Chikkodi

ಚಿಕ್ಕೋಡಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ: ಎಸಿ ಸುಭಾಷ ಸಂಪಗಾವಿ ಧ್ವಜಾರೋಹಣ

Share

ಆರ್.ಡಿ.ಹೈಸ್ಕೂಲ್ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ವಿಜೃಂಭಣೆ ಹಾಗೂ ಸಡಗರದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಉಪವಿಭಾಗಾಧಿಕಾರಿ ಸುಭಾಷ ಸಂಪಗಾವಿ ಅವರು ಧ್ವಜಾರೋಹಣ ನೆರವೇರಿಸಿದರು.

ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಎಸಿ ಸುಭಾಷ ಸಂಪಗಾವಿ ಇಂದು ದೇಶಾದ್ಯಂತ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಡಗರದಿಂದ ಆಚರಿಸಲಾಗುತ್ತಿದೆ. ನಮಗೆ ಸ್ವಾತಂತ್ರ್ಯ ತಂದುಕೊಡಲು ಸಾವಿರಾರು ಹೋರಾಟಗಾರರು ತಮ್ಮ ಪ್ರಾಣವನ್ನೇ ಬಲಿದಾನ ಮಾಡಿದ್ದಾರೆ. ಅವರ ತ್ಯಾಗ ಮತ್ತು ಸ್ಮರಣೆಯನ್ನು ನೆನೆಯುವ ದಿನ ಇದಾಗಿದೆ. ತ್ರಿವರ್ಣ ಧ್ವಜವನ್ನು ಹೊಂದಿರುವ ನಮ್ಮ ಭಾರತವು ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ ದೇಶವಾಗಿದೆ. ಜನರ ಮತ್ತು ದೇಶದ ಸಾಮಾಜಿಕ ಅಭಿವೃದ್ಧಿಗಾಗಿ ಸರ್ಕಾರಗಳು ಶ್ರಮಿಸುತ್ತಿದ್ದು, ನಾವೆಲ್ಲರೂ ಒಟ್ಟಾಗಿ ದೇಶದ ಪ್ರಗತಿಗೆ ಶ್ರಮಿಸೋಣ ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಮಹಾನ ವ್ಯಕ್ತಿಗಳ ತ್ಯಾಗ ಹಾಗೂ ಬಲಿದಾನದ ಫಲವಾಗಿ ನಮಗೆ ಸ್ವಾತಂತ್ರ್ಯ ಸಿಕ್ಕಿದೆ. ಅದನ್ನು ನಾವೆಲ್ಲರೂ ಸದಾ ಸ್ಮರಿಸಬೇಕು.ಮಕ್ಕಳಿಗೆ ಮಾಲಿನ್ಯದ ಕುರಿತು ಜಾಗೃತಿ ಮೂಡಿಸುವುದು ಇಂದಿನ ಅಗತ್ಯವಾಗಿದೆ. ದೆಹಲಿ ಪ್ರತಿಭಟನೆಯ ಯಶಸ್ಸು ಯುವಶಕ್ತಿಯ ಸಾಮರ್ಥ್ಯವನ್ನು ಎತ್ತಿ ತೋರಿಸಿದೆ. ಸಂವಿಧಾನಕ್ಕೆ ಧಕ್ಕೆ ಬಂದಾಗ ನಾವೆಲ್ಲರೂ ಒಗ್ಗಟ್ಟಾಗಿ ನಿಲ್ಲಬೇಕು. ಯುವಕರು ತಾಳ್ಮೆಯಿಂದ ಕಷ್ಟಗಳನ್ನು ಎದುರಿಸಿ, ದೇಶದ ಹಿತಾಸಕ್ತಿ ಬಂದಾಗ ಒಂದಾಗಬೇಕು ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಚಿಕ್ಕೋಡಿ ಶಾಸಕ ಗಣೇಶ ಹುಕ್ಕೇರಿ ಮಾತನಾಡಿ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗವೇ ನಮಗೆ ಸದಾ ಸ್ಪೂರ್ತಿ. ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿದ ಸಂವಿಧಾನದಿಂದಾಗಿ ನಾವಿಂದು ಸೌಹಾರ್ದತೆಯಿಂದ ಬಾಳುತ್ತಿದ್ದೇವೆ. ಪ್ರಸ್ತುತ ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳು ಜನಸಾಮಾನ್ಯರಿಗೆ ಅತ್ಯಂತ ಅನುಕೂಲಕರವಾಗಿವೆ. ಸಾರ್ವಜನಿಕರ ಸುದೀರ್ಘ ಬೇಡಿಕೆಯಾದ ಚಿಕ್ಕೋಡಿಯನ್ನು ಪ್ರತ್ಯೇಕ ಜಿಲ್ಲೆಯಾಗಿ ಆದಷ್ಟು ಬೇಗ ಘೋಷಣೆ ಮಾಡಲಾಗುವುದು ಎಂದು ಭರವಸೆ ನೀಡಿದರು.

ಸಭಾ ಕಾರ್ಯಕ್ರಮದ ನಂತರ ಚಿಕ್ಕೋಡಿ ಪಟ್ಟಣದ ವಿವಿಧ ಶಾಲಾ-ಕಾಲೇಜು ಮಕ್ಕಳಿಂದ ದೇಶಭಕ್ತಿ ಗೀತೆಗಳಿಗೆ ಆಕರ್ಷಕ ನೃತ್ಯ ಮತ್ತು ಸಾಂಸ್ಕೃತಿಕ ಪ್ರದರ್ಶನಗಳು ಜರುಗಿದವು. ಮಕ್ಕಳ ರೋಮಾಂಚಕ ಅಭಿನಯವು ನೆರೆದಿದ್ದ ಸಾರ್ವಜನಿಕರ ಮನಸ್ಸನ್ನು ಸೂರೆಗೊಂಡಿತು.

ಈ ಸಮಾರಂಭದಲ್ಲಿ ಮಾಜಿ ಶಾಸಕ ಬಾಳಾಸಾಹೇಬ ಒಡ್ಡರ, ಪುರಸಭೆ ಸದಸ್ಯರಾದ ರಾಮಾ ಮಾನೆ, ಈರಫಾನ ಬೇಪಾರಿ, ಸಾಬೀರ ಜಮಾದಾರ, ಪ್ರಭಾಕರ ಈರಪ್ಪ ಕೋರೆ, ಡಿವೈಎಸ್ಪಿ ಗೋಪಾಲಕೃಷ್ಣ ಗೌಡರ, ತಹಶಿಲ್ದಾರ ರಾಜೇಶ ಬುರ್ಲಿ, ಸಿಪಿಐ ವಿಶ್ವನಾಥ ಚೌಗಲಾ, ತಾಲೂಕು ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ರಮೇಶ ಪಾಟೀಲ್ ಸೇರಿದಂತೆ ಹಲವು ಜನಪ್ರತಿನಿಧಿಗಳು, ಸರ್ಕಾರಿ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Tags:

error: Content is protected !!