್ ಮರವೊಂದು ವಿದ್ಯುತ್ ಕಂಬ ಹಾಗೂ ತಂತಿಗಳ ಮೇಲೆ ಉರುಳಿ ಬಿದ್ದಿದೆ. ಇದರಿಂದಾಗಿ ವಿದ್ಯುತ್ ಸಂಪರ್ಕ ಸಂಪೂರ್ಣ ಕಡಿತಗೊಂಡಿದ್ದು, ಕಳೆದ ಎರಡು ದಿನಗಳಿಂದ ಇಡೀ ಜಾಮಗಾವ ಪ್ರದೇಶ ಕತ್ತಲಿನಲ್ಲಿ ಮುಳುಗಿದೆ. ಘಟನೆ ನಡೆದ ತಕ್ಷಣ ಸಾರ್ವಜನಿಕ ಹಿತದೃಷ್ಟಿಯಿಂದ ಗ್ರಾಮಸ್ಥರೇ ಸ್ವಯಂಪ್ರೇರಿತರಾಗಿ ರಸ್ತೆಗಡ್ಡಲಾಗಿ ಬಿದ್ದಿದ್ದ ಮರವನ್ನು ತೆರವುಗೊಳಿಸಿ ವಾಹನ ಸಂಚಾರವನ್ನು ಸುಗಮಗೊಳಿಸಿದ್ದಾರೆ. ಆದರೆ ಹೆಸ್ಕಾಂ ಇಲಾಖೆ ಮಾತ್ರ ಈವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ.

ದುರಂತ ಸಂಭವಿಸಿ ಎರಡು ದಿನಗಳು ಕಳೆದರೂ ಹೆಸ್ಕಾಂ ಇಲಾಖೆಯ ಯಾವುದೇ ಅಧಿಕಾರಿ ಅಥವಾ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡದಿರುವುದು ಗ್ರಾಮಸ್ಥರ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಕತ್ತಲ ವಾತಾವರಣದಿಂದಾಗಿ ಶಾಲಾ ವಿದ್ಯಾರ್ಥಿಗಳು ಮತ್ತು ವೃದ್ಧರು ತೀವ್ರ ತೊಂದರೆ ಅನುಭವಿಸುತ್ತಿದ್ದು, ಸ್ಥಳೀಯರು ಹೆಸ್ಕಾಂ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು, ತಕ್ಷಣವೇ ಮುರಿದು ಬಿದ್ದಿರುವ ಕಂಬ ಹಾಗೂ ತಂತಿಗಳನ್ನು ದುರಸ್ತಿಗೊಳಿಸಿ ವಿದ್ಯುತ್ ಸಂಪರ್ಕ ಕಲ್ಪಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Tags:

error: Content is protected !!