ಬೆಳಗಾವಿ ಜಿಲ್ಲೆ ಹಾಗೂ ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಶಾಸಕರೆಲ್ಲರೂ ಒಗ್ಗೂಡಿ ಮುಖ್ಯಮಂತ್ರಿಗಳನ್ನು ಭೇಟಿಯಾಗಿದ್ದಾರೆ. ಕಳೆದ 30 ವರ್ಷಗಳಿಂದ ಈ ಭಾಗದ ಅಲ್ಪಸಂಖ್ಯಾತರಿಗೆ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ಸಿಕ್ಕಿಲ್ಲ ಎಂಬ ಅಸಮಾಧಾನವಿದ್ದು, ಹೈಕಮಾಂಡ್ ಸೂಕ್ತ ನಿರ್ಧಾರ ಕೈಗೊಳ್ಳುವ ವಿಶ್ವಾಸವಿದೆ ಎಂದು ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಆಸೀಫ್ ಸೇಠ್ ಹೇಳಿದ್ದಾರೆ.

ಇತ್ತೀಚೆಗೆ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಾಸಕ ಆಸೀಫ್ ಸೇಠ್ ಅವರು, ಉತ್ತರ ಕರ್ನಾಟಕ ಮತ್ತು ಬೆಳಗಾವಿ ಜಿಲ್ಲೆಯ ಪ್ರಗತಿಯ ದೃಷ್ಟಿಯಿಂದ ಎಲ್ಲಾ ಶಾಸಕರು ಒಟ್ಟಾಗಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಚರ್ಚಿಸಿದ್ದೇವೆ ಎಂದು ತಿಳಿಸಿದರು. ಈ ಹಿಂದೆ ಉತ್ತರ ಕರ್ನಾಟಕ ಭಾಗಕ್ಕೆ ಮೂರು ಸಚಿವ ಸ್ಥಾನಗಳನ್ನು ನೀಡಲಾಗುತ್ತಿತ್ತು. ಅದೇ ರೀತಿ ಈ ಬಾರಿಯೂ ಮೂರು ಸಚಿವ ಸ್ಥಾನಗಳನ್ನು ಈ ಭಾಗಕ್ಕೆ ನೀಡಬೇಕು ಎಂದು ಮುಖ್ಯಮಂತ್ರಿಗಳಲ್ಲಿ ಒತ್ತಾಯಿಸಲಾಗಿದೆ. ಸಚಿವ ಸ್ಥಾನದ ಆಕಾಂಕ್ಷೆ ಪ್ರತಿಯೊಬ್ಬರಿಗೂ ಇರುವುದು ಸಹಜವಾಗಿದ್ದು, ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಾವೆಲ್ಲರೂ ಬದ್ಧರಾಗಿರುತ್ತೇವೆ ಎಂದು ಅವರು ಸ್ಪಷ್ಟಪಡಿಸಿದರು.
ಮುಂದುವರಿದು ಮಾತನಾಡಿದ ಅವರು, ಬೆಳಗಾವಿ ನಗರ ಸೇರಿದಂತೆ ಇಡೀ ಉತ್ತರ ಕರ್ನಾಟಕ ಭಾಗದಲ್ಲಿ ಕಳೆದ 30 ವರ್ಷಗಳಿಂದ ಅಲ್ಪಸಂಖ್ಯಾತ ಸಮುದಾಯದ ಯಾರಿಗೂ ಸಚಿವ ಸ್ಥಾನದ ಪ್ರಾತಿನಿಧ್ಯ ದೊರೆತಿಲ್ಲ. ಈ ಹಿನ್ನೆಲೆಯಲ್ಲಿ ಈ ಬಾರಿ ಅಲ್ಪಸಂಖ್ಯಾತ ಶಾಸಕರಿಗೆ ಸಚಿವ ಸ್ಥಾನ ನೀಡಬೇಕು ಎಂಬ ಬೇಡಿಕೆಯನ್ನು ಹೈಕಮಾಂಡ್ ಮುಂದಿಡಲಾಗಿದೆ ಎಂದು ಹೇಳಿದರು. ಇದೇ ವೇಳೆ ಹಾಲಿನ ದರ ಏರಿಕೆ ಮತ್ತು ಹಣದುಬ್ಬರದ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಶಾಸಕರು, ಬೆಲೆ ಏರಿಕೆಯಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವುದು ನಿಜ. ಈ ವಿಷಯವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಭರವಸೆ ನೀಡಿದರು.
