ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ವಿಸ್ತರಣೆಯ ಕಾವು ಏರಿದ್ದು, ಇಂದು ರಾತ್ರಿ ಅಥವಾ ನಾಳೆ ಬೆಳಿಗ್ಗೆ ಹೈಕಮಾಂಡ್ನೊಂದಿಗೆ ಮುಖ್ಯಮಂತ್ರಿಗಳು ಚರ್ಚೆ ನಡೆಸಲಿದ್ದಾರೆ. ನಾಳೆಯೇ ಸಂಪುಟ ವಿಸ್ತರಣೆಯ ಸಮಯ ಘೋಷಣೆಯಾಗುವ ಸಾಧ್ಯತೆಯಿದೆ ಎಂದು ಅಥಣಿ ಶಾಸಕ ಲಕ್ಷ್ಮಣ್ ಸವದಿ ಮಹತ್ವದ ಹೇಳಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅಥಣಿ ಶಾಸಕ ಲಕ್ಷ್ಮಣ್ ಸವದಿ, ಮುಖ್ಯಮಂತ್ರಿಗಳು ಹಾಗೂ ಮಾಜಿ ಮುಖ್ಯಮಂತ್ರಿಗಳು ಈಗಾಗಲೇ ದೆಹಲಿಗೆ ತೆರಳಿದ್ದು, ಹೈಕಮಾಂಡ್ ನಾಯಕರೊಂದಿಗೆ ಚರ್ಚಿಸಿ ಸಚಿವ ಸಂಪುಟ ವಿಸ್ತರಣೆಯ ದಿನಾಂಕವನ್ನು ಶೀಘ್ರದಲ್ಲೇ ಅಂತಿಮಗೊಳಿಸಲಿದ್ದಾರೆ ಎಂದರು. ಬೆಳಗಾವಿ ಜಿಲ್ಲೆಗೆ ಹೆಚ್ಚುವರಿ ಸಚಿವ ಸ್ಥಾನ ನೀಡುವ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, “ಹಿಂದೆ ಜನತಾ ಪರಿವಾರದ ಸರ್ಕಾರದ ಅವಧಿಯಲ್ಲಿ ಬೆಳಗಾವಿಗೆ 4-5 ಸಚಿವ ಸ್ಥಾನಗಳನ್ನು ನೀಡಿದ ಉದಾಹರಣೆಗಳಿವೆ, ಹೀಗಾಗಿ ಜಿಲ್ಲೆಗೆ ಹೆಚ್ಚಿನ ಪ್ರಾತಿನಿಧ್ಯ ಕೇಳುವುದರಲ್ಲಿ ತಪ್ಪಿಲ್ಲ. ಆದರೆ ಪ್ರಸ್ತುತ ರಾಜ್ಯದಲ್ಲಿ ಜಿಲ್ಲೆಗಳ ಸಂಖ್ಯೆ ಹೆಚ್ಚಾಗಿದ್ದು, ಮುಂಬರುವ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ವರಿಷ್ಠರು ಸಾಮಾಜಿಕ ಹಾಗೂ ಜಿಲ್ಲಾವಾರು ಸಮತೋಲನ ಕಾಯ್ದುಕೊಂಡು ನಿರ್ಧಾರ ಕೈಗೊಳ್ಳಲಿದ್ದಾರೆ. ನಮಗೆ ವಿಶ್ವಾಸವಿದೆಯಾದರೂ ಹೈಕಮಾಂಡ್ ತೆಗೆದುಕೊಳ್ಳುವ ಅಂತಿಮ ತೀರ್ಮಾನಕ್ಕೆ ನಾವೆಲ್ಲರೂ ಬದ್ಧರಾಗಿರುತ್ತೇವೆ” ಎಂದು ಸ್ಪಷ್ಟಪಡಿಸಿದರು.
