Uncategorized

ಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆ: ನರಸಿಂಹವಾಡಿಯ ಪ್ರಸಿದ್ಧ ದತ್ತ ದೇಗುಲ ಜಲಾವೃತ

Share

ಚಿಕ್ಕೋಡಿ: ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನದಿಗಳು ಉಕ್ಕಿ ಹರಿಯುತ್ತಿದ್ದು, ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ನರಸಿಂಹವಾಡಿಯ ದತ್ತಾತ್ರೇಯ ದೇವಸ್ಥಾನವು ಜಲಾವೃತಗೊಂಡಿದೆ.

ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ಶಿರೋಳ ತಾಲ್ಲೂಕಿನಲ್ಲಿ ಹರಿಯುವ ಕೃಷ್ಣಾ ಮತ್ತು ಪಂಚಗಂಗಾ ನದಿಗಳಿಗೆ ಅಪಾರ ಪ್ರಮಾಣದ ನೀರು ಹರಿದುಬರುತ್ತಿದೆ. ಈ ಎರಡೂ ನದಿಗಳ ಸಂಗಮ ಸ್ಥಾನದಲ್ಲಿಯೇ ದತ್ತಾತ್ರೇಯ ದೇವಸ್ಥಾನವಿದ್ದು, ನದಿಗಳ ನೀರಿನ ಮಟ್ಟ ದಿಢೀರನೆ ಏರಿಕೆಯಾದ ಕಾರಣ ಇಡೀ ದೇಗುಲವನ್ನು ನೀರು ಸುತ್ತುವರಿದಿದೆ.

ಸದ್ಯ ದೇವಸ್ಥಾನದ ಗರ್ಭಗುಡಿ ಹಾಗೂ ಆವರಣ ಸಂಪೂರ್ಣವಾಗಿ ನೀರಿನಲ್ಲಿ ಮುಳುಗಡೆಯಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಸಾರ್ವಜನಿಕರು ಹಾಗೂ ಭಕ್ತರ ಪ್ರವೇಶವನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ. ನದಿ ತೀರದ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸ್ಥಳೀಯ ಆಡಳಿತವು ಸೂಚನೆ ನೀಡಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ಘಟ್ಟ ಪ್ರದೇಶದಲ್ಲಿ ಮಳೆ ಹೀಗೆಯೇ ಮುಂದುವರಿದರೆ ನೀರಿನ ಮಟ್ಟ ಮತ್ತಷ್ಟು ಹೆಚ್ಚಾಗುವ ಆತಂಕ ಎದುರಾಗಿದೆ.

 

Tags:

error: Content is protected !!