ಖಾನಾಪುರ ಪಟ್ಟಣದ ಹೃದಯಭಾಗದಲ್ಲೇ ಹೆಣ್ಣು ಮಕ್ಕಳ ಜೀವಕ್ಕೆ ಗಂಡಾಂತರ ಎದುರಾಗಿದೆ. ಮಳೆಯ ಆರ್ಭಟಕ್ಕೆ ಶಾಲೆಯೊಳಗೆ ಹಾವುಗಳು ನುಗ್ಗುತ್ತಿದ್ದು, ಶಿಕ್ಷಣ ಇಲಾಖೆಯ ನಿರ್ಲಕ್ಷ್ಯದ ವಿರುದ್ಧ ಪಾಲಕರು ಹಾಗೂ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಕುರಿತು ನಮ್ಮ ವಿಶೇಷ ವರದಿ ಇಲ್ಲಿದೆ ನೋಡಿ…”

ಖಾನಾಪುರ ತಾಲೂಕಿನಲ್ಲಿ ಮಳೆರಾಯನ ಆರ್ಭಟ ಜೋರಾಗಿದ್ದು, ಖಾನಾಪುರ ಪಟ್ಟಣದ ಹಳೆಯ ತಹಶೀಲ್ದಾರ್ ಕಚೇರಿ ಮುಂಭಾಗದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಉರ್ದು ಹೆಣ್ಣು ಮಕ್ಕಳ ಶಾಲೆಯ ಪರಿಸ್ಥಿತಿ ತೀರಾ ದಯನೀಯವಾಗಿದೆ. ಮೇಲ್ಛಾವಣಿಯಿಂದ ನೀರು ಸೋರುತ್ತಿದ್ದು, ಯಾವುದೇ ಕ್ಷಣದಲ್ಲಾದರೂ ಕಟ್ಟಡ ಕುಸಿಯುವ ಭೀತಿ ಎದುರಾಗಿದೆ. ಇಷ್ಟೇ ಅಲ್ಲದೆ, ಮಳೆಯ ಅಬ್ಬರಕ್ಕೆ ಸಿಲುಕಿ ದೊಡ್ಡ ಗಾತ್ರದ ಹಾವುಗಳು ಶಾಲೆಯ ಕೊಠಡಿಗಳಲ್ಲೇ ಠಿಕಾಣಿ ಹೂಡುತ್ತಿದ್ದು, ವಿದ್ಯಾರ್ಥಿನಿಯರು ದಿನನಿತ್ಯ ತಮ್ಮ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಪಾಠ ಕೇಳುವ ದುಸ್ಥಿತಿ ನಿರ್ಮಾಣವಾಗಿದೆ. ಹೆಣ್ಣು ಮಕ್ಕಳ ಈ ಶಾಲೆಗೆ ಕನಿಷ್ಠ ಸುರಕ್ಷತೆಯೂ ಇಲ್ಲದಿರುವುದು ಪಾಲಕರಲ್ಲಿ ತೀವ್ರ ಆತಂಕ ಮೂಡಿಸಿದೆ.
ಈ ಶಾಲೆಯ ದುರಸ್ತಿ ಹಾಗೂ ವಿದ್ಯಾರ್ಥಿಗಳ ಸುರಕ್ಷತೆಯ ಬಗ್ಗೆ ಪಟ್ಟಣ ಪಂಚಾಯಿತಿ, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೆ ಈಗಾಗಲೇ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಇತ್ತೀಚೆಗಷ್ಟೇ ನಿವೃತ್ತರಾದ ಬಿಇಓ ರಾಮಪ್ಪ ಅವರೂ ಕೂಡ ಈ ಬಗ್ಗೆ ಸಂಪೂರ್ಣ ನಿರ್ಲಕ್ಷ್ಯ ಧೋರಣೆ ತಳೆದಿದ್ದರು ಎಂಬ ಆರೋಪ ಕೇಳಿಬಂದಿದೆ. ಈಗಲಾದರೂ ಹಾಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಜಿಲ್ಲಾ ಡಿಡಿಪಿಐ ಲೀಲಾವತಿ ಹಿರೇಮಠ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಹೆಣ್ಣು ಮಕ್ಕಳ ವಿದ್ಯಾಭ್ಯಾಸಕ್ಕೆ ಸೂಕ್ತ ಹಾಗೂ ಸುರಕ್ಷಿತ ವ್ಯವಸ್ಥೆ ಕಲ್ಪಿಸಿಕೊಡಬೇಕೆಂದು ಪಾಲಕರು ಮತ್ತು ಶಿಕ್ಷಣ ಪ್ರೇಮಿಗಳು ತೀವ್ರವಾಗಿ ಒತ್ತಾಯಿಸಿದ್ದಾರೆ
