Vijaypura

22 ಗ್ರಾಮಗಳ ರೈತರಿಗೆ ಪರಿಹಾರ ನೀಡಿ; ಮುಳುಗಡೆ ಸಂತ್ರಸ್ತರಿಗೆ ಸಮಗ್ರ ಪರಿಹಾರಕ್ಕೆ ಆಗ್ರಹಿಸಿ ರೈತ ಪರ ಸಂಘಟನೆಗಳ ಪ್ರತಿಭಟನೆ

Share

ಉತ್ತರ ಕರ್ನಾಟಕ ಜೀವನಾಡಿಯಾಗಿರುವ ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಆಲಮಟ್ಟಿ ಜಲಾಶಯದ ಹಿನ್ನೀರಿನಿಂದ ಮುಳುಗಡೆಯಾಗಲಿರುವ 22 ಗ್ರಾಮಗಳ ರೈತರಿಗೆ ಸೂಕ್ತ ಪರಿಹಾರ, ಪುನರ್ವಸತಿ ಹಾಗೂ ಸಮಗ್ರ ನೀರಾವರಿ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ರೈತ ಪರ, ಪ್ರಗತಿ ಪರ, ಕನ್ನಡ ಪರ ಹಾಗೂ ದಲಿತ ಪರ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿವೆ. 2ನೇ ಕೃಷ್ಣಾ ಜಲ ವಿವಾದ ನ್ಯಾಯಾಧಿಕರಣದ ತೀರ್ಪು ಜಾರಿಗೊಳಿಸುವಂತೆ ಒತ್ತಾಯಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಇಲ್ಲಿದೆ ಒಂದು ವರದಿ…

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಪಟ್ಟಣದ ಬಸವೇಶ್ವರ ವೃತ್ತದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ, ಬಸ್ ನಿಲ್ದಾಣ ಮಾರ್ಗವಾಗಿ ತಹಸೀಲ್ದಾರರ ಕಚೇರಿವರೆಗೆ ಸಾಗಿತು. ವಿವಿಧ ರೈತ ಸಂಘಟನೆಗಳು, ಕನ್ನಡ ಪರ ಹಾಗೂ ದಲಿತ ಪರ ಸಂಘಟನೆಗಳ ಮುಖಂಡರು ಮತ್ತು ಕಾರ್ಯಕರ್ತರು ಮೆರವಣಿಗೆಯಲ್ಲಿ ಪಾಲ್ಗೊಂಡು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ತಹಸೀಲ್ದಾರರ ಕಚೇರಿ ಎದುರು ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ, 2ನೇ ಕೃಷ್ಣಾ ಜಲ ವಿವಾದ ನ್ಯಾಯಾಧಿಕರಣದ ತೀರ್ಪಿನಂತೆ 524.256 ಅಡಿ ಮಟ್ಟಕ್ಕೆ ಸಂಬಂಧಿಸಿದ ಅಧಿಸೂಚನೆಯನ್ನು ತಕ್ಷಣವೇ ಹೊರಡಿಸಬೇಕು ಎಂದು ಒತ್ತಾಯಿಸಿದರು. ಜೊತೆಗೆ ಆಲಮಟ್ಟಿ ಜಲಾಶಯದ ಹಿನ್ನೀರಿನಿಂದ ಮುಳುಗಡೆಯಾಗುವ 22 ಗ್ರಾಮಗಳ ರೈತರಿಗೆ ಸೂಕ್ತ ಪರಿಹಾರ, ಪುನರ್ವಸತಿ ಹಾಗೂ ಸಮಗ್ರ ನೀರಾವರಿ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಇನ್ನೂ ರಾಜ್ಯದ ಅಣೆಕಟ್ಟುಗಳ ನೀರನ್ನು ಬೇರೆ ರಾಜ್ಯಗಳಿಗೆ ಹರಿಸಲಾಗುತ್ತಿದೆ. ಆದರೆ ರಾಜ್ಯದ ರೈತರಿಗೆ ಅಗತ್ಯ ಪ್ರಮಾಣದ ನೀರು ಒದಗಿಸುವಲ್ಲಿ ಸರ್ಕಾರಗಳು ವಿಫಲವಾಗಿವೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಇದೇ ಧೋರಣೆ ಮುಂದುವರಿದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಸರ್ಕಾರಗಳಿಗೆ ಎಚ್ಚರಿಕೆ ನೀಡಿದರು. ಬಳಿಕ ತಾಲೂಕು ದಂಡಾಧಿಕಾರಿ ವೈ.ಎಸ್. ಸೋಮನಕಟ್ಟಿ ಅವರ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ರೈತ ಮುಖಂಡರಾದ ಬಿ.ಎ. ಭಗವಾನರೆಡ್ಡಿ, ಸುರೇಶ ಜಿ.ಬಿ., ವಿಠ್ಠಲ್ ಬಿರಾದಾರ, ಅಕ್ರಮ ಮಾಶ್ಯಾಳಕರ, ಗಿರಿಮಲ್ಲಪ್ಪ ದೊಡಮನಿ, ಹಣಮಂತರಾಯ ಗುಣಕಿ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

ಒಟ್ಬಲ್ಲಿ ಮುಳುಗಡೆ ಗ್ರಾಮಗಳ ರೈತರಿಗೆ ನ್ಯಾಯಯುತ ಪರಿಹಾರ, ಪುನರ್ವಸತಿ ಮತ್ತು ನೀರಾವರಿ ಸೌಲಭ್ಯ ಒದಗಿಸುವಂತೆ ಪ್ರತಿಭಟನಾಕಾರರು ಸರ್ಕಾರವನ್ನು ಆಗ್ರಹಿಸಿದ್ದಾರೆ. ಬೇಡಿಕೆಗಳಿಗೆ ಶೀಘ್ರ ಸ್ಪಂದಿಸದಿದ್ದರೆ ರಾಜ್ಯಾದ್ಯಂತ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವ ಎಚ್ಚರಿಕೆಯನ್ನೂ ನೀಡಿದ್ದಾರೆ.

ವಿಜಯಕುಮಾರ ಸಾರವಾಡ
ಇನ್ ನ್ಯೂಜ್
ವಿಜಯಪುರ..

Tags:

error: Content is protected !!