Vijaypura

ಎಸ್‌ಐಆರ್‌ನಲ್ಲಿ ಹೆಸರು ನೋಂದಾಯಿಸಿ; ಮತದಾನದ ಹಕ್ಕು ಉಳಿಸಿಕೊಳ್ಳಿ: ಡಾ. ಅಂಜಲಿ ನಿಂಬಾಳ್ಕರ್

Share

ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ನಡುವೆಯೇ, ಕಿತ್ತೂರ ಕರ್ನಾಟಕ ಕಾಂಗ್ರೆಸ್‌ ಎಸ್‌ಐಆರ್‌ ಉಸ್ತುವಾರಿ ಡಾ. ಅಂಜಲಿ ನಿಂಬಾಳ್ಕರ್‌ ಸಾರ್ವಜನಿಕರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಖಚಿತಪಡಿಸಿಕೊಳ್ಳುವಂತೆ ಕರೆ ನೀಡಿದ್ದಾರೆ. ವಿಜಯಪುರ ನಗರ ಕಾಂಗ್ರೆಸ್‌ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್‌ಐಆರ್‌ ಯಾವುದೇ ರಾಜಕೀಯ ಪಕ್ಷಕ್ಕೆ ಸೀಮಿತವಾದ ಕಾರ್ಯಕ್ರಮವಲ್ಲ. ಇದು ಪ್ರತಿಯೊಬ್ಬ ನಾಗರಿಕನ ಮತದಾನದ ಹಕ್ಕಿಗೆ ಸಂಬಂಧಿಸಿದ ಮಹತ್ವದ ಪ್ರಕ್ರಿಯೆಯಾಗಿದ್ದು, ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದವರು ನಮೂನೆ-6ರ ಮೂಲಕ ಅಗತ್ಯ ದಾಖಲೆಗಳನ್ನು ಸಲ್ಲಿಸಿ ಹೆಸರು ಸೇರ್ಪಡೆ ಮಾಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ಮತದಾರರ ಪಟ್ಟಿಯಲ್ಲಿ ಹೆಸರು ಇರುವವರಿಗೆ ಸರ್ಕಾರದ ವಿವಿಧ ಯೋಜನೆಗಳು ಹಾಗೂ ಗ್ಯಾರಂಟಿ ಯೋಜನೆಗಳ ಸೌಲಭ್ಯಗಳು ದೊರೆಯುತ್ತವೆ. ಹೆಸರು ನೋಂದಾಯಿಸದಿದ್ದರೆ ಮುಂದಿನ ದಿನಗಳಲ್ಲಿ ಅನಗತ್ಯ ಸಮಸ್ಯೆಗಳು ಎದುರಾಗುವ ಸಾಧ್ಯತೆ ಇದೆ ಎಂದು ಅವರು ಹೇಳಿದರು.
ರಾಜ್ಯ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿ ಜನರ ವಿಶ್ವಾಸ ಗಳಿಸಿದ್ದು, ಇದೇ ವಿಶ್ವಾಸದ ಆಧಾರದ ಮೇಲೆ 2028ರ ವಿಧಾನಸಭೆ ಚುನಾವಣೆಯಲ್ಲೂ ಕಾಂಗ್ರೆಸ್‌ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕೆಲವೆಡೆ ಕಾಂಗ್ರೆಸ್‌ ಬೆಂಬಲಿಗರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡುವ ಉದ್ದೇಶದಿಂದ ಬಿಜೆಪಿ ಕಾರ್ಯಕರ್ತರು ಮನೆ ಮನೆಗೆ ತೆರಳಿ ಅರ್ಜಿಗಳನ್ನು ಸಂಗ್ರಹಿಸುತ್ತಿದ್ದಾರೆ ಎಂದು ಆರೋಪಿಸಿದ ಅವರು, ತಾಲೂಕು ಮಟ್ಟದಲ್ಲಿ ಎಸ್‌ಐಆರ್‌ ಕುರಿತು ತರಬೇತಿ ನೀಡಲಾಗಿದ್ದು, ಸಾರ್ವಜನಿಕರಿಗೆ ನೆರವಾಗಲು ಸಹಾಯವಾಣಿ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಲೋಣಿ, ಮುಖಂಡರಾದ ಅಬ್ದುಲ್ ಹಮೀದ್ ಮುಶ್ರಫ್, ವಸಂತ ಹೊನಮೊಡೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags:

error: Content is protected !!