Belagavi

ಸ್ವಾತಂತ್ರ್ಯೋತ್ಸವ ಪೂರ್ವಭಾವಿ ಸಭೆ

Share

ಮುಂಬರುವ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲು ಸರ್ವ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ (ಜು.24) ಜರುಗಿದ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸ್ವಾತಂತ್ರ್ಯ ದಿನಾಚರಣೆ ದಿನದಂದು ಧ್ವಜ ಹಾಗೂ ಧ್ವಜ ಸ್ತಂಭದ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಪಾಲಿಸಬೇಕು. ಪ್ಲಾಸ್ಟಿಕ್ ಧ್ವಜ ಬಳಕೆ ಆಗದಂತೆ ನಿಗಾವಹಿಸಲು ತಿಳಿಸಿದರು. ಕಾರ್ಯಕ್ರಮದ ಆಹ್ವಾನ ಪತ್ರಿಕೆ ಶಿಷ್ಟಾಚಾರದನ್ವಯ ಮುದ್ರಿಸಿ ಆಮಂತ್ರಿತರಿಗೆ ಸಾಕಷ್ಟು ಮುಂಚಿತವಾಗಿ ತಲುಪಿಸಬೇಕು. ಯಾವುದೇ ಕಾರಣಕ್ಕೂ ಶಿಷ್ಟಾಚಾರ ಉಲ್ಲಂಘನೆಯಾಗದಂತೆ ಸಂಬಂಧಿಸಿದ ಅಧಿಕಾರಿಗಳು ಜವಾಬ್ದಾರಿಯನ್ನು ಅರಿತು ಕಾರ್ಯ ನಿರ್ವಹಿಸಲು ತಿಳಿಸಿದರು.

ಧ್ವಜಾರೋಹಣ ಕಾರ್ಯಕ್ರಮ ಜರುಗುವ ಜಿಲ್ಲಾ ಕ್ರೀಡಾಂಗಣಕ್ಕೆ ಆಗಮಿಸುವ ಗಣ್ಯ ವ್ಯಕ್ತಿಗಳಿಗೆ ಶಿಷ್ಟಾಚಾರದನ್ವಯ ವ್ಯವಸ್ಥೆ ಜೊತೆಗೆ ಕಾರ್ಯಕ್ರಮಕ್ಕೆ ಆಗಮಿಸುವಂತಹ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೂ ಸಹ ಸೂಕ್ತ ಆಸನದ ವ್ಯವಸ್ಥೆ ಮಾಡಬೇಕು. ಸ್ವಾತಂತ್ರ್ಯೋತ್ಸವ ದಿನಾಚರಣೆ ಅಂಗವಾಗಿ ನಗರದ ಪ್ರಮುಖ ವೃತ್ತಗಳನ್ನು ಸ್ವಚ್ಛಗೊಳಿಸಿ ದೀಪಾಲಂಕಾರ ಮಾಡಬೇಕು. ಕಾರ್ಯಕ್ರಮದ ದಿನದಂದು ಸಾಯಂಕಾಲ ಜರುಗುವ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಆಗಮಿಸುವ ಮಕ್ಕಳಿಗೆ ಸೂಕ್ತ ಸಾರಿಗೆ ವ್ಯವಸ್ಥೆ ಹಾಗೂ ಉಪಹಾರದ ವ್ಯವಸ್ಥೆ ಮಾಡಬೇಕು.ಸಂಭ್ರಮ ಹಾಗೂ ಸಡಗರದ ಸ್ವಾತಂತ್ರ್ಯೋತ್ಸವ ದಿನಾಚರಣೆಗೆ ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು, ಎಲ್ಲಾ ಸಮಿತಿಗಳು ತಮ್ಮ ಜವಾಬ್ದಾರಿಗಳನ್ನು ಅರಿತು ಸರ್ವ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಸೂಚನೆ ನೀಡಿದರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಸ್ವಾತಂತ್ರ್ಯ ಹೋರಾಟಗಾರರು, ಸಾರ್ವಜನಿಕರು ಉಪಸ್ಥಿತರಿದ್ದರು.

Tags:

error: Content is protected !!