Belagavi

ಬೆಳಗಾವಿಯ ಚವ್ಹಾಟ್ ಗಲ್ಲಿಯಲ್ಲಿ ತೀವ್ರ ನೀರಿನ ಸಮಸ್ಯೆ: ಅಧಿಕಾರಿಗಳ ವಿರುದ್ಧ ಸಾರ್ವಜನಿಕರ ಆಕ್ರೋಶ

Share

ಬೆಳಗಾವಿಯ ಚವ್ಹಾಟ್ ಗಲ್ಲಿಯಲ್ಲಿ ಕಳೆದ ಎಂಟು ದಿನಗಳಿಂದ ಕುಡಿಯುವ ನೀರಿನ ಪೈಪ್‌ಲೈನ್ ಹಾನಿಗೊಳಗಾಗಿದ್ದು, ಸಾರ್ವಜನಿಕರು ತೀವ್ರ ಪರದಾಡುವಂತಾಗಿದೆ. ಅಧಿಕಾರಿಗಳು ಹಾಗೂ ಗುತ್ತಿಗೆದಾರರ ನಿರ್ಲಕ್ಷ್ಯದ ವಿರುದ್ಧ ಆಕ್ರೋಶಗೊಂಡಿರುವ ನಾಗರಿಕರು, ತಕ್ಷಣ ಸಮಸ್ಯೆ ಬಗೆಹರಿಸದಿದ್ದರೆ ಜಿಲ್ಲಾಧಿಕಾರಿಗಳ ಕಚೇರಿಗೆ ಬೃಹತ್ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದಾರೆ.

ಬೆಳಗಾವಿಯ ಚವ್ಹಾಟ್ ಗಲ್ಲಿಯಲ್ಲಿ ಕಳೆದ ಕೆಲವು ದಿನಗಳಿಂದ ತೀವ್ರ ನೀರಿನ ಸಮಸ್ಯೆ ಎದುರಾಗಿದ್ದು, ಇದರಿಂದ ಆಕ್ರೋಶಗೊಂಡ ಸ್ಥಳೀಯ ಮಹಿಳೆಯರು ಅಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸದ್ಯ ರಾಕಸಕೊಪ್ಪ ಜಲಾಶಯದಲ್ಲಿ ಸಾಕಷ್ಟು ನೀರಿದ್ದರೂ ಸಹ ತಮಗೆ ಸರಿಯಾಗಿ ನೀರು ಸರಬರಾಜು ಮಾಡುತ್ತಿಲ್ಲ ಎಂದು ಮಹಿಳೆಯರು ದೂರಿದ್ದಾರೆ. ಮಹಾನಗರ ಪಾಲಿಕೆಯಿಂದ ಟ್ಯಾಂಕರ್ ಮೂಲಕ ನೀರು ಒದಗಿಸಲಾಗುತ್ತಿದ್ದರೂ, ವಯಸ್ಸಾದವರು ಹಾಗೂ ಕೆಲಸಕ್ಕೆ ಹೋಗುವವರು ಇರುವ ಮನೆಗಳಲ್ಲಿ ಟ್ಯಾಂಕರ್ ನೀರನ್ನು ಹಿಡಿದು ಸಂಗ್ರಹಿಸುವುದು ಅತ್ಯಂತ ಕಷ್ಟದ ಕೆಲಸವಾಗಿದೆ ಎಂದು ಅಳಲು ತೋಡಿಕೊಂಡಿದ್ದಾರೆ. ಅಧಿಕಾರಿಗಳು ಕೇವಲ ಭರವಸೆ ನೀಡದೆ, ತಕ್ಷಣವೇ ಪೈಪ್‌ಲೈನ್ ಮೂಲಕ ನಿಯಮಿತವಾಗಿ ಕುಡಿಯುವ ನೀರನ್ನು ಒದಗಿಸಬೇಕು, ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ತೀವ್ರ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಮಹಿಳೆಯರು ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಸ್ಥಳೀಯರು ಮಹಾನಗರ ಪಾಲಿಕೆಯ ಎಇಇ, ಕಾರ್ಯನಿರ್ವಾಹಕ ಎಂಜಿನಿಯರ್ ಹಾಗೂ ಅಧಿಕಾರಿಗಳಿಗೆ ನಿರಂತರವಾಗಿ ದೂರು ನೀಡುತ್ತಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಸ್ಥಳೀಯ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಾಲಿಕೆ ಅಧಿಕಾರಿಗಳಿಗೆ ಗುತ್ತಿಗೆದಾರರ ಮೇಲೆ ಯಾವುದೇ ನಿಯಂತ್ರಣವಿಲ್ಲದಂತಾಗಿದ್ದು, ಖಾಸಗಿ ಕಂಪನಿ ಹಾಗೂ ಕೆಯುಡಬ್ಲ್ಯೂಎಸ್ ಸಂಸ್ಥೆಗಳು ಪರಸ್ಪರ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿವೆ ಎಂದು ಅವರು ಆರೋಪಿಸಿದ್ದಾರೆ. ಇನ್ನು ಎಇಇ ಮತ್ತು ಎಕ್ಸಿಕ್ಯೂಟಿವ್ ಇಂಜಿನಿಯರ್‌ಗಳು ಪ್ರತಿದಿನ ಮಾಹಿತಿ ಪಡೆಯುತ್ತಿದ್ದರೂ, ನೀರು ಸರಬರಾಜು ಮಾಡಬೇಕೆಂದರೆ ಪೈಪಲೈನ್ ಕಾಮಗಾರಿ ಅಪೂರ್ಣಗೊಂಡಿದೆ. ಕಳೆದ ಎರಡು ದಿನಗಳ ಹಿಂದೆಯೇ ಪೈಪ್ ಲೈನ್ ದುರಸ್ತಿ ಮಾಡುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಲಾಗಿದ್ದರೂ ಸಹ ಅವರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಜಲಮಂಡಳಿಯವರು ತಿಳಿಸಿದ್ದಾರೆ.

