ಬೆಳಗಾವಿ ಗ್ರಾಮೀಣ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಇಸ್ಪೀಟ್ ಜೂಜಾಟದ ಅಡ್ಡೆ ಮೇಲೆ ಪೊಲೀಸರು ಮಿಂಚಿನ ದಾಳಿ ನಡೆಸಿದ್ದಾರೆ. ಜೂಜಾಟದಲ್ಲಿ ತೊಡಗಿದ್ದ 15 ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಂದ ನಗದು ಹಣ ಮತ್ತು ಇಸ್ಪೀಟ್ ಎಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ವಾಘವಾಡೆ ಗ್ರಾಮದ ಮಾರ್ಕಂಡೇಯ ನಗರದ ಸಾರ್ವಜನಿಕ ಸ್ಥಳದಲ್ಲಿ ಹಣವನ್ನು ಪಣವಾಗಿಟ್ಟು ಅಕ್ರಮವಾಗಿ ಇಸ್ಪೀಟ್ ಆಡುತ್ತಿದ್ದ ಅಡ್ಡೆಯ ಮೇಲೆ ಬೆಳಗಾವಿ ಗ್ರಾಮೀಣ ಠಾಣೆಯ ಪಿಎಸ್ಐ ಸಂತೋಷ ದಳವಾಯಿ ಹಾಗೂ ಸಿಬ್ಬಂದಿಯವರು ಯಶಸ್ವಿ ದಾಳಿ ನಡೆಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಅಭಿಷೇಕ ಭೋಸಲೆ, ಪರುಶರಾಮ ಶಿಂಧೆ ಸೇರಿದಂತೆ ಒಟ್ಟು 15 ಜನ ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಂದ 69,150 ರೂಪಾಯಿ ನಗದು ಹಣ ಹಾಗೂ ಇಸ್ಪೀಟ್ ಎಲೆಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ಈ ಕುರಿತು ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಯಶಸ್ವಿ ದಾಳಿ ನಡೆಸಿದ ಪೊಲೀಸ್ ತಂಡದ ಕಾರ್ಯಕ್ಕೆ ನಗರ ಪೊಲೀಸ್ ಆಯುಕ್ತರು ಹಾಗೂ ಡಿಸಿಪಿ ಅವರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

