ಮಳೆ ಕೊರತೆಯಿಂದ ಬೆಳೆ ಹಾನಿಗೊಳಗಾದ ಯರಗಟ್ಟಿ, ಸವದತ್ತಿ ಹಾಗೂ ರಾಮದುರ್ಗ ತಾಲ್ಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸುವಂತೆ ರಾಜ್ಯ ಸರ್ಕಾರಕ್ಕೆ ಜಿಲ್ಲಾಡಳಿತದಿಂದ ಎರಡು ದಿನಗಳಲ್ಲಿ ವರದಿ ಸಲ್ಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದರು.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂರು ತಾಲ್ಲೂಕುಗಳಲ್ಲಿ ಸುಮಾರು 29 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆದ ಹೆಸರು ಹಾಗೂ ಉದ್ದಿನ ಬೆಳೆ ಸಂಪೂರ್ಣ ಹಾನಿಯಾಗಿದೆ. ಹೀಗಾಗಿ ಹಾನಿಗೊಳಗಾದ ಬೆಳೆಗಳಿಗೆಹ ಮಧ್ಯಂತರ ಪರಿಹಾರ ಘೋಷಿಸಲಾಗಿದ್ದು, ರೈತರಿಗೆ ಪ್ರತಿ ಎಕರೆಗೆ 2,500 ರೂ.ವಿಮಾ ಪರಿಹಾರ ದೊರೆಯಲಿದೆ ಎಂದರು.
ಅಥಣಿ ಹಾಗೂ ಕಾಗವಾಡ ತಾಲ್ಲೂಕುಗಳಲ್ಲಿಯೂ ಮಳೆ ಕೊರತೆ ಕಂಡುಬಂದಿದೆ. ಈ ತಾಲ್ಲೂಕುಗಳಲ್ಲಿನ ಪರಿಸ್ಥಿತಿಯ ಬಗ್ಗೆಯೂ ಸರ್ಕಾರಕ್ಕೆ ಪ್ರತ್ಯೇಕ ವರದಿ ಸಲ್ಲಿಸಲಾಗುವುದು ಎಂದು ಹೇಳಿದರು.