ಗುತ್ತಿಗೆದಾರರಿಗೆ ಕಾಮಗಾರಿ ನೀಡುವ ಮುನ್ನವೇ ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಒಪ್ಪಂದ ಮಾಡಿಕೊಳ್ಳಬೇಕು. ಆದರೆ ಅಧಿಕಾರಿಗಳು ಇಂತಹ ಯಾವುದೇ ಒಪ್ಪಂದ ಮಾಡಿಕೊಳ್ಳದ ಕಾರಣ ಗುತ್ತಿಗೆದಾರರು ಈಗ ಯಾರಿಗೂ ಹೆದರುತ್ತಿಲ್ಲ. ಯಾರಿಗೆ ಬೇಕಾದರೂ ದೂರು ನೀಡಿ, ನಾವು ಯಾರ ಮಾತಿಗೂ ಕೇಳುವುದಿಲ್ಲ ಎಂದು ಉಡಾಫೆಯಾಗಿ ವರ್ತಿಸುತ್ತಿದ್ದಾರೆ. ಅಲ್ಲದೆ ಇದು ಖಾಸಗಿ ಕಂಪನಿಯವರ ಕೆಲಸ ಎಂದು ಗುತ್ತಿಗೆದಾರರು ಹೇಳುತ್ತಿದ್ದರೆ, ಇತ್ತ ಖಾಸಗಿ ಕಂಪನಿಯವರು ಮತ್ತೊಬ್ಬರ ಮೇಲೆ ಗೂಬೆ ಕೂರಿಸುತ್ತಿದ್ದಾರೆ. ಈ ಇಬ್ಬರ ನಡುವಿನ ಸಮನ್ವಯದ ಕೊರತೆಯಿಂದಾಗಿ ಸಮಸ್ಯೆ ಜನರಿಗೆ ಆಗುತ್ತಿದ್ದು, ನಾಳೆಯೊಳಗೆ ಈ ಸಮಸ್ಯೆಯನ್ನು ಪರಿಹರಿಸದಿದ್ದರೆ ಮುಂದಿನ ಎರಡು ದಿನಗಳಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗೆ ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗುವುದು ಎಂದು ನಾಗರಿಕರು ಎಚ್ಚರಿಕೆ ನೀಡಿದ್ದಾರೆ.

Tags:

error: Content is protected !!