ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಆರೋಪ ಹೊತ್ತಿರುವ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಎದುರು ಬಿಜೆಪಿ ನಡೆಸುತ್ತಿರುವ ಪ್ರತಿಭಟನೆ ಮೂರನೇ ದಿನಕ್ಕೆ ಕಾಲಿಟ್ಟಿದೆ. ಸರಕಾರ ತಕ್ಷಣವೇ ಸಚಿವರ ರಾಜೀನಾಮೆ ಪಡೆಯದಿದ್ದರೆ ಹೋರಾಟವನ್ನು ಹಳ್ಳಿ ಹಳ್ಳಿಗೂ ವ್ಯಾಪಿಸುವುದಾಗಿ ಬಿಜೆಪಿ ನಾಯಕರು ಎಚ್ಚರಿಕೆ ನೀಡಿದ್ದಾರೆ.

ಕಾಂಗ್ರೆಸ್ ಸರ್ಕಾರದಲ್ಲಿ ನಡೆದಿದೆ ಎನ್ನಲಾದ 187 ಕೋಟಿ ರೂಪಾಯಿಗಳ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಭಾಗಿಯಾದ ಬಿ. ನಾಗೇಂದ್ರ ಅವರನ್ನು ಮತ್ತೆ ಮಂತ್ರಿಮಂಡಲಕ್ಕೆ ಸೇರಿಸಿಕೊಂಡಿರುವುದಕ್ಕೆ ಬಿಜೆಪಿ ಮುಖಂಡ ಪೃಥ್ವಿ ಕತ್ತಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಗರಣದ ಆರೋಪ ಎದುರಿಸುತ್ತಿರುವವರನ್ನು ಜೈಲಿಗಟ್ಟುವ ಬದಲು ಮತ್ತೆ ಯೋಜನಾ ಮತ್ತು ಸಾಂಖ್ಯಿಕ ಸಚಿವರನ್ನಾಗಿ ಮಾಡಿರುವುದು ಲೂಟಿ ಮಾಡಿದ ಹಣವನ್ನು ಮುಚ್ಚಿಡಲು ಮಾಡಿದ ಪ್ಲಾನಿಂಗ್ ಎಂದು ಅವರು ವಾಗ್ದಾಳಿ ನಡೆಸಿದರು. ಮುಖ್ಯಮಂತ್ರಿಗಳು ತಕ್ಷಣವೇ ಈ ಸಚಿವರ ರಾಜೀನಾಮೆ ಪಡೆದು ಬೇರೆ ಅರ್ಹ ಶಾಸಕರಿಗೆ ಅವಕಾಶ ನೀಡಬೇಕು, ಇಲ್ಲದಿದ್ದರೆ ರಾಜ್ಯ ಹಾಗೂ ರಾಷ್ಟ್ರ ಮಟ್ಟದ ನಾಯಕರೊಂದಿಗೆಗೂಡಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಇದೇ ವೇಳೆ ಮಾತನಾಡಿದ ಮಾಜಿ ಶಾಸಕ ವಿ. ಐ. ಪಾಟೀಲ್, ನಿಗಮದ 187 ಕೋಟಿ ರೂಪಾಯಿ ಹಣವನ್ನು ಲೋಕಸಭಾ ಚುನಾವಣೆ ಹಾಗೂ ಸಂಬಂಧಿಕರ ಖಾತೆಗಳಿಗೆ ಅಕ್ರಮವಾಗಿ ವರ್ಗಾಯಿಸಲಾಗಿದೆ ಎಂದು ಆರೋಪಿಸಿದರು. ಭ್ರಷ್ಟಾಚಾರದಲ್ಲಿ ಮುಳುಗಿರುವ ಸಚಿವ ನಾಗೇಂದ್ರ ಅವರ ರಾಜೀನಾಮೆಯನ್ನು ಸರ್ಕಾರ ತಕ್ಷಣವೇ ಪಡೆಯಬೇಕು. ಇಲ್ಲವಾದಲ್ಲಿ ಮುಂಬರುವ ದಿನಗಳಲ್ಲಿ ತಾಲೂಕು ಮತ್ತು ಗ್ರಾಮೀಣ ಮಟ್ಟದಲ್ಲೂ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
